Revised Common Lectionary (Semicontinuous)
ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ.
121 ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ.
ನನಗೆ ಸಹಾಯವು ಎಲ್ಲಿಂದ ಬರುವುದು?
2 ಭೂಮ್ಯಾಕಾಶಗಳ ಸೃಷ್ಟಿಕರ್ತನಾದ ಯೆಹೋವನಿಂದಲೇ
ನನಗೆ ಸಹಾಯವು ಬರುವುದು.
3 ಆತನು ನಿನ್ನನ್ನು ಬೀಳಗೊಡಿಸುವುದಿಲ್ಲ;
ನಿನ್ನ ಸಂರಕ್ಷಕನು ನಿದ್ರೆಹೋಗುವುದಿಲ್ಲ.
4 ಇಸ್ರೇಲಿನ ಸಂರಕ್ಷಕನು ತೂಕಡಿಸುವುದಿಲ್ಲ,
ನಿದ್ರಿಸುವುದೂ ಇಲ್ಲ!
5 ನಿನ್ನನ್ನು ಕಾಯುವವನು ಯೆಹೋವನೇ.
ನಿನ್ನನ್ನು ರಕ್ಷಿಸಲು ಆತನು ನಿನ್ನ ಬಲಗಡೆಯಲ್ಲಿ ನಿಂತಿದ್ದಾನೆ.
6 ಹಗಲಲ್ಲಿ ಸೂರ್ಯನೂ
ರಾತ್ರಿಯಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವುದಿಲ್ಲ.
7 ಯೆಹೋವನು ನಿನ್ನನ್ನು ಎಲ್ಲಾ ಅಪಾಯಗಳಿಂದ ರಕ್ಷಿಸುವನು;
ನಿನ್ನ ಪ್ರಾಣವನ್ನು ಕಾಯುವನು.
8 ನೀನು ಹೋಗುವಾಗಲೂ ಬರುವಾಗಲೂ ಯೆಹೋವನು ನಿನಗೆ ಸಹಾಯಮಾಡುವನು.
ಆತನು ನಿನ್ನನ್ನು ಸದಾಕಾಲ ಕಾಪಾಡುವನು.
ಇಸ್ರೇಲ್ ಅಬ್ರಹಾಮನಂತೆ ಇರಬೇಕು
51 “ಒಳ್ಳೆಯವರಾಗಿ ಜೀವಿಸಲು ಬಹಳವಾಗಿ ಪ್ರಯತ್ನಿಸುತ್ತಿರುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ. ನಿಮ್ಮ ಪಿತೃವಾದ ಅಬ್ರಹಾಮನನ್ನೇ ದೃಷ್ಟಿಸಿ ನೋಡಿರಿ; ಆ ಬಂಡೆಯೊಳಗಿಂದಲೇ ನೀವು ತೆಗೆಯಲ್ಪಟ್ಟಿದ್ದೀರಿ. 2 ನಿಮ್ಮ ಪಿತೃವಾದ ಅಬ್ರಹಾಮನನ್ನೂ ನಿಮ್ಮ ಮಾತೆಯಾದ ಸಾರಳನ್ನೂ ದೃಷ್ಟಿಸಿರಿ; ನಾನು ಕರೆದಾಗ ಅಬ್ರಹಾಮನು ಒಬ್ಬಂಟಿಗನಾಗಿದ್ದನು. ನಾನು ಅವನನ್ನು ಆಶೀರ್ವದಿಸಿ, ಅವನ ಸಂತಾನವನ್ನು ಅಭಿವೃದ್ಧಿಪಡಿಸಿ, ಅವನನ್ನು ಮಹಾಜನಾಂಗದ ಮೂಲಪುರುಷನನ್ನಾಗಿ ಮಾಡಿದೆನು.”
3 ಅದೇ ರೀತಿಯಲ್ಲಿ ಯೆಹೋವನು ಚೀಯೋನನ್ನು ಮತ್ತು ನಿರ್ಜನವಾದ ಅದರ ಸ್ಥಳಗಳನ್ನು ಆದರಿಸುವನು; ಅವರಿಗಾಗಿ ಮಹಾದೊಡ್ಡ ಕಾರ್ಯವನ್ನು ಮಾಡುವನು. ಯೆಹೋವನು ಮರುಭೂಮಿಯನ್ನು ಏದೆನ್ ಉದ್ಯಾನವನದಂತೆ ಮಾಡುವನು. ಆ ದೇಶವು ಬರಿದಾಗಿತ್ತು. ಆದರೆ ಅದು ಯೆಹೋವನ ಉದ್ಯಾನವನವಾಗುವದು. ಅದರೊಳಗಿರುವ ಜನರು ಸಂತೋಷಭರಿತರಾಗುವರು. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವರು. ಅವರು ಕೃತಜ್ಞತಾಸ್ತುತಿ ಮಾಡುವರು, ಜಯಗೀತೆಯನ್ನು ಹಾಡುವರು.
ಕೃತಜ್ಞತಾಸ್ತುತಿ ಮತ್ತು ಪ್ರೋತ್ಸಾಹ
3 ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ತಪ್ಪದೆ ನಿನ್ನನ್ನು ಜ್ಞಾಪಿಸಿಕೊಂಡು ನಿನ್ನ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇನೆ. ನನ್ನ ಪೂರ್ವಿಕರು ಸೇವೆ ಸಲ್ಲಿಸಿದ್ದು ಆತನಿಗೇ. ಯೋಗ್ಯವಾದದ್ದೆಂದು ನನಗೆ ತಿಳಿದಿರುವುದನ್ನೇ ಮಾಡುತ್ತಾ ಆತನ ಸೇವೆ ಮಾಡುತ್ತಿದ್ದೇನೆ. 4 ನೀನು ನನಗಾಗಿ ಕಣ್ಣೀರು ಸುರಿಸಿದ್ದು ನನ್ನ ನೆನಪಿನಲ್ಲಿದೆ. ನಿನ್ನನ್ನು ನೋಡಬೇಕೆಂದು ಬಹಳ ಆಸೆಯಾಗಿದೆ. ನಿನ್ನನ್ನು ನೋಡಿದಾಗ ನನ್ನಲ್ಲಿ ಆನಂದವು ತುಂಬಿಹೋಗುವುದು. 5 ನಿನ್ನ ನಿಜವಾದ ನಂಬಿಕೆಯು ನನ್ನ ನೆನಪಿನಲ್ಲಿದೆ. ಆ ವಿಧವಾದ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಲ್ಲೂ ನಿನ್ನ ತಾಯಿಯಾದ ಯೂನಿಕೆಯಲ್ಲೂ ಇತ್ತು. ಈಗ ಅದೇ ನಂಬಿಕೆಯು ನಿನ್ನಲ್ಲಿಯೂ ಇದೆಯೆಂದು ನನಗೆ ತಿಳಿದಿದೆ. 6 ದೇವರು ನಿನಗೆ ದಯಪಾಲಿಸಿರುವ ವರವನ್ನು ನೀನು ನೆನಪು ಮಾಡಿಕೊಳ್ಳಬೇಕೆಂದು ನಾನು ಅಪೇಕ್ಷಿಸುವುದು ಈ ಕಾರಣದಿಂದಲೇ. ನಾನು ನನ್ನ ಕೈಗಳನ್ನು ನಿನ್ನ ಮೇಲಿಟ್ಟಾಗ ಆತನು ನಿನಗೆ ಆ ವರವನ್ನು ದಯಪಾಲಿಸಿದನು. ಬೆಂಕಿಯ ಕಿಡಿಯು ಪ್ರಜ್ವಲವಾಗಿ ದಟ್ಟವಾದ ಬೆಂಕಿಯಾಗುವಂತೆ ನಿನ್ನ ವರವನ್ನು ಉಪಯೋಗಿಸುತ್ತಾ ಅದನ್ನು ಅಧಿಕಗೊಳಿಸಬೇಕೆಂಬುದು ನನ್ನ ಅಪೇಕ್ಷೆ. 7 ದೇವರು ನಮಗೆ ಕೊಟ್ಟದ್ದು ನಮ್ಮನ್ನು ಹೇಡಿಗಳನ್ನಾಗಿ ಮಾಡುವ ಆತ್ಮವನ್ನಲ್ಲ. ನಮ್ಮನ್ನು ಬಲದಿಂದ, ಪ್ರೀತಿಯಿಂದ ಮತ್ತು ಸ್ವಶಿಕ್ಷಣದಿಂದ ತುಂಬಿಸುವ ಆತ್ಮವನ್ನು ಆತನು ಕೊಟ್ಟನು.
Kannada Holy Bible: Easy-to-Read Version. All rights reserved. © 1997 Bible League International