Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ವಿಮೋಚನಕಾಂಡ 17:1-7

ಬಂಡೆಯೊಳಗಿಂದ ನೀರು

17 ಇಸ್ರೇಲರೆಲ್ಲರೂ ಸಿನ್ ಮರುಭೂಮಿಯಿಂದ ಒಟ್ಟಾಗಿ ಪ್ರಯಾಣಮಾಡಿದರು. ಯೆಹೋವನು ಆಜ್ಞಾಪಿಸಿದಂತೆಲ್ಲಾ ಅವರು ಸ್ಥಳದಿಂದ ಸ್ಥಳಕ್ಕೆ ಪ್ರಯಾಣಮಾಡಿದರು. ಅವರು ರೆಫೀದೀಮಿಗೆ ಪ್ರಯಾಣಮಾಡಿ ಅಲ್ಲಿ ತಂಗಿದರು. ಅವರಿಗೆ ಕುಡಿಯಲು ಅಲ್ಲಿ ನೀರಿರಲಿಲ್ಲ. ಆದ್ದರಿಂದ ಅವರು ಮೋಶೆಗೆ ವಿರುದ್ಧವಾಗಿ ದಂಗೆ ಎದ್ದು ಅವನೊಡನೆ ವಾಗ್ವಾದ ಮಾಡತೊಡಗಿದರು. “ನಮಗೆ ಕುಡಿಯಲು ನೀರು ಕೊಡು” ಎಂದು ಅವರು ಕೇಳಿದರು.

ಮೋಶೆ ಅವರಿಗೆ, “ನೀವು ಯಾಕೆ ನನಗೆ ವಿರುದ್ಧವಾಗಿ ದಂಗೆಯೆದ್ದಿರಿ? ನೀವು ಯಾಕೆ ಯೆಹೋವನನ್ನು ಪರೀಕ್ಷಿಸುತ್ತಿದ್ದೀರಿ? ಯೆಹೋವನು ನಮ್ಮೊಡನೆ ಇಲ್ಲವೆಂದು ನೀವು ಭಾವಿಸುತ್ತೀರೋ?” ಎಂದು ಹೇಳಿದನು.

ಆದರೆ ಜನರು ನೀರಿಲ್ಲದೆ ಬಹಳ ಬಾಯಾರಿಕೆಗೆ ಒಳಗಾಗಿದ್ದರು. ಆದ್ದರಿಂದ ಅವರು ಮೋಶೆಯ ಮೇಲೆ ಗುಣುಗುಟ್ಟುತ್ತಿದ್ದರು. “ನೀನು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದದ್ದೇಕೆ? ನಾವು, ನಮ್ಮ ಮಕ್ಕಳು ಮತ್ತು ನಮ್ಮ ದನಕರುಗಳೆಲ್ಲಾ ನೀರಿಲ್ಲದೆ ಸಾಯುವುದಕ್ಕೆ ನೀನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯಾ?” ಎಂದು ಅವರು ಕೇಳಿದರು.

ಆದ್ದರಿಂದ ಮೋಶೆಯು ಯೆಹೋವನಿಗೆ ಮೊರೆಯಿಟ್ಟು, “ಈ ಜನರ ವಿಷಯದಲ್ಲಿ ನಾನೇನು ಮಾಡಲಿ? ಅವರು ಕಲ್ಲೆಸೆದು ನನ್ನನ್ನು ಕೊಲ್ಲುವುದಕ್ಕೆ ಸಿದ್ಧರಾಗಿದ್ದಾರೆ” ಅಂದನು.

ಯೆಹೋವನು ಮೋಶೆಗೆ, “ಇಸ್ರೇಲ್ ಜನರ ಮುಂದೆ ಹೋಗು. ನಿನ್ನೊಡನೆ ಜನರ ಕೆಲವು ಹಿರಿಯರನ್ನು ಕರೆದುಕೊ. ನಿನ್ನ ಊರುಗೋಲನ್ನು ಹಿಡಿದುಕೊಂಡು ಹೋಗು. ನೀನು ನೈಲ್ ನದಿಯನ್ನು ಹೊಡೆಯಲು ಉಪಯೋಗಿಸಿದ ಕೋಲು ಇದಾಗಿದೆ. ಹೋರೇಬಿನಲ್ಲಿ ನಾನು ನಿನ್ನ ಮುಂದೆ ಒಂದು ಬಂಡೆಯ ಮೇಲೆ ನಿಲ್ಲುವೆನು. ಊರುಗೋಲಿನಿಂದ ಆ ಬಂಡೆಯನ್ನು ಹೊಡೆ; ಆಗ ನೀರು ಅದರೊಳಗಿಂದ ಬರುವುದು. ಆಗ ಜನರು ಕುಡಿಯಬಹುದು” ಎಂದು ಹೇಳಿದನು.

ಅಂತೆಯೇ ಮೋಶೆ ಮಾಡಿದನು. ಇಸ್ರೇಲರ ಹಿರಿಯರು ಇದನ್ನು ನೋಡಿದರು. ಮೋಶೆ ಆ ಸ್ಥಳಕ್ಕೆ ಮಸ್ಸಾ ಮತ್ತು ಮೆರೀಬಾ ಎಂದು ಹೆಸರಿಟ್ಟನು. ಯಾಕೆಂದರೆ ಈ ಸ್ಥಳದಲ್ಲಿ ಇಸ್ರೇಲರು ಅವನಿಗೆ ವಿರುದ್ಧವಾಗಿ ದಂಗೆ ಎದ್ದು ಯೆಹೋವನನ್ನು ಪರೀಕ್ಷಿಸಿದರು. ಯೆಹೋವನು ಅವರೊಡನೆ ಇದ್ದಾನೋ ಇಲ್ಲವೋ ಎಂದು ಜನರು ತಿಳಿಯಬಯಸಿದರು.

ಕೀರ್ತನೆಗಳು 95

95 ಬನ್ನಿರಿ, ನಾವು ಯೆಹೋವನನ್ನು ಸ್ತುತಿಸೋಣ!
    ನಮಗೆ ಬಂಡೆಯಾಗಿರುವಾತನನ್ನು ಕೊಂಡಾಡೋಣ.
ಆತನಿಗೆ ಕೃತಜ್ಞತಾಸುತ್ತಿ ಮಾಡೋಣ.
    ಸ್ತುತಿಗೀತೆಗಳೊಡನೆ ಆನಂದಘೋಷ ಮಾಡೋಣ.
ಯಾಕೆಂದರೆ ಯೆಹೋವನು ಮಹಾದೇವರಾಗಿದ್ದಾನೆ!
    ಆತನು ದೇವರುಗಳಿಗೆಲ್ಲಾ ಮಹಾರಾಜನಾಗಿದ್ದಾನೆ.
ಭೂಮಿಯ ಆಳವೂ ಉನ್ನತೋನ್ನತವಾದ ಶಿಖರಗಳೂ ಆತನವೇ.
ಸಮುದ್ರವು ಆತನದೇ, ಅದನ್ನು ಸೃಷ್ಟಿಸಿದಾತನು ಆತನೇ.
    ಭೂಮಿಯೂ ಆತನ ಕೈಕೆಲಸವೇ.
ಬನ್ನಿರಿ, ಆತನಿಗೆ ಅಡ್ಡಬಿದ್ದು ಆರಾಧಿಸೋಣ.
    ನಮ್ಮನ್ನು ಸೃಷ್ಟಿಸಿದ ಯೆಹೋವನನ್ನು ಕೊಂಡಾಡೋಣ.
ನಮ್ಮ ದೇವರು ಆತನೇ, ನಾವು ಆತನವರೇ.
    ಆತನ ಸ್ವರಕ್ಕೆ ಕಿವಿಗೊಡುವುದಾದರೆ ಇಂದೇ ನಾವು ಆತನ ಮಂದೆಯಾಗುತ್ತೇವೆ.

ದೇವರು ಹೀಗೆನ್ನುತ್ತಾನೆ: “ನೀವು ಮೆರೀಬಾದಲ್ಲಿಯೂ
    ಮಸ್ಸಾ ಮರುಭೂಮಿಯಲ್ಲಿಯೂ ಮಾಡಿದಂತೆ ಮೊಂಡತನ ಮಾಡಬೇಡಿ.
ನಿಮ್ಮ ಪೂರ್ವಿಕರು ನನ್ನನ್ನು ಪರೀಕ್ಷಿಸಿದರು.
    ನನ್ನ ಮಹತ್ಕಾರ್ಯಗಳನ್ನು ನೋಡಿದ್ದರೂ ನನ್ನನ್ನು ಪರೀಕ್ಷಿಸಿದರು.
10 ನಲವತ್ತು ವರ್ಷಗಳ ಕಾಲ ನಾನು ಅವರೊಂದಿಗೆ ತಾಳ್ಮೆಯಿಂದಿದ್ದೆನು,
    ಅವರು ನಂಬಿಗಸ್ತರಲ್ಲವೆಂದು ನನಗೆ ತಿಳಿದಿತ್ತು.
    ಅವರು ನನ್ನ ಉಪದೇಶಗಳನ್ನು ಅನುಸರಿಸಲಿಲ್ಲ.
11 ಆದ್ದರಿಂದ ನಾನು ಕೋಪಗೊಂಡು ನನ್ನ ವಿಶ್ರಾಂತಿಯ ನಾಡನ್ನು
    ಅವರು ಪ್ರವೇಶಿಸಕೂಡದೆಂದು ನಾನು ಪ್ರಮಾಣ ಮಾಡಿದೆನು.”

ರೋಮ್ನಗರದವರಿಗೆ 5:1-11

ನೀತಿನಿರ್ಣಯ

ಹೀಗಿರಲಾಗಿ, ನಾವು ನಂಬಿಕೆಯ ಮೂಲಕ ನೀತಿವಂತರಾಗಿದ್ದೇವೆ. ಆದಕಾರಣ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿದೆ. ಈಗ ನಾವು ಆನಂದಿಸುತ್ತಿರುವ ದೇವರ ಕೃಪಾಶ್ರಯಕ್ಕೆ ಕ್ರಿಸ್ತನೇ ನಮ್ಮನ್ನು ನಮ್ಮ ನಂಬಿಕೆಯ ಮೂಲಕ ತಂದಿದ್ದಾನೆ. ದೇವರ ಮಹಿಮೆಯನ್ನು ಹೊಂದುವೆವು ಎಂಬ ನಿರೀಕ್ಷೆಯು ನಮಗಿರುವುದರಿಂದ ನಾವು ಬಹು ಸಂತೋಷವಾಗಿದ್ದೇವೆ. ಅಲ್ಲದೆ, ನಮ್ಮ ಕಷ್ಟಸಂಕಟಗಳಲ್ಲಿಯೂ ಸಂತೋಷವಾಗಿದ್ದೇವೆ. ಏಕೆಂದರೆ, ಈ ಕಷ್ಟಸಂಕಟಗಳು ನಮ್ಮಲ್ಲಿ ಹೆಚ್ಚು ತಾಳ್ಮೆಯನ್ನು ಉಂಟುಮಾಡುತ್ತವೆ. ನಾವು ಬಲಶಾಲಿಗಳಾಗಿದ್ದೇವೆ ಎಂಬುದಕ್ಕೆ ಈ ತಾಳ್ಮೆಯೇ ಆಧಾರ. ನಮಗೆ ನಿರೀಕ್ಷೆಯನ್ನು ಕೊಡುವಂಥದ್ದು ಈ ಆಧಾರವೇ. ನಮ್ಮ ಈ ನಿರೀಕ್ಷೆಯು ನಮ್ಮನ್ನು ಎಂದಿಗೂ ನಿರಾಶರನ್ನಾಗಿ ಮಾಡುವುದಿಲ್ಲ. ಅದು ಎಂದಿಗೂ ವ್ಯರ್ಥವಾಗುವುದಿಲ್ಲ. ಏಕೆಂದರೆ ದೇವರು ನಮಗೆ ಉಡುಗೊರೆಯಾಗಿ ಕೊಟ್ಟಿರುವ ಪವಿತ್ರಾತ್ಮನ ಮೂಲಕ ತನ್ನ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾನೆ.

ನಾವು ಬಲಹೀನರೂ ದೇವರಿಗೆ ವಿರೋಧವಾಗಿ ಜೀವಿಸುವವರೂ ಆಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲದಲ್ಲಿ ನಮಗೋಸ್ಕರ ಪ್ರಾಣಕೊಟ್ಟನು. ನೀತಿವಂತನ ಪ್ರಾಣವನ್ನು ರಕ್ಷಿಸುವುದಕ್ಕಾಗಿ ಒಬ್ಬನು ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಾಗಿರುವ ಒಬ್ಬನಿಗಾಗಿ ಪ್ರಾಣಕೊಡಲು ಒಬ್ಬನು ಧೈರ್ಯಮಾಡಿದರೂ ಮಾಡಬಹುದು. ಆದರೆ ನಾವು ಇನ್ನೂ ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟನು. ದೇವರಿಗೆ ನಮ್ಮ ಮೇಲಿರುವ ಮಹಾ ಪ್ರೀತಿಯನ್ನು ಇದು ವ್ಯಕ್ತಪಡಿಸಿದೆ.

ನಾವು ಕ್ರಿಸ್ತನ ರಕ್ತದ ಮೂಲಕವಾಗಿ ನೀತಿವಂತರಾಗಿದ್ದೇವೆ. ಆದ್ದರಿಂದ ಆತನ ಮೂಲಕ ದೇವರ ಕೋಪದಿಂದ ಖಂಡಿತವಾಗಿ ತಪ್ಪಿಸಿಕೊಳ್ಳುತ್ತೇವೆ. 10 ಅಂದರೆ, ನಾವು ದೇವರ ಶತ್ರುಗಳಾಗಿದ್ದಾಗಲೇ, ದೇವರು ತನ್ನ ಮಗನ ಮರಣದ ಮೂಲಕವಾಗಿ ನಮ್ಮನ್ನು ತನ್ನ ಸ್ನೇಹಿತರನ್ನಾಗಿ ಮಾಡಿಕೊಂಡಿದ್ದಾನೆ. ಈಗ ನಾವು ದೇವರ ಸ್ನೇಹಿತರಾಗಿರುವುದರಿಂದ ದೇವರು ತನ್ನ ಮಗನ ಪ್ರಾಣದ ಮೂಲಕ ನಮ್ಮನ್ನು ರಕ್ಷಿಸುವುದು ಮತ್ತಷ್ಟು ನಿಶ್ಚಯವಾಗಿದೆ. 11 ಇಷ್ಟು ಮಾತ್ರವಲ್ಲದೆ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಾವು ದೇವರಲ್ಲಿ ಹರ್ಷಿಸುತ್ತೇವೆ. ಈಗ ನಾವು ದೇವರ ಸ್ನೇಹಿತರಾಗಿರುವುದು ಯೇಸುವಿನಿಂದಲೇ.

ಯೋಹಾನ 4:5-42

ಯೇಸು ಸಮಾರ್ಯದ ಪಟ್ಟಣವಾದ ಸಿಖಾರ್ ಎಂಬಲ್ಲಿಗೆ ಬಂದನು. ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಸಮೀಪದಲ್ಲಿ ಆ ಊರಿದೆ. ಯಾಕೋಬನ ಬಾವಿಯು ಅಲ್ಲಿತ್ತು. ಯೇಸು ತನ್ನ ದೀರ್ಘ ಪ್ರಯಾಣದಿಂದ ಆಯಾಸಗೊಂಡಿದ್ದನು. ಆದ್ದರಿಂದ ಆತನು ಬಾವಿಯ ಬಳಿ ಕುಳಿತುಕೊಂಡನು. ಆಗ ಸುಮಾರು ಮಧ್ಯಾಹ್ನದ ಸಮಯವಾಗಿತ್ತು. ಸಮಾರ್ಯದ ಸ್ತ್ರೀಯೊಬ್ಬಳು ನೀರನ್ನು ತೆಗೆದುಕೊಂಡು ಹೋಗುವುದಕ್ಕಾಗಿ ಆ ಬಾವಿಗೆ ಬಂದಳು. ಯೇಸು ಆಕೆಗೆ, “ದಯವಿಟ್ಟು, ಕುಡಿಯಲು ಸ್ವಲ್ಪ ನೀರು ಕೊಡು” ಎಂದು ಕೇಳಿದನು. (ಯೇಸುವಿನ ಶಿಷ್ಯರು ಆಹಾರಪದಾರ್ಥವನ್ನು ಕೊಂಡುಕೊಂಡು ಬರಲು ಪಟ್ಟಣದೊಳಗೆ ಹೋಗಿದ್ದಾಗ ಇದು ಸಂಭವಿಸಿತು.)

ಸಮಾರ್ಯದ ಸ್ತ್ರೀಯು, “ಕುಡಿಯುವ ನೀರಿಗಾಗಿ ನೀನು ನನ್ನನ್ನು ಕೇಳುತ್ತಿರುವುದು ನನಗೆ ಆಶ್ಚರ್ಯವನ್ನು ಉಂಟುಮಾಡಿದೆ! ನೀನಾದರೋ ಯೆಹೂದ್ಯನು. ನಾನಾದರೋ ಸಮಾರ್ಯದವಳು!” ಎಂದು ಹೇಳಿದಳು. (ಯೆಹೂದ್ಯರು ಸಮಾರ್ಯದವರೊಂದಿಗೆ ಸ್ನೇಹದಿಂದಿರಲಿಲ್ಲ.)

10 ಯೇಸು ಆಕೆಗೆ, “ದೇವರು ಏನು ಕೊಡುತ್ತಾನೆಂಬುದು ನಿನಗೆ ಗೊತ್ತಿಲ್ಲ ಮತ್ತು ಕುಡಿಯಲು ನೀರನ್ನು ಕೇಳಿದ ನಾನು ಯಾರೆಂಬುದೂ ನಿನಗೆ ಗೊತ್ತಿಲ್ಲ. ನಿನಗೆ ಈ ಸಂಗತಿಗಳು ಗೊತ್ತಿದ್ದರೆ, ನೀನು ನನ್ನನ್ನು ಕೇಳಿಕೊಳ್ಳುತ್ತಿದ್ದೆ, ಮತ್ತು ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆ” ಎಂದನು.

11 ಆ ಸ್ತ್ರೀಯು, “ಅಯ್ಯಾ, ಆ ಜೀವಜಲ ನಿನಗೆಲ್ಲಿ ಸಿಕ್ಕುವುದು? ಬಾವಿಯು ಬಹು ಆಳವಾಗಿದೆ ಮತ್ತು ನೀರು ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ. 12 ನಮ್ಮ ಪಿತೃವಾದ ಯಾಕೋಬನಿಗಿಂತಲೂ ನೀನು ದೊಡ್ಡವನೋ? ನಮಗೆ ಈ ಬಾವಿಯನ್ನು ಯಾಕೋಬನೇ ಕೊಟ್ಟನು. ಸ್ವತಃ ಅವನೇ ಈ ನೀರನ್ನು ಕುಡಿದನು. ಅಲ್ಲದೆ ಅವನ ಮಕ್ಕಳು ಈ ಬಾವಿಯ ನೀರನ್ನು ಕುಡಿದರು ಮತ್ತು ಅವನ ಪಶುಗಳೆಲ್ಲಾ ಈ ಬಾವಿಯ ನೀರನ್ನು ಕುಡಿದವು” ಎಂದು ಹೇಳಿದಳು.

13 ಯೇಸು, “ಈ ನೀರನ್ನು ಕುಡಿಯುವ ಪ್ರತಿಯೊಬ್ಬನಿಗೂ ಮತ್ತೆ ದಾಹವಾಗುವುದು. 14 ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ದಾಹವಾಗುವುದೇ ಇಲ್ಲ. ನಾನು ಅವನಿಗೆ ಕೊಡುವ ನೀರು ಅವನೊಳಗೆ ಉಕ್ಕಿಹರಿಯುವ ನೀರಿನ ಬುಗ್ಗೆಯಾಗುವುದು. ಆ ನೀರು ಅವನಿಗೆ ನಿತ್ಯಜೀವವನ್ನು ತರುತ್ತದೆ” ಎಂದು ಉತ್ತರಕೊಟ್ಟನು.

15 ಆ ಸ್ತ್ರೀಯು ಯೇಸುವಿಗೆ, “ಅಯ್ಯಾ, ಆ ನೀರನ್ನು ನನಗೆ ಕೊಡು. ಆಗ ನನಗೆ ಮತ್ತೆಂದಿಗೂ ದಾಹವಾಗುವುದಿಲ್ಲ. ನೀರನ್ನು ತೆಗೆದುಕೊಂಡು ಹೋಗುವುದಕ್ಕಾಗಿ ನಾನು ಇಲ್ಲಿಗೆ ಮತ್ತೆ ಬರುವ ಅಗತ್ಯವೂ ಇರುವುದಿಲ್ಲ” ಎಂದು ಹೇಳಿದಳು.

16 ಯೇಸು ಆಕೆಗೆ, “ಹೋಗಿ ನಿನ್ನ ಗಂಡನನ್ನು ಕರೆದುಕೊಂಡು ಬಾ” ಎಂದನು.

17 ಆ ಸ್ತ್ರೀಯು, “ನನಗೆ ಗಂಡನಿಲ್ಲ” ಎಂದು ಹೇಳಿದಳು.

ಯೇಸು ಆಕೆಗೆ, “ಗಂಡನಿಲ್ಲವೆಂದು ಸರಿಯಾಗಿ ಹೇಳಿದೆ. 18 ನಿಜವಾಗಿಯೂ ನಿನಗೆ ಐದು ಮಂದಿ ಗಂಡಂದಿರಿದ್ದರು. ಆದರೆ ಈಗ ನೀನು ಯಾರೊಂದಿಗೆ ವಾಸಿಸುತ್ತಿರುವಿಯೋ ಅವನು ನಿನ್ನ ಗಂಡನಲ್ಲ. ನೀನು ನನಗೆ ಸತ್ಯವನ್ನು ತಿಳಿಸಿದೆ” ಎಂದು ಹೇಳಿದನು.

19 ಆ ಸ್ತ್ರೀಯು, “ಅಯ್ಯಾ, ನೀನು ಪ್ರವಾದಿಯೆಂದು ಕಾಣುತ್ತದೆ. 20 ನಮ್ಮ ಪಿತೃಗಳು ಈ ಗುಡ್ಡದ ಮೇಲೆ ಆರಾಧಿಸಿದರು. ಆದರೆ ಜನರು ಆರಾಧಿಸಬೇಕಾದ ಸ್ಥಳ ಜೆರುಸಲೇಮ್ ಎಂದು ಯೆಹೂದ್ಯರಾದ ನೀವು ಹೇಳುತ್ತೀರಲ್ಲಾ” ಎಂದಳು.

21 ಯೇಸು, “ಅಮ್ಮಾ, ನನ್ನನ್ನು ನಂಬು! ನೀವು ಇನ್ನೆಂದಿಗೂ ತಂದೆಯನ್ನು (ದೇವರನ್ನು) ಜೆರುಸಲೇಮಿನಲ್ಲಾಗಲಿ ಈ ಗುಡ್ಡದ ಮೇಲಾಗಲಿ ಆರಾಧಿಸಬೇಕಿಲ್ಲ. 22 ನೀವು ನಿಮಗೆ ತಿಳಿದಿಲ್ಲದ ಯಾವುದನ್ನೋ ಆರಾಧಿಸುತ್ತೀರಿ. ನಮಗಾದರೋ ನಾವು ಯಾರನ್ನು ಆರಾಧಿಸುತ್ತಿದ್ದೇವೆ ಎಂಬುದು ತಿಳಿದಿದೆ. ರಕ್ಷಣೆಯು ಯೆಹೂದ್ಯರಿಂದ ಬರುತ್ತದೆ. 23 ನಿಜವಾದ ಆರಾಧಕರು ತಂದೆಯ ಚಿತ್ತಕ್ಕನುಸಾರವಾಗಿ ತಂದೆಯನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ. ಆ ಕಾಲ ಈಗಲೇ ಬಂದಿದೆ ಮತ್ತು ಅಂಥ ಜನರೇ ತನ್ನ ಆರಾಧಕರಾಗಿರಬೇಕೆಂದು ತಂದೆಯು ಬಯಸುತ್ತಾನೆ. 24 ದೇವರು ಆತ್ಮಸ್ವರೂಪಿ. ಆದ್ದರಿಂದ ದೇವರನ್ನು ಆರಾಧಿಸುವವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸಬೇಕು” ಎಂದು ಹೇಳಿದನು.

25 ಆ ಸ್ತ್ರೀಯು, “ಮೆಸ್ಸೀಯನು ಬರುತ್ತಾನೆಂದು ನನಗೆ ಗೊತ್ತು. ಆತನು ಬಂದಾಗ ನಮಗೆ ಪ್ರತಿಯೊಂದನ್ನೂ ವಿವರಿಸುವನು” ಎಂದು ಹೇಳಿದಳು. (“ಮೆಸ್ಸೀಯನು” ಅಂದರೆ “ಕ್ರಿಸ್ತನು”)

26 ಆಗ ಯೇಸು, “ಆತನೇ ಈಗ ನಿನ್ನೊಂದಿಗೆ ಮಾತಾಡುತ್ತಿದ್ದಾನೆ. ನಾನೇ ಮೆಸ್ಸೀಯ” ಎಂದು ಹೇಳಿದನು.

27 ಆ ಸಮಯದಲ್ಲಿ ಆತನ ಶಿಷ್ಯರು ಹಿಂತಿರುಗಿ ಬಂದರು. ಯೇಸು ಒಬ್ಬ ಸ್ತ್ರೀಯೊಂದಿಗೆ ಮಾತಾಡುತ್ತಿರುವುದನ್ನು ನೋಡಿ ಅವರು ಆಶ್ಚರ್ಯಗೊಂಡರು. ಆದರೆ, “ನಿನಗೇನು ಬೇಕು?” ಎಂದಾಗಲಿ “ನೀನು ಆಕೆಯೊಂದಿಗೆ ಏಕೆ ಮಾತಾಡುತ್ತಿರುವೆ?” ಎಂದಾಗಲಿ ಅವರಲ್ಲಿ ಒಬ್ಬರೂ ಕೇಳಲಿಲ್ಲ.

28 ಬಳಿಕ ಆ ಸ್ತ್ರೀಯು, ತನ್ನ ಕೊಡವನ್ನು ಅಲ್ಲಿಯೇ ಬಿಟ್ಟು ಊರಿಗೆ ಹಿಂತಿರುಗಿ ಹೋಗಿ ಜನರಿಗೆ, 29 “ನಾನು ಈವರೆಗೆ ಮಾಡಿರುವ ಪ್ರತಿಯೊಂದನ್ನೂ ಒಬ್ಬ ವ್ಯಕ್ತಿ ನನಗೆ ತಿಳಿಸಿದನು. ಬಂದು ಅವನನ್ನು ನೋಡಿರಿ. ಆತನೇ ಕ್ರಿಸ್ತನಿರಬಹುದು” ಎಂದು ಹೇಳಿದಳು. 30 ಆದ್ದರಿಂದ ಜನರು ಆತನನ್ನು ನೋಡಲು ಪಟ್ಟಣದಿಂದ ಹೊರಬಂದರು.

31 ಅಷ್ಟರಲ್ಲಿ ಯೇಸುವಿನ ಶಿಷ್ಯರು, “ಗುರುವೇ, ಊಟಮಾಡು” ಎಂದು ಆತನನ್ನು ಒತ್ತಾಯ ಮಾಡಿದರು.

32 ಅದಕ್ಕೆ ಯೇಸು, “ನನ್ನಲ್ಲಿ ಆಹಾರವಿದೆ. ಆ ಆಹಾರದ ಬಗ್ಗೆ ನಿಮಗೇನೂ ಗೊತ್ತಿಲ್ಲ” ಎಂದನು.

33 ಆದ್ದರಿಂದ ಶಿಷ್ಯರು, “ಯಾರಾದರೂ ಆತನಿಗೆ ಮೊದಲೇ ಆಹಾರವನ್ನು ತಂದುಕೊಟ್ಟರೇ?” ಎಂದು ತಮ್ಮತಮ್ಮೊಳಗೆ ಕೇಳತೊಡಗಿದರು.

34 ಯೇಸು, “ನನ್ನನ್ನು ಕಳುಹಿಸಿದಾತನು (ದೇವರು) ನಾನು ಏನು ಮಾಡಬೇಕೆಂದು ಬಯಸುವನೋ ಅದನ್ನು ಮಾಡುವುದೇ ನನಗೆ ಆಹಾರವಾಗಿದೆ. ಆತನು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಆಹಾರವಾಗಿದೆ. 35 ‘ಸುಗ್ಗಿಗೆ ಇನ್ನೂ ನಾಲ್ಕು ತಿಂಗಳು ಕಾಯಬೇಕು’ ಎಂದು ನೀವು ಹೇಳುವಿರಿ. ಆದರೆ ನಾನು ನಿಮಗೆ ಹೇಳುತ್ತೇನೆ, ನಿಮ್ಮ ಕಣ್ಣುಗಳನ್ನು ತೆರೆಯಿರಿ. ಹೊಲಗಳ ಸುತ್ತಲೆಲ್ಲಾ ನೋಡಿರಿ, ಅವು ಕೊಯ್ಲಿಗೆ ಬಂದಿವೆ. 36 ಈಗಲೂ ಸಹ, ಬೆಳೆಯನ್ನು ಕೊಯ್ಯುವವನಿಗೆ ಕೂಲಿ ದೊರೆಯುತ್ತದೆ. ಅವನು ಬೆಳೆಗಳನ್ನು ನಿತ್ಯಜೀವಕ್ಕಾಗಿ ಕೂಡಿಸುತ್ತಿದ್ದಾನೆ. ಆದ್ದರಿಂದ ಈಗ ಬಿತ್ತುವವರೂ ಮತ್ತು ಕೊಯ್ಯುವವರೂ ಒಟ್ಟಿಗೆ ಸಂತೋಷವಾಗಿರುವರು. 37 ‘ಒಬ್ಬನು ಬಿತ್ತುತ್ತಾನೆ, ಆದರೆ ಮತ್ತೊಬ್ಬನು ಬೆಳೆಯನ್ನು ಕೊಯ್ಯುತ್ತಾನೆ’ ಎಂದು ನಾವು ಹೇಳುವ ನಾಣ್ಣುಡಿ ಸತ್ಯವಾದದ್ದು. 38 ನೀವು ದುಡಿದಿಲ್ಲದ ಬೆಳೆಯನ್ನು ಕೊಯ್ಯುವುದಕ್ಕಾಗಿ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಬೇರೆಯವರು ದುಡಿದರು, ಆದರೆ ಅವರ ದುಡಿಮೆಯಿಂದ ನೀವು ಲಾಭವನ್ನು ಪಡೆಯುತ್ತೀರಿ” ಎಂದು ಹೇಳಿದನು.

39 ಆ ಸಮಾರ್ಯ ಪಟ್ಟಣದ ಜನರಲ್ಲಿ ಅನೇಕರು ಯೇಸುವನ್ನು ನಂಬಿದರು. ಏಕೆಂದರೆ ಆ ಸ್ತ್ರೀಯು ಆತನ ವಿಷಯವಾಗಿ ಅವರಿಗೆ, “ನಾನು ಮಾಡಿರುವ ಪ್ರತಿಯೊಂದನ್ನೂ ಆತನು ನನಗೆ ತಿಳಿಸಿದನು” ಎಂದು ಹೇಳಿದ್ದಳು. 40 ಸಮಾರ್ಯದವರು ಯೇಸುವಿನ ಬಳಿಗೆ ಹೋಗಿ ತಮ್ಮೊಂದಿಗೆ ಇರಬೇಕೆಂದು ಆತನನ್ನು ಬೇಡಿಕೊಂಡರು. ಆದ್ದರಿಂದ ಆತನು ಅಲ್ಲಿ ಎರಡು ದಿನ ಇದ್ದನು. 41 ಆತನು ಹೇಳಿದ ಸಂಗತಿಗಳನ್ನು ಕೇಳಿ ಇನ್ನೂ ಅನೇಕ ಜನರು ನಂಬಿದರು.

42 ಅವರು ಆ ಸ್ತ್ರೀಗೆ, “ನಾವು ಮೊದಲು ನಿನ್ನ ಮಾತನ್ನು ಕೇಳಿ ಯೇಸುವನ್ನು ನಂಬಿದೆವು. ಆದರೆ ಈಗ ಸ್ವತಃ ನಾವೇ ಆತನ ಮಾತನ್ನು ಕೇಳಿದ್ದರಿಂದ ನಂಬುತ್ತೇವೆ. ನಿಜವಾಗಿಯೂ ಈತನೇ ಲೋಕರಕ್ಷಕನೆಂದು ಈಗ ನಮಗೆ ತಿಳಿದಿದೆ” ಎಂದು ಹೇಳಿದರು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International