Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 16

ರಚನೆಗಾರ: ದಾವೀದ.

16 ದೇವರೇ, ನನ್ನನ್ನು ಕಾಪಾಡು. ಯಾಕೆಂದರೆ ನಾನು ನಿನ್ನನ್ನೇ ಆಶ್ರಯಿಸಿಕೊಂಡಿರುವೆ.
ನಾನು ಯೆಹೋವನಿಗೆ, “ನೀನೇ ನನ್ನ ಒಡೆಯನು.
    ನನ್ನಲ್ಲಿರುವ ಒಳ್ಳೆಯದನ್ನೆಲ್ಲ ದಯಪಾಲಿಸಿದಾತನು ನೀನೇ” ಎಂದು ಹೇಳಿದೆನು.
ಯೆಹೋವನು ಭೂಲೋಕದಲ್ಲಿರುವ ತನ್ನ ಭಕ್ತರಿಗೆ ಅತಿಶಯವಾದವುಗಳನ್ನು ಮಾಡುವನು;
    ಅವರ ಮೇಲೆ ತನಗಿರುವ ನಿಜವಾದ ಪ್ರೀತಿಯನ್ನು ತೋರ್ಪಡಿಸುವನು.

ಆದರೆ ಅನ್ಯದೇವರುಗಳನ್ನು ಆಶ್ರಯಿಸಿಕೊಂಡವರಿಗೆ ಕೇಡುಗಳು ಹೆಚ್ಚಾಗುತ್ತವೆ.
    ಅವರು ಆ ವಿಗ್ರಹಗಳಿಗೆ ಅರ್ಪಿಸುವ ರಕ್ತದ ಕಾಣಿಕೆಗಳಲ್ಲಿ ನಾನು ಪಾಲುಗಾರನಾಗುವುದಿಲ್ಲ,
    ಆ ವಿಗ್ರಹಗಳ ಹೆಸರುಗಳನ್ನೂ ನಾನು ಉಚ್ಚರಿಸುವುದಿಲ್ಲ.
ನನ್ನ ಪಾಲೂ ನನ್ನ ಪಾತ್ರೆಯೂ ಯೆಹೋವನಿಂದಲೇ ಬರುತ್ತವೆ.
    ನನಗೆ ಆಧಾರವಾಗಿದ್ದು ನನ್ನ ಪಾಲನ್ನು ದಯಪಾಲಿಸುವಾತನು ನೀನೇ.
ನನ್ನ ಪಾಲು[a] ರಮಣೀಯವಾಗಿದೆ.
    ನನ್ನ ಸ್ವಾಸ್ತ್ಯವು[b] ಬಹು ಸುಂದರವಾಗಿದೆ.
ನನ್ನ ಆಲೋಚನಾಕರ್ತನಾದ ಯೆಹೋವನನ್ನು ಕೊಂಡಾಡುವೆನು;
    ರಾತ್ರಿಯಲ್ಲಿಯೂ, ಆತನು ತನ್ನ ಆಲೋಚನೆಗಳನ್ನು ನನ್ನ ಅಂತರಾತ್ಮದಲ್ಲಿ ಬೇರೂರಿಸುವನು.

ನಾನು ಯೆಹೋವನನ್ನು ಯಾವಾಗಲೂ ನನ್ನ ಎದುರಿನಲ್ಲೇ ಇಟ್ಟುಕೊಂಡಿದ್ದೇನೆ;
    ಆತನು ನನ್ನ ಬಲಗಡೆಯಲ್ಲಿರುವುದರಿಂದ ನಾನೆಂದಿಗೂ ಕದಲುವುದಿಲ್ಲ.
ಆದ್ದರಿಂದ ನನ್ನ ಹೃದಯವೂ ಆತ್ಮವೂ ಉಲ್ಲಾಸಪಡುತ್ತವೆ.
    ನನ್ನ ದೇಹವೂ ಸುರಕ್ಷಿತವಾಗಿರುವುದು.
10 ಯಾಕೆಂದರೆ, ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ.
    ನಿನ್ನ ಪವಿತ್ರನನ್ನು ಸಮಾಧಿಯಲ್ಲಿ ಕೊಳೆಯಲು ಬಿಡುವುದಿಲ್ಲ.
11 ನೀನು ನನಗೆ ಜೀವಮಾರ್ಗವನ್ನು ಉಪದೇಶಿಸುವೆ.
    ನಿನ್ನ ಸನ್ನಿಧಿಯಲ್ಲಿದ್ದರೆ ಪರಿಪೂರ್ಣ ಸಂತೋಷವಿರುವುದು;
    ನಿನ್ನ ಬಲಗಡೆಯಲ್ಲಿದ್ದರೆ ಶಾಶ್ವತವಾದ ಆನಂದವಿರುವುದು.

ಪರಮ ಗೀತ 8:6-7

ನನ್ನನ್ನು ನಿನ್ನ ಹೃದಯದ ಮೇಲೆ ಮುದ್ರೆಯನ್ನಾಗಿಯೂ,
    ನಿನ್ನ ಬೆರಳಿನಲ್ಲಿರುವ ಮುದ್ರೆಯೊತ್ತಿದ ಉಂಗುರದಂತೆಯೂ ಇಟ್ಟುಕೋ.
ಪ್ರೀತಿಯು ಮರಣದಷ್ಟೇ ಬಲಿಷ್ಠ;
    ಕಾಮೋದ್ರೇಕವು ಸಮಾಧಿಯಷ್ಟೇ ಬಲಿಷ್ಠ.
ಅದರ ಜ್ವಾಲೆಗಳು ಧಗಧಗಿಸುವ ಬೆಂಕಿ.
    ಅದು ಅತಿ ತೀಕ್ಷ್ಣವಾದ ಅಗ್ನಿಯೇ.
ಜಲರಾಶಿಗಳು ಪ್ರೀತಿಯನ್ನು ನಂದಿಸಲಾರವು;
    ನದಿಗಳು ಪ್ರೀತಿಯನ್ನು ಮುಳುಗಿಸಲಾರವು.
ಒಬ್ಬನು ಪ್ರೀತಿಗೋಸ್ಕರ ತನ್ನ ಆಸ್ತಿಯನ್ನೆಲ್ಲ ಕೊಟ್ಟುಬಿಟ್ಟರೆ
    ಅವನು ಕೇವಲ ತಿರಸ್ಕಾರಕ್ಕೆ ಗುರಿಯಾಗುವನು.

ಯೋಹಾನ 20:11-20

11 ಆದರೆ ಮರಿಯಳು ಅಳುತ್ತಾ ಸಮಾಧಿಯ ಹೊರಗೆ ನಿಂತುಕೊಂಡಿದ್ದಳು. ಆಕೆ ಅಳುತ್ತಾ ಸಮಾಧಿಯೊಳಗೆ ಬಗ್ಗಿ ನೋಡಿದಾಗ, 12 ಬಿಳುಪಾದ ಬಟ್ಟೆಗಳನ್ನು ಧರಿಸಿಕೊಂಡಿದ್ದ ಇಬ್ಬರು ದೇವದೂತರನ್ನು ಕಂಡಳು. ಯೇಸುವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಅವರಲ್ಲೊಬ್ಬನು ಯೇಸುವಿನ ತಲೆಯಿದ್ದ ಕಡೆಯಲ್ಲಿಯೂ ಮತ್ತೊಬ್ಬನು ಪಾದವಿದ್ದ ಕಡೆಯಲ್ಲಿಯೂ ಕುಳಿತುಕೊಂಡಿದ್ದನು.

13 ದೇವದೂತರು ಮರಿಯಳಿಗೆ, “ಅಮ್ಮಾ, ಏಕೆ ಅಳುತ್ತಿರುವೆ?” ಎಂದು ಕೇಳಿದರು.

ಮರಿಯಳು, “ನನ್ನ ಪ್ರಭುವಿನ ದೇಹವನ್ನು ಕೆಲವು ಜನರು ತೆಗೆದುಕೊಂಡು ಹೋಗಿದ್ದಾರೆ. ಅವರು ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟಳು. 14 ಮರಿಯಳು ಹೀಗೆ ಹೇಳಿ ಹಿಂದಕ್ಕೆ ತಿರುಗಿದಾಗ ಅಲ್ಲೇ ಯೇಸು ನಿಂತಿರುವುದನ್ನು ಕಂಡಳು. ಆದರೆ ಆತನು ಯೇಸು ಎಂಬುದು ಆಕೆಗೆ ಗೊತ್ತಿರಲಿಲ್ಲ.

15 ಯೇಸು ಆಕೆಯನ್ನು “ಅಮ್ಮಾ ಏಕೆ ಅಳುತ್ತಿರುವೆ? ನೀನು ಯಾರನ್ನು ಹುಡುಕುತ್ತಿರುವೆ?” ಎಂದು ಕೇಳಿದನು.

ಇವನು ತೋಟವನ್ನು ನೋಡಿಕೊಳ್ಳುವವನಿರಬಹುದೆಂದು ಮರಿಯಳು ಯೋಚಿಸಿಕೊಂಡು ಅವನಿಗೆ, “ಅಯ್ಯಾ, ನೀನು ಯೇಸುವನ್ನು ತೆಗೆದುಕೊಂಡು ಹೋದೆಯಾ? ಆತನನ್ನು ಎಲ್ಲಿಟ್ಟಿರುವೆ, ನನಗೆ ಹೇಳು. ನಾನು ಹೋಗಿ ಆತನನ್ನು ತೆಗೆದು ಕೊಳ್ಳುತ್ತೇನೆ” ಎಂದು ಹೇಳಿದಳು.

16 ಯೇಸು ಆಕೆಗೆ, “ಮರಿಯಳೇ” ಎಂದನು.

ಮರಿಯಳು ಯೇಸುವಿನ ಕಡೆಗೆ ತಿರುಗಿ, ಯೆಹೂದ್ಯರ ಭಾಷೆಯಲ್ಲಿ “ರಬ್ಬೂನಿ” ಎಂದಳು. (ರಬ್ಬೂನಿ ಎಂದರೆ “ಗುರು”.)

17 ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ. ನಾನು ತಂದೆಯ ಬಳಿಗೆ ಇನ್ನೂ ಹಿಂತಿರುಗಿ ಹೋಗಿಲ್ಲ. ಆದರೆ ನೀನು ನನ್ನ ಸಹೋದರರ (ಶಿಷ್ಯರ) ಬಳಿಗೆ ಹೋಗಿ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಹಿಂತಿರುಗಿ ಹೋಗುತ್ತಿದ್ದೇನೆ’ ಎಂಬುದಾಗಿ ಹೇಳು” ಎಂದನು.

18 ಮಗ್ದಲದ ಮರಿಯಳು ಶಿಷ್ಯರ ಬಳಿಗೆ ಹೋಗಿ, “ನಾನು ಪ್ರಭುವನ್ನು ಕಂಡೆನು!” ಎಂದು ಹೇಳಿದಳು. ಮತ್ತು ಯೇಸು ಹೇಳಿದ ಸಂಗತಿಗಳನ್ನು ಆಕೆ ಅವರಿಗೆ ತಿಳಿಸಿದಳು.

ಶಿಷ್ಯರಿಗೆ ಯೇಸುವಿನ ದರ್ಶನ

(ಮತ್ತಾಯ 28:16-20; ಮಾರ್ಕ 16:14-18; ಲೂಕ 24:36-49)

19 ಅಂದು ಭಾನುವಾರ, ಅದೇ ಸಾಯಂಕಾಲ ಶಿಷ್ಯರು ಒಟ್ಟಾಗಿ ಸೇರಿದ್ದರು. ಅವರು ಯೆಹೂದ್ಯರಿಗೆ ಹೆದರಿ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ಶಾಂತಿಯು ನಿಮ್ಮೊಂದಿಗಿರಲಿ!” ಎಂದು ಹೇಳಿದನು. 20 ಯೇಸು ಹೀಗೆ ಹೇಳಿದ ಮೇಲೆ, ತನ್ನ ಕೈಗಳನ್ನು ಮತ್ತು ಪಕ್ಕೆಯನ್ನು ಅವರಿಗೆ ತೋರಿಸಿದನು. ಪ್ರಭುವನ್ನು ಕಂಡು ಶಿಷ್ಯರಿಗೆ ಬಹು ಸಂತೋಷವಾಯಿತು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International