Revised Common Lectionary (Semicontinuous)
ರಚನೆಗಾರ: ದಾವೀದ.
20 ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಮೊರೆಯನ್ನು ಕೇಳಲಿ.
ಯಾಕೋಬನ ದೇವರು ನಿನ್ನ ಹೆಸರನ್ನು ಪ್ರಖ್ಯಾತಿಪಡಿಸಲಿ.
2 ಆತನು ತನ್ನ ಪವಿತ್ರ ಸ್ಥಳದಿಂದ ನಿನಗೆ ಸಹಾಯಮಾಡಲಿ.
ಚೀಯೋನಿನಿಂದ ನಿನಗೆ ಆಧಾರ ನೀಡಲಿ.
3 ನೀನು ಅರ್ಪಿಸಿದ ಕಾಣಿಕೆಗಳನ್ನೆಲ್ಲ ಆತನು ಜ್ಞಾಪಿಸಿಕೊಳ್ಳಲಿ.
ನಿನ್ನ ಯಜ್ಞಗಳನ್ನೆಲ್ಲ ಆತನು ಸ್ವೀಕರಿಸಿಕೊಳ್ಳಲಿ.
4 ಆತನು ನಿನ್ನ ಬಯಕೆಗಳನ್ನು ಈಡೇರಿಸಲಿ.
ನಿನ್ನ ಆಲೋಚನೆಗಳನ್ನೆಲ್ಲ ನೆರವೇರಿಸಲಿ.
5 ದೇವರು ನಿನಗೆ ಸಹಾಯಮಾಡುವಾಗ ಹರ್ಷಿಸುವೆವು.
ಆತನ ಹೆಸರನ್ನು ಕೊಂಡಾಡೋಣ.
ಯೆಹೋವನು ನಿನ್ನ ಕೋರಿಕೆಗಳನ್ನೆಲ್ಲ ನೆರವೇರಿಸಲಿ.
6 ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಸಹಾಯಮಾಡುತ್ತಾನೆಂದು ಈಗ ನನಗೆ ಗೊತ್ತಾಯಿತು.
ದೇವರು ತಾನು ಆರಿಸಿಕೊಂಡ ರಾಜನಿಗೆ ಪರಲೋಕದಿಂದ ಉತ್ತರಿಸಿದನು;
ತನ್ನ ಮಹಾಶಕ್ತಿಯಿಂದ ಅವನನ್ನು ರಕ್ಷಿಸಿದನು.
7 ಕೆಲವರು ತಮ್ಮ ರಥಗಳಲ್ಲಿ ಭರವಸವಿಡುವರು.
ಕೆಲವರು ತಮ್ಮ ಸೈನಿಕರುಗಳಲ್ಲಿ ಭರವಸವಿಡುವರು.
ನಾವಾದರೋ ನಮ್ಮ ದೇವರಾದ ಯೆಹೋವನನ್ನೇ ಜ್ಞಾಪಿಸಿಕೊಳ್ಳುವೆವು.
8 ಅವರು ಸೋತುಹೋದರು; ಯುದ್ಧದಲ್ಲಿ ಸತ್ತುಹೋದರು;
ನಾವಾದರೋ ಜಯಗಳಿಸಿದೆವು! ನಾವು ಜಯಪ್ರದರಾಗಿ ನಿಂತುಕೊಳ್ಳುವೆವು!
9 ಯಾಕೆಂದರೆ ಯೆಹೋವನು ತಾನು ಅಭಿಷೇಕಿಸಿದ ರಾಜನನ್ನು ರಕ್ಷಿಸಿದನು!
ನಾವು ಸಹಾಯಕ್ಕಾಗಿ ಮೊರೆಯಿಟ್ಟಾಗ ಆತನು ಸದುತ್ತರವನ್ನು ದಯಪಾಲಿಸಿದನು.
ದೇವರು ಅಬ್ರಾಮನನ್ನು ಕರೆದದ್ದು
12 ಯೆಹೋವನು ಅಬ್ರಾಮನಿಗೆ,
“ನಿನ್ನ ದೇಶವನ್ನೂ ನಿನ್ನ ಜನರನ್ನೂ ಬಿಟ್ಟು ಹೊರಡು.
ನಿನ್ನ ತಂದೆಯ ಕುಟುಂಬವನ್ನು ಬಿಟ್ಟು
ನಾನು ತೋರಿಸುವ ದೇಶಕ್ಕೆ ಹೋಗು.
2 ನಾನು ನಿನ್ನನ್ನು ಆಶೀರ್ವದಿಸುವೆನು;
ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡಿ
ನಿನ್ನ ಹೆಸರನ್ನು ಪ್ರಖ್ಯಾತಿಪಡಿಸುವೆನು;
ನೀನು ಆಶೀರ್ವಾದದಾಯಕನಾಗುವಂತೆ[a] ಮಾಡುವೆನು.
3 ನಿನಗೆ ಒಳ್ಳೆಯದನ್ನು ಮಾಡುವವರನ್ನು ಆಶೀರ್ವದಿಸುವೆನು;
ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು.
ನಿನ್ನ ನಿಮಿತ್ತವಾಗಿ ಲೋಕದವರೆಲ್ಲರೂ
ಆಶೀರ್ವಾದ ಹೊಂದುವರು” ಎಂದು ಹೇಳಿದನು.
ಕಾನಾನಿಗೆ ಅಬ್ರಾಮನ ಪ್ರಯಾಣ
4 ಆದ್ದರಿಂದ ಅಬ್ರಾಮನು ಯೆಹೋವನಿಗೆ ವಿಧೇಯನಾದನು. ಅವನು ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟನು. ಅವನೊಡನೆ ಲೋಟನು ಸಹ ಹೋದನು. ಆಗ ಅಬ್ರಾಮನಿಗೆ ಎಪ್ಪತ್ತೈದು ವರ್ಷ ವಯಸ್ಸಾಗಿತ್ತು. 5 ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಒಬ್ಬಂಟಿಗನಾಗಿ ಹೋಗಲಿಲ್ಲ. ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ತಮ್ಮನ ಮಗನಾದ ಲೋಟನನ್ನೂ ತನ್ನೊಂದಿಗೆ ಕರೆದುಕೊಂಡು ಹೋದನು. ಹಾರಾನ್ ಪಟ್ಟಣದಲ್ಲಿ ತಮಗಿದ್ದ ಸ್ವತ್ತುಗಳನ್ನೆಲ್ಲ ಅವರು ತೆಗೆದುಕೊಂಡು ಹೋದರು. ಅಬ್ರಾಮನು ಹಾರಾನ್ ಪಟ್ಟಣದಲ್ಲಿ ಹೊಂದಿದ್ದ ಸೇವಕರು ಸಹ ಅವನೊಡನೆ ಹೋದರು. ಅಬ್ರಾಮನು ಮತ್ತು ಅವನ ಸಂಗಡಿಗರು ಹಾರಾನ್ ಪಟ್ಟಣವನ್ನು ಬಿಟ್ಟು ಕಾನಾನ್ ದೇಶಕ್ಕೆ ಪ್ರಯಾಣಮಾಡಿದರು. 6 ಅಬ್ರಾಮನು ಕಾನಾನ್ ದೇಶದಲ್ಲಿ ಪ್ರಯಾಣವನ್ನು ಮುಂದುವರಿಸಿದನು. ಅವನು ಶೆಕೆಮ್ ನಗರವನ್ನು ತಲುಪಿ, ಅಲ್ಲಿಂದ ಮೋರೆ ಎಂಬ ದೊಡ್ಡ ಓಕ್ ಮರವಿದ್ದ ಸ್ಥಳಕ್ಕೆ ಬಂದನು. ಆ ಕಾಲದಲ್ಲಿ ಕಾನಾನ್ಯರು ಆ ದೇಶದಲ್ಲಿ ವಾಸವಾಗಿದ್ದರು.
7 ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡು, “ನಿನ್ನ ಸಂತತಿಯವರಿಗೆ ಈ ದೇಶವನ್ನು ಕೊಡುವೆನು” ಎಂದು ಹೇಳಿದನು.
ಆ ಸ್ಥಳದಲ್ಲಿ ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡನು. ಆದ್ದರಿಂದ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು.
ನಂಬಿಕೆ
11 ನಂಬಿಕೆ ಎಂದರೆ ನಾವು ನಿರೀಕ್ಷೆಯಿಂದಿರುವ ಸಂಗತಿಗಳಲ್ಲಿ ಭರವಸದಿಂದಿರುವುದೂ ನಮ್ಮ ಕಣ್ಣಿಗೆ ಕಾಣದಿರುವುದನ್ನು ನಿಜವೆಂದು ತಿಳಿದುಕೊಳ್ಳುವುದೂ ಆಗಿದೆ. 2 ಬಹಳ ಹಿಂದಿನ ಕಾಲದಲ್ಲಿ ಜೀವಿಸಿದ್ದ ಜನರಲ್ಲಿ ಈ ರೀತಿಯ ನಂಬಿಕೆಯಿದ್ದುದರಿಂದ ದೇವರು ಅವರ ವಿಷಯದಲ್ಲಿ ಸಂತೋಷಪಟ್ಟನು.
3 ದೇವರು ತನ್ನ ಆಜ್ಞೆಯಿಂದ ಈ ಲೋಕವನ್ನು ಸೃಷ್ಟಿಸಿದನೆಂಬುದನ್ನು ಅರ್ಥಮಾಡಿಕೊಳ್ಳಲು ನಂಬಿಕೆ ನಮಗೆ ಸಹಾಯ ಮಾಡುತ್ತದೆ. ಹೇಗೆಂದರೆ ನಮ್ಮ ಕಣ್ಣಿಗೆ ಕಾಣುವಂಥ ವಸ್ತುಗಳಿಂದ ಈ ಜಗತ್ತು ಸೃಷ್ಟಿಯಾಗಲಿಲ್ಲ.
4 ಕಾಯಿನ ಮತ್ತು ಹೇಬೆಲರಿಬ್ಬರೂ ದೇವರಿಗೆ ಯಜ್ಞಗಳನ್ನು ಅರ್ಪಿಸಿದರು. ಆದರೆ ಹೇಬೆಲನಲ್ಲಿ ನಂಬಿಕೆಯಿದ್ದುದರಿಂದ ಅವನು ದೇವರಿಗೆ ಉತ್ತಮವಾದ ಯಜ್ಞವನ್ನು ಅರ್ಪಿಸಿದನು. ಅವನು ಅರ್ಪಿಸಿದ ವಸ್ತುಗಳಿಂದ ತನಗೆ ಸಂತೋಷವಾಯಿತೆಂದು ದೇವರೇ ಹೇಳಿದನು. ಅವನಲ್ಲಿ ನಂಬಿಕೆಯಿದ್ದುದರಿಂದ ದೇವರು ಅವನನ್ನು ಒಳ್ಳೆಯ ಮನುಷ್ಯನೆಂದು ಕರೆದನು. ಹೇಬೆಲನು ಸತ್ತುಹೋದನು, ಆದರೂ ತನ್ನ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.
5 ಹನೋಕನು ಸಾವನ್ನು ಅನುಭವಿಸದೆ ಈ ಲೋಕದಿಂದ ಮೇಲೋಕಕ್ಕೆ ಒಯ್ಯಲ್ಪಟ್ಟನು. ಪವಿತ್ರ ಗ್ರಂಥವು ಹೇಳುವಂತೆ, ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರಿಗೆ ನಿಜವಾಗಿಯೂ ಮೆಚ್ಚಿಕೆಯಾಗಿದ್ದನು. ತರುವಾಯ ಜನರಿಗೆ ಅವನು ಸಿಕ್ಕಲೇ ಇಲ್ಲ. ಅವನ ನಂಬಿಕೆಯ ದೆಸೆಯಿಂದ ದೇವರು ಅವನನ್ನು ತನ್ನೊಡನಿರಲು ಕೊಂಡೊಯ್ದನು. 6 ನಂಬಿಕೆಯಿಲ್ಲದೆ ದೇವರನ್ನು ಯಾರೂ ಮೆಚ್ಚಿಸಲಾಗುವುದಿಲ್ಲ. ದೇವರ ಬಳಿಗೆ ಬರುವ ಯಾರೇ ಆಗಲಿ, ದೇವರು ಇದ್ದಾನೆಂತಲೂ ಆತನನ್ನು ಮನಃಪೂರ್ವಕವಾಗಿ ಹುಡುಕುವ ಜನರಿಗೆ ಆತನು ಪ್ರತಿಫಲವನ್ನು ಕೊಡುತ್ತಾನೆಂತಲೂ ನಂಬಬೇಕು.
7 ಕಣ್ಣಿಗೆ ಇನ್ನೂ ಕಾಣದಿದ್ದ ಸಂಗತಿಗಳ ಬಗ್ಗೆ ದೇವರು ನೋಹನನ್ನು ಎಚ್ಚರಿಸಿದನು. ನೋಹನು ದೇವರಲ್ಲಿ ನಂಬಿಕೆಯಿಟ್ಟಿದ್ದನು ಮತ್ತು ಭಕ್ತಿಯುಳ್ಳವನಾಗಿದ್ದನು. ಆದ್ದರಿಂದ ಅವನು ತನ್ನ ಕುಟುಂಬ ರಕ್ಷಣೆಗಾಗಿ ದೊಡ್ಡ ನಾವೆಯನ್ನು ಕಟ್ಟಿ, ಈ ಲೋಕದ ತಪ್ಪನ್ನು ತೋರ್ಪಡಿಸಿದನು. ಹೀಗೆ, ನಂಬಿಕೆಯ ಮೂಲಕ ನೀತಿವಂತರಾದ ಜನರಲ್ಲಿ ಅವನೂ ಒಬ್ಬನಾದನು.
8 ದೇವರು ತಾನು ಕೊಡುತ್ತೇನೆಂದು ವಾಗ್ದಾನ ಮಾಡಿದ್ದ ಸ್ಥಳಕ್ಕೆ ಪ್ರಯಾಣ ಮಾಡಬೇಕೆಂದು ಅಬ್ರಹಾಮನನ್ನು ಕರೆದನು. ಆ ಸ್ಥಳವು ಎಲ್ಲಿದೆಯೆಂಬುದು ಅವನಿಗೆ ತಿಳಿದಿರಲಿಲ್ಲ. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ, ದೇವರಿಗೆ ವಿಧೇಯನಾಗಿ ಪ್ರಯಾಣ ಮಾಡಲಾರಂಭಿಸಿದನು. 9 ದೇವರು ಕೊಡುವುದಾಗಿ ವಾಗ್ದಾನ ಮಾಡಿದ್ದ ದೇಶದಲ್ಲಿ ಅವನು ಪ್ರವಾಸಿಗನಂತೆ ವಾಸಮಾಡಿದ್ದು ನಂಬಿಕೆಯಿಂದಲೇ. ಅದೇ ವಾಗ್ದಾನಕ್ಕೆ ಸಹ ಭಾದ್ಯರಾಗಿದ್ದ ಇಸಾಕನೂ ಯಾಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು. 10 ಅಬ್ರಹಾಮನು ಶಾಶ್ವತವಾದ ಅಡಿಪಾಯಗಳುಳ್ಳ ನಗರಕ್ಕಾಗಿ ಕಾದಿದ್ದನು. ದೇವರೇ ಸಂಕಲ್ಪಿಸಿ, ನಿರ್ಮಿಸಿದ ನಗರಕ್ಕಾಗಿ ಅವನು ಕಾದಿದ್ದನು.
11 ಅಬ್ರಹಾಮನು ಮಕ್ಕಳನ್ನು ಪಡೆಯಲಾಗದಷ್ಟು ವೃದ್ಧನಾಗಿದ್ದನು. ಸಾರಳು ಮಕ್ಕಳನ್ನು ಪಡೆಯಲು ಸಮರ್ಥಳಾಗಿರಲಿಲ್ಲ. ಆದರೆ ಅಬ್ರಹಾಮನಿಗೆ ದೇವರಲ್ಲಿ ನಂಬಿಕೆಯಿದ್ದುದರಿಂದ, ಅವರು ಮಕ್ಕಳನ್ನು ಪಡೆಯಲು ಸಮರ್ಥರಾಗುವಂತೆ ದೇವರು ಮಾಡಿದನು. 12 ಅವನು ಮೃತಪ್ರಾಯನಾಗಿದ್ದವನಂತೆ ವೃದ್ಧನಾಗಿದ್ದರೂ ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಉಸುಬಿನಂತೆಯೂ ಅಸಂಖ್ಯಾತವಾಗಿ ಮಕ್ಕಳು ಹುಟ್ಟಿದರು.
Kannada Holy Bible: Easy-to-Read Version. All rights reserved. © 1997 Bible League International