Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಆದಿಕಾಂಡ 12:1-4

ದೇವರು ಅಬ್ರಾಮನನ್ನು ಕರೆದದ್ದು

12 ಯೆಹೋವನು ಅಬ್ರಾಮನಿಗೆ,

“ನಿನ್ನ ದೇಶವನ್ನೂ ನಿನ್ನ ಜನರನ್ನೂ ಬಿಟ್ಟು ಹೊರಡು.
ನಿನ್ನ ತಂದೆಯ ಕುಟುಂಬವನ್ನು ಬಿಟ್ಟು
    ನಾನು ತೋರಿಸುವ ದೇಶಕ್ಕೆ ಹೋಗು.
ನಾನು ನಿನ್ನನ್ನು ಆಶೀರ್ವದಿಸುವೆನು;
    ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡಿ
    ನಿನ್ನ ಹೆಸರನ್ನು ಪ್ರಖ್ಯಾತಿಪಡಿಸುವೆನು;
ನೀನು ಆಶೀರ್ವಾದದಾಯಕನಾಗುವಂತೆ[a] ಮಾಡುವೆನು.
ನಿನಗೆ ಒಳ್ಳೆಯದನ್ನು ಮಾಡುವವರನ್ನು ಆಶೀರ್ವದಿಸುವೆನು;
    ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು.
ನಿನ್ನ ನಿಮಿತ್ತವಾಗಿ ಲೋಕದವರೆಲ್ಲರೂ
    ಆಶೀರ್ವಾದ ಹೊಂದುವರು” ಎಂದು ಹೇಳಿದನು.

ಕಾನಾನಿಗೆ ಅಬ್ರಾಮನ ಪ್ರಯಾಣ

ಆದ್ದರಿಂದ ಅಬ್ರಾಮನು ಯೆಹೋವನಿಗೆ ವಿಧೇಯನಾದನು. ಅವನು ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟನು. ಅವನೊಡನೆ ಲೋಟನು ಸಹ ಹೋದನು. ಆಗ ಅಬ್ರಾಮನಿಗೆ ಎಪ್ಪತ್ತೈದು ವರ್ಷ ವಯಸ್ಸಾಗಿತ್ತು.

ಕೀರ್ತನೆಗಳು 121

ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ.

121 ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ.
    ನನಗೆ ಸಹಾಯವು ಎಲ್ಲಿಂದ ಬರುವುದು?
ಭೂಮ್ಯಾಕಾಶಗಳ ಸೃಷ್ಟಿಕರ್ತನಾದ ಯೆಹೋವನಿಂದಲೇ
    ನನಗೆ ಸಹಾಯವು ಬರುವುದು.
ಆತನು ನಿನ್ನನ್ನು ಬೀಳಗೊಡಿಸುವುದಿಲ್ಲ;
    ನಿನ್ನ ಸಂರಕ್ಷಕನು ನಿದ್ರೆಹೋಗುವುದಿಲ್ಲ.
ಇಸ್ರೇಲಿನ ಸಂರಕ್ಷಕನು ತೂಕಡಿಸುವುದಿಲ್ಲ,
    ನಿದ್ರಿಸುವುದೂ ಇಲ್ಲ!
ನಿನ್ನನ್ನು ಕಾಯುವವನು ಯೆಹೋವನೇ.
    ನಿನ್ನನ್ನು ರಕ್ಷಿಸಲು ಆತನು ನಿನ್ನ ಬಲಗಡೆಯಲ್ಲಿ ನಿಂತಿದ್ದಾನೆ.
ಹಗಲಲ್ಲಿ ಸೂರ್ಯನೂ
    ರಾತ್ರಿಯಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವುದಿಲ್ಲ.
ಯೆಹೋವನು ನಿನ್ನನ್ನು ಎಲ್ಲಾ ಅಪಾಯಗಳಿಂದ ರಕ್ಷಿಸುವನು;
    ನಿನ್ನ ಪ್ರಾಣವನ್ನು ಕಾಯುವನು.
ನೀನು ಹೋಗುವಾಗಲೂ ಬರುವಾಗಲೂ ಯೆಹೋವನು ನಿನಗೆ ಸಹಾಯಮಾಡುವನು.
    ಆತನು ನಿನ್ನನ್ನು ಸದಾಕಾಲ ಕಾಪಾಡುವನು.

ರೋಮ್ನಗರದವರಿಗೆ 4:1-5

ಅಬ್ರಹಾಮನ ಉದಾಹರಣೆ

ಹಾಗಾದರೆ, ನಮ್ಮ ಪಿತೃವಾದ ಅಬ್ರಹಾಮನ ಬಗ್ಗೆ ನಾವು ಏನು ಹೇಳೋಣ? ಅವನು ನಂಬಿಕೆಯ ಬಗ್ಗೆ ಏನು ಕಲಿತುಕೊಂಡನು? ಅವನು ತನ್ನ ಕ್ರಿಯೆಗಳಿಂದ ನೀತಿವಂತನಾಗಿದ್ದರೆ ಹೊಗಳಿಕೊಳ್ಳಲು ಅವನಿಗೆ ಕಾರಣವಿರುತ್ತಿತ್ತು. ಆದರೆ ಅಬ್ರಹಾಮನು ದೇವರ ಮುಂದೆ ಹೊಗಳಿಕೊಳ್ಳಲು ಆಗಲಿಲ್ಲ. “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅಬ್ರಹಾಮನ ನಂಬಿಕೆಯನ್ನು ಸ್ವೀಕರಿಸಿದನು. ಇದು ಅಬ್ರಹಾಮನನ್ನು ನೀತಿವಂತನನ್ನಾಗಿ ಮಾಡಿತು”(A) ಎಂದು ಪವಿತ್ರ ಗ್ರಂಥವು ಹೇಳುತ್ತದೆ.

ದುಡಿದವನಿಗೆ ದೊರೆಯುವ ಸಂಬಳ ಉಡುಗೊರೆಯಲ್ಲ, ಅದು ಅವನಿಗೆ ಸಲ್ಲತಕ್ಕದ್ದೇ ಆಗಿದೆ. ಆದರೆ ಒಬ್ಬನು ತಾನು ಮಾಡುವ ಯಾವುದೇ ಕಾರ್ಯದ ಮೂಲಕವಾಗಲಿ ತನ್ನನ್ನು ನೀತಿವಂತನನ್ನಾಗಿ ಮಾಡಿಕೊಳ್ಳಲಾರನು. ಆದ್ದರಿಂದ ಆ ವ್ಯಕ್ತಿ ದೇವರಲ್ಲಿ ನಂಬಿಕೆ ಇಡಲೇಬೇಕು. ಆಗ ದೇವರು ಆ ವ್ಯಕ್ತಿಯ ನಂಬಿಕೆಯನ್ನು ಸ್ವೀಕರಿಸಿಕೊಂಡು ಅವನನ್ನು ನೀತಿವಂತನನ್ನಾಗಿ ಮಾಡುವನು. ದೇವರು ದುಷ್ಟರನ್ನು ಸಹ ನೀತಿವಂತರನ್ನಾಗಿ ಮಾಡುವನು.

ರೋಮ್ನಗರದವರಿಗೆ 4:13-17

ವಾಗ್ದಾನವನ್ನು ಹೊಂದಿಕೊಳ್ಳಲು ನಂಬಿಕೆಯೇ ಮಾರ್ಗ

13 ಅಬ್ರಹಾಮನಿಗೂ ಅವನ ಸಂತತಿಯವರಿಗೂ ಜಗತ್ತನ್ನೇ ಕೊಡುವುದಾಗಿ ದೇವರು ವಾಗ್ದಾನ ಮಾಡಿದನು. ಆದರೆ ಅಬ್ರಹಾಮನು ಆ ವಾಗ್ದಾನವನ್ನು ಹೊಂದಿಕೊಂಡದ್ದು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಅಬ್ರಹಾಮನು ನಂಬಿಕೆಯ ಮೂಲಕ ನೀತಿವಂತನಾದ ಕಾರಣ ಆ ವಾಗ್ದಾನವನ್ನು ಹೊಂದಿಕೊಂಡನು. 14 ದೇವರು ವಾಗ್ದಾನ ಮಾಡಿದವುಗಳನ್ನು ಜನರು ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಹೊಂದಿಕೊಳ್ಳಬಲ್ಲವರಾಗಿದ್ದರೆ, ನಂಬಿಕೆಯು ನಿಷ್ಪ್ರಯೋಜಕವಾಗಿದೆ. ಅಲ್ಲದೆ ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನವೂ ನಿಷ್ಪ್ರಯೋಜಕವಾಗಿದೆ. 15 ಏಕೆಂದರೆ ಧರ್ಮಶಾಸ್ತ್ರಕ್ಕೆ ವಿಧೇಯರಾಗದೆ ಹೋದಾಗ, ಧರ್ಮಶಾಸ್ತ್ರವು ದೇವರ ಕೋಪವನ್ನು ಮಾತ್ರ ತರುತ್ತದೆ. ಆದರೆ ಧರ್ಮಶಾಸ್ತ್ರವು ಇಲ್ಲದಿದ್ದರೆ ಅವಿಧೇಯರಾಗುವುದಕ್ಕೆ ಏನೂ ಇರುವುದಿಲ್ಲ.

16 ಆದಕಾರಣ ಜನರು ನಂಬಿಕೆಯ ಮೂಲಕವಾಗಿ ದೇವರ ವಾಗ್ದಾನವನ್ನು ಹೊಂದಿಕೊಳ್ಳುವರು. ವಾಗ್ದಾನವು ಉಚಿತ ಕೊಡುಗೆಯಾಗಬೇಕೆಂತಲೇ ಹೀಗಾಯಿತು. ವಾಗ್ದಾನವು ಉಚಿತ ಕೊಡುಗೆಯಾಗಿದ್ದರೆ, ಅಬ್ರಹಾಮನ ಜನರೆಲ್ಲರೂ ಆ ವಾಗ್ದಾನವನ್ನು ಹೊಂದಿಕೊಳ್ಳುವರು. ಈ ವಾಗ್ದಾನವನ್ನು ಮೋಶೆಯ ಧರ್ಮಶಾಸ್ತ್ರಕ್ಕೆ ಅಧೀನರಾಗಿ ಜೀವಿಸುವ ಜನರಿಗೆ ಮಾತ್ರವಲ್ಲ, ಅಬ್ರಹಾಮನಂತೆ ನಂಬಿಕೆಯಲ್ಲಿ ಜೀವಿಸುವ ಎಲ್ಲರಿಗೂ ಕೊಡಲಾಗಿದೆ. ಅಬ್ರಹಾಮನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ. 17 “ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆಯನ್ನಾಗಿ ಮಾಡಿದ್ದೇನೆ”(A) ಎಂದು ಪವಿತ್ರ ಗ್ರಂಥದಲ್ಲೇ ಬರೆದಿದೆ. ಇದು ದೇವರ ಸನ್ನಿಧಿಯಲ್ಲಿ ಸತ್ಯವಾಗಿದೆ. ಸತ್ತವರಿಗೆ ಜೀವವನ್ನು ಕೊಡುವವನೂ ಇನ್ನೂ ಸಂಭವಿಸಿಲ್ಲದ ಕಾರ್ಯಗಳನ್ನು ಮಾಡುವವನೂ ಆಗಿರುವ ದೇವರನ್ನು ಅಬ್ರಹಾಮನು ನಂಬಿದನು.

ಯೋಹಾನ 3:1-17

ಯೇಸು ಮತ್ತು ನಿಕೊದೇಮ

ನಿಕೊದೇಮ ಎಂಬ ಒಬ್ಬ ಮನುಷ್ಯನಿದ್ದನು. ನಿಕೊದೇಮನು ಫರಿಸಾಯರಲ್ಲಿ ಒಬ್ಬನಾಗಿದ್ದನು. ಅವನು ಒಬ್ಬ ಮುಖ್ಯ ಯೆಹೂದ್ಯ ನಾಯಕನಾಗಿದ್ದನು. ಒಂದು ರಾತ್ರಿ ನಿಕೊದೇಮನು ಯೇಸುವಿನ ಬಳಿಗೆ ಬಂದನು. ನಿಕೊದೇಮನು, “ಗುರುವೇ, ನೀನು ದೇವರಿಂದ ಕಳುಹಿಸಲ್ಪಟ್ಟ ಉಪದೇಶಕನೆಂದು ನಮಗೆ ಗೊತ್ತಿದೆ. ನೀನು ಮಾಡುವ ಈ ಸೂಚಕಕಾರ್ಯಗಳನ್ನು ದೇವರ ಸಹಾಯದಿಂದಲ್ಲದೆ ಯಾರೂ ಮಾಡಲಾರರು” ಎಂದು ಹೇಳಿದನು.

ಯೇಸು “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ಹೊಸದಾಗಿ ಹುಟ್ಟಲೇಬೇಕು. ಒಬ್ಬನು ಹೊಸದಾಗಿ ಹುಟ್ಟಿಲ್ಲದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು” ಎಂದು ಉತ್ತರಿಸಿದನು.

ನಿಕೊದೇಮನು, “ಮನುಷ್ಯನು ಮುದುಕನಾದ ಮೇಲೆ ಹುಟ್ಟುವುದು ಹೇಗೆ? ಒಬ್ಬನು ತನ್ನ ತಾಯಿಯ ಗರ್ಭದೊಳಗೆ ಮತ್ತೆ ಪ್ರವೇಶಿಸಲು ಸಾಧ್ಯವೇ?” ಎಂದು ಕೇಳಿದನು.

ಅದಕ್ಕೆ ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ನೀರಿನಿಂದಲೂ ಆತ್ಮನಿಂದಲೂ ಹುಟ್ಟಲೇಬೇಕು. ಇಲ್ಲವಾದರೆ ಅವನು ದೇವರ ರಾಜ್ಯವನ್ನು ಪ್ರವೇಶಿಸಲಾರನು. ದೇಹವು ಮಾನುಷ ತಂದೆತಾಯಿಗಳಿಂದ ಹುಟ್ಟಿದ್ದು. ಆದರೆ ಆತ್ಮಿಕ ಜೀವನವು ಆತ್ಮನಿಂದ ಹುಟ್ಟಿದ್ದು. ‘ನೀನು ಹೊಸದಾಗಿ ಹುಟ್ಟಲೇಬೇಕು’ ಎಂದು ನಾನು ಹೇಳಿದ್ದಕ್ಕೆ ಆಶ್ಚರ್ಯಪಡಬೇಡ. ಗಾಳಿಯು ತನಗಿಷ್ಟ ಬಂದ ಕಡೆಗೆ ಹೋಗುತ್ತದೆ. ಗಾಳಿ ಬೀಸುವ ಶಬ್ದವನ್ನು ನೀನು ಕೇಳುವೆ. ಆದರೆ ಗಾಳಿ ಎಲ್ಲಿಂದ ಬರುತ್ತದೋ ಮತ್ತು ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬರೂ ಅದರಂತಿದ್ದಾರೆ” ಎಂದು ಹೇಳಿದನು.

ನಿಕೊದೇಮನು, “ಇದೆಲ್ಲಾ ಹೇಗೆ ಸಾಧ್ಯ?” ಎಂದು ಕೇಳಿದನು.

10 ಯೇಸು, “ನೀನು ಇಸ್ರೇಲಿನ ಉಪದೇಶಕನಾಗಿರುವೆ. ಆದರೆ ನಿನಗೆ ಈ ಸಂಗತಿಗಳು ಇನ್ನೂ ಅರ್ಥವಾಗುವುದಿಲ್ಲವೇ? 11 ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ನಮಗೆ ಗೊತ್ತಿರುವುದರ ಬಗ್ಗೆ ನಾವು ಮಾತಾಡುತ್ತೇವೆ. ನಾವು ಕಂಡದ್ದರ ಬಗ್ಗೆ ನಾವು ಸಾಕ್ಷಿ ಕೊಡುತ್ತೇವೆ. ಆದರೆ ನಾವು ಹೇಳುವುದನ್ನು ನೀವು ಸ್ವೀಕರಿಸಿಕೊಳ್ಳುವುದಿಲ್ಲ. 12 ನಾನು ನಿಮಗೆ ಭೂಲೋಕದ ಸಂಗತಿಗಳ ಬಗ್ಗೆ ಹೇಳಿದೆ, ಆದರೆ ನೀವು ನನ್ನನ್ನು ನಂಬುವುದಿಲ್ಲ. ಆದ್ದರಿಂದ ನಾನು ಪರಲೋಕದ ಸಂಗತಿಗಳ ಬಗ್ಗೆ ನಿನಗೆ ಹೇಳಿದರೂ ನೀವು ಖಂಡಿತವಾಗಿ ನಂಬುವುದಿಲ್ಲ! 13 ಪರಲೋಕದಿಂದ ಇಳಿದುಬಂದ ಮನುಷ್ಯಕುಮಾರನೊಬ್ಬನೇ ಪರಲೋಕಕ್ಕೆ ಏರಿಹೋದ ಏಕೈಕ ವ್ಯಕ್ತಿಯಾಗಿದ್ದಾನೆ.

14 “ಮೋಶೆಯು ಮರಳುಗಾಡಿನಲ್ಲಿ ಸರ್ಪವನ್ನು ಎತ್ತರವಾದ ಕಂಬದ ಮೇಲಿಟ್ಟನು. ಅಂತೆಯೇ ಮನುಷ್ಯಕುಮಾರನನ್ನು ಸಹ ಎತ್ತರವಾದ ಕಂಬದ ಮೇಲಿಡಬೇಕು. 15 ಆತನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಹೊಂದಿಕೊಳ್ಳುವರು” ಎಂದು ಹೇಳಿದನು.

16 ಹೌದು, ದೇವರು ಲೋಕವನ್ನು ಎಷ್ಟೋ ಪ್ರೀತಿಸಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಹೊಂದಬೇಕೆಂದು ಆತನನ್ನು ಕೊಟ್ಟನು. 17 ದೇವರು ತನ್ನ ಮಗನನ್ನು ಈ ಲೋಕಕ್ಕೆ ಕಳುಹಿಸಿದ್ದು, ಆತನ ಮೂಲಕವಾಗಿ ಈ ಲೋಕದ ಜನರನ್ನು ಅಪರಾಧಿಗಳೆಂದು ತೀರ್ಪು ಮಾಡುವುದಕ್ಕಾಗಿಯಲ್ಲ. ಈ ಲೋಕದವರು ರಕ್ಷಣೆ ಹೊಂದಿಕೊಳ್ಳಲೆಂದು ದೇವರು ಆತನನ್ನು ಕಳುಹಿಸಿಕೊಟ್ಟನು.

ಮತ್ತಾಯ 17:1-9

ಯೇಸುವಿನ ರೂಪಾಂತರ

(ಮಾರ್ಕ 9:2-13; ಲೂಕ 9:28-36)

17 ಆರು ದಿನಗಳ ತರುವಾಯ, ಪೇತ್ರನನ್ನು, ಯಾಕೋಬನನ್ನು ಮತ್ತು ಯಾಕೋಬನ ಸಹೋದರನಾದ ಯೋಹಾನನನ್ನು ಕರೆದುಕೊಂಡು ಯೇಸು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು. ಅವರಲ್ಲದೆ ಬೇರೆ ಯಾರೂ ಅಲ್ಲಿರಲಿಲ್ಲ. ಈ ಶಿಷ್ಯರ ಕಣ್ಣೆದುರಿನಲ್ಲಿಯೇ ಆತನು ರೂಪಾಂತರ ಹೊಂದಿದನು. ಆತನ ಮುಖವು ಸೂರ್ಯನಂತೆ ಪ್ರಕಾಶಮಾನವಾಯಿತು. ಆತನ ಉಡುಪುಗಳು ಬೆಳಕಿನಂತೆ ಬೆಳ್ಳಗಾದವು. ಅಲ್ಲದೆ ಆತನೊಂದಿಗೆ ಇಬ್ಬರು ಪುರುಷರು ಮಾತಾಡುತ್ತಾ ನಿಂತಿದ್ದರು. ಅವರೇ ಮೋಶೆ ಮತ್ತು ಎಲೀಯ.

ಪೇತ್ರನು ಯೇಸುವಿಗೆ, “ಪ್ರಭುವೇ, ನಾವು ಇಲ್ಲೇ ಇರುವುದು ಒಳ್ಳೆಯದು. ನೀನು ಇಷ್ಟಪಟ್ಟರೆ ಇಲ್ಲಿ ಮೂರು ಡೇರೆಗಳನ್ನು ಹಾಕುವೆವು. ನಿನಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು” ಎಂದನು.

ಪೇತ್ರನು ಮಾತಾಡುತ್ತಿರುವಾಗಲೇ ಪ್ರಕಾಶಮಾನವಾದ ಒಂದು ಮೋಡವು ಅವರ ಮೇಲೆ ಕವಿಯಿತು ಮತ್ತು ಆ ಮೋಡದೊಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ನಾನು ಈತನನ್ನು ಬಹಳ ಮೆಚ್ಚಿಕೊಂಡಿದ್ದೇನೆ. ಈತನಿಗೆ ವಿಧೇಯರಾಗಿರಿ!” ಎಂದು ಹೇಳಿತು.

ಯೇಸುವಿನ ಸಂಗಡವಿದ್ದ ಶಿಷ್ಯರಿಗೂ ಈ ಧ್ವನಿ ಕೇಳಿಸಿತು. ಅವರು ಬಹಳ ಭಯದಿಂದ ಬೋರಲಬಿದ್ದರು. ಆಗ ಆತನು ಶಿಷ್ಯರ ಬಳಿಗೆ ಬಂದು ಅವರನ್ನು ಮುಟ್ಟಿ, “ಏಳಿ, ಹೆದರಬೇಡಿ” ಎಂದನು. ಅವರು ಕಣ್ಣೆತ್ತಿ ನೋಡಿದಾಗ ಯೇಸು ಒಬ್ಬನೇ ಅಲ್ಲಿದ್ದನು.

ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ತನ್ನ ಶಿಷ್ಯರಿಗೆ, “ನೀವು ಬೆಟ್ಟದ ಮೇಲೆ ಕಂಡ ದರ್ಶನವನ್ನು ಈಗ ಯಾರಿಗೂ ಹೇಳದೆ ಮನುಷ್ಯಕುಮಾರನು ಸತ್ತು ಜೀವಂತವಾಗಿ ಎದ್ದುಬಂದ ಮೇಲೆ ತಿಳಿಸಿರಿ” ಎಂದು ಆಜ್ಞಾಪಿಸಿದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International