Revised Common Lectionary (Semicontinuous)
ರಚನೆಗಾರ: ದಾವೀದ.
16 ದೇವರೇ, ನನ್ನನ್ನು ಕಾಪಾಡು. ಯಾಕೆಂದರೆ ನಾನು ನಿನ್ನನ್ನೇ ಆಶ್ರಯಿಸಿಕೊಂಡಿರುವೆ.
2 ನಾನು ಯೆಹೋವನಿಗೆ, “ನೀನೇ ನನ್ನ ಒಡೆಯನು.
ನನ್ನಲ್ಲಿರುವ ಒಳ್ಳೆಯದನ್ನೆಲ್ಲ ದಯಪಾಲಿಸಿದಾತನು ನೀನೇ” ಎಂದು ಹೇಳಿದೆನು.
3 ಯೆಹೋವನು ಭೂಲೋಕದಲ್ಲಿರುವ ತನ್ನ ಭಕ್ತರಿಗೆ ಅತಿಶಯವಾದವುಗಳನ್ನು ಮಾಡುವನು;
ಅವರ ಮೇಲೆ ತನಗಿರುವ ನಿಜವಾದ ಪ್ರೀತಿಯನ್ನು ತೋರ್ಪಡಿಸುವನು.
4 ಆದರೆ ಅನ್ಯದೇವರುಗಳನ್ನು ಆಶ್ರಯಿಸಿಕೊಂಡವರಿಗೆ ಕೇಡುಗಳು ಹೆಚ್ಚಾಗುತ್ತವೆ.
ಅವರು ಆ ವಿಗ್ರಹಗಳಿಗೆ ಅರ್ಪಿಸುವ ರಕ್ತದ ಕಾಣಿಕೆಗಳಲ್ಲಿ ನಾನು ಪಾಲುಗಾರನಾಗುವುದಿಲ್ಲ,
ಆ ವಿಗ್ರಹಗಳ ಹೆಸರುಗಳನ್ನೂ ನಾನು ಉಚ್ಚರಿಸುವುದಿಲ್ಲ.
5 ನನ್ನ ಪಾಲೂ ನನ್ನ ಪಾತ್ರೆಯೂ ಯೆಹೋವನಿಂದಲೇ ಬರುತ್ತವೆ.
ನನಗೆ ಆಧಾರವಾಗಿದ್ದು ನನ್ನ ಪಾಲನ್ನು ದಯಪಾಲಿಸುವಾತನು ನೀನೇ.
6 ನನ್ನ ಪಾಲು[a] ರಮಣೀಯವಾಗಿದೆ.
ನನ್ನ ಸ್ವಾಸ್ತ್ಯವು[b] ಬಹು ಸುಂದರವಾಗಿದೆ.
7 ನನ್ನ ಆಲೋಚನಾಕರ್ತನಾದ ಯೆಹೋವನನ್ನು ಕೊಂಡಾಡುವೆನು;
ರಾತ್ರಿಯಲ್ಲಿಯೂ, ಆತನು ತನ್ನ ಆಲೋಚನೆಗಳನ್ನು ನನ್ನ ಅಂತರಾತ್ಮದಲ್ಲಿ ಬೇರೂರಿಸುವನು.
8 ನಾನು ಯೆಹೋವನನ್ನು ಯಾವಾಗಲೂ ನನ್ನ ಎದುರಿನಲ್ಲೇ ಇಟ್ಟುಕೊಂಡಿದ್ದೇನೆ;
ಆತನು ನನ್ನ ಬಲಗಡೆಯಲ್ಲಿರುವುದರಿಂದ ನಾನೆಂದಿಗೂ ಕದಲುವುದಿಲ್ಲ.
9 ಆದ್ದರಿಂದ ನನ್ನ ಹೃದಯವೂ ಆತ್ಮವೂ ಉಲ್ಲಾಸಪಡುತ್ತವೆ.
ನನ್ನ ದೇಹವೂ ಸುರಕ್ಷಿತವಾಗಿರುವುದು.
10 ಯಾಕೆಂದರೆ, ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ.
ನಿನ್ನ ಪವಿತ್ರನನ್ನು ಸಮಾಧಿಯಲ್ಲಿ ಕೊಳೆಯಲು ಬಿಡುವುದಿಲ್ಲ.
11 ನೀನು ನನಗೆ ಜೀವಮಾರ್ಗವನ್ನು ಉಪದೇಶಿಸುವೆ.
ನಿನ್ನ ಸನ್ನಿಧಿಯಲ್ಲಿದ್ದರೆ ಪರಿಪೂರ್ಣ ಸಂತೋಷವಿರುವುದು;
ನಿನ್ನ ಬಲಗಡೆಯಲ್ಲಿದ್ದರೆ ಶಾಶ್ವತವಾದ ಆನಂದವಿರುವುದು.
ಪ್ರಿಯತಮೆ
8 ಅಗೋ, ನನ್ನ ಪ್ರಿಯನ ಸ್ವರ!
ಅವನು ಬೆಟ್ಟಗಳ ಮೇಲೆ ನೆಗೆಯುತ್ತಾ
ಗುಡ್ಡಗಳ ಮೇಲೆ ಕುಪ್ಪಳಿಸುತ್ತಾ ಬರುತ್ತಿದ್ದಾನೆ.
9 ನನ್ನ ಪ್ರಿಯನು ಸಾರಂಗದಂತೆಯೂ
ಪ್ರಾಯದ ಜಿಂಕೆಯಂತೆಯೂ ಇದ್ದಾನೆ.
ಅಗೋ, ಅವನು ನಮ್ಮ ಗೋಡೆಯ ಆಚೆ ನಿಂತಿದ್ದಾನೆ;
ತಡಕೆಗಳಿಂದ ಇಣಿಕಿಹಾಕುತ್ತಿದ್ದಾನೆ;
ಕಿಟಕಿಗಳಿಂದ ನೋಡುತ್ತಿದ್ದಾನೆ.
10 ನನ್ನ ಪ್ರಿಯನು ನನಗೆ ಹೀಗೆಂದನು:
“ನನ್ನ ಪ್ರಿಯಳೇ, ನನ್ನ ಸುಂದರಿಯೇ,
ಎದ್ದೇಳು, ನಾವು ದೂರ ಹೋಗೋಣ!
11 ಇಗೋ, ಚಳಿಗಾಲ ಕಳೆಯಿತು;
ಮಳೆಗಾಲ ಮುಗಿದುಹೋಯಿತು.
12 ಭೂಮಿಯ ಮೇಲೆ ಹೂವುಗಳು ಕಾಣುತ್ತವೆ;
ಪಕ್ಷಿಗಳು ಹಾಡುವ ಸಮಯವು ಬಂದಿದೆ.
ದೇಶದಲ್ಲಿ ಪಾರಿವಾಳದ ಸ್ವರವು ಕೇಳಿಸುತ್ತದೆ.
13 ಅಂಜೂರದ ಮರ ಕಾಯಿಗಳನ್ನು ಬಿಡುತ್ತಿದೆ;
ದ್ರಾಕ್ಷಿಬಳ್ಳಿಯ ಹೂವುಗಳಿಂದ ಸುವಾಸನೆಯು ಬರುತ್ತಿದೆ.
ನನ್ನ ಪ್ರಿಯಳೇ, ನನ್ನ ಸುಂದರಿಯೇ, ಎದ್ದೇಳು,
ನಾವು ದೂರ ಹೋಗೋಣ!”
ಪ್ರಿಯಕರ
14 ಬಂಡೆಯ ಬಿರುಕುಗಳಲ್ಲಿಯೂ ಜರಿಯ ಮರೆಯಲ್ಲಿಯೂ ಇರುವ
ನನ್ನ ಪಾರಿವಾಳವೇ,
ನಿನ್ನ ರೂಪವನ್ನು ತೋರಿಸು;
ನಿನ್ನ ಸ್ವರವನ್ನು ಕೇಳಿಸು.
ನಿನ್ನ ಸ್ವರ ಎಷ್ಟೋ ಮಧುರ!
ನಿನ್ನ ರೂಪ ಎಷ್ಟೋ ಅಂದ!
ಪ್ರಿಯತಮೆ ಸ್ತ್ರೀಯರಿಗೆ
15 ದ್ರಾಕ್ಷಿತೋಟಗಳನ್ನು ಹಾಳುಮಾಡುವ
ನರಿಗಳನ್ನೂ
ನರಿಮರಿಗಳನ್ನೂ ಹಿಡಿಯಿರಿ!
ನಮ್ಮ ದ್ರಾಕ್ಷಿತೋಟಗಳು ಈಗ ಹೂಬಿಡುತ್ತಿವೆ.
ಕ್ರೈಸ್ತರು ಮಾಡತಕ್ಕ ಕಾರ್ಯಗಳು
2 ಪ್ರಾರ್ಥನೆಯನ್ನು ತಪ್ಪದೆ ಮಾಡಿರಿ, ನೀವು ಪ್ರಾರ್ಥಿಸುವಾಗ, ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ. 3 ನಮಗಾಗಿಯೂ ನೀವು ಪ್ರಾರ್ಥಿಸಿ. ಜನರಿಗೆ ದೇವರ ಸಂದೇಶವನ್ನು ತಿಳಿಸಲು ಅನುಕೂಲವಾದ ಸಂದರ್ಭವನ್ನು ಆತನು ನಿಮಗೆ ದಯಪಾಲಿಸುವಂತೆ ಪ್ರಾರ್ಥಿಸಿರಿ. ದೇವರು ಕ್ರಿಸ್ತನ ಬಗ್ಗೆ ತಿಳಿಸಿರುವ ರಹಸ್ಯಸತ್ಯವನ್ನು ನಾವು ಬೋಧಿಸಲಾಗುವಂತೆ ಪ್ರಾರ್ಥಿಸಿರಿ. ನಾನು ಈ ಸತ್ಯವನ್ನು ಬೋಧಿಸಿದರಿಂದಲೇ ಈಗ ಸೆರೆಮನೆಯಲ್ಲಿದ್ದೇನೆ. 4 ಈ ಸತ್ಯವನ್ನು ನಾನು ಜನರಿಗೆ ಸ್ಪಷ್ಟವಾಗಿಯೂ ಸರಳವಾಗಿಯೂ ತಿಳಿಸಲು ಸಾಧ್ಯವಾಗುವಂತೆ ಪ್ರಾರ್ಥಿಸಿರಿ.
5 ಅವಿಶ್ವಾಸಿಗಳೊಂದಿಗೆ ವ್ಯವಹರಿಸುವಾಗ ಜ್ಞಾನವುಳ್ಳವರಾಗಿರಿ. ನಿಮ್ಮ ಸಮಯವನ್ನು ಅತ್ಯುತ್ತಮವಾದ ರೀತಿಯಲ್ಲಿ ಬಳಸಿರಿ.
Kannada Holy Bible: Easy-to-Read Version. All rights reserved. © 1997 Bible League International