Revised Common Lectionary (Semicontinuous)
ದೇವಾಯಲಕ್ಕೆ ಹೋಗುವಾಗ ಹಾಡುವ ಗೀತೆ.
134 ಯೆಹೋವನ ಸೇವಕರೆಲ್ಲರೇ, ಆತನನ್ನು ಕೊಂಡಾಡಿರಿ.
ರಾತ್ರಿಯೆಲ್ಲಾ ದೇವಾಲಯದಲ್ಲಿ ಸೇವೆ ಮಾಡಿದವರೇ, ಆತನಿಗೆ ಸ್ತೋತ್ರಮಾಡಿರಿ.
2 ಸೇವಕರೇ, ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದ ಕಡೆಗೆ ಎತ್ತಿ
ಯೆಹೋವನನ್ನು ಕೊಂಡಾಡಿರಿ.
3 ಯೆಹೋವನು ನಿಮ್ಮನ್ನು ಚೀಯೋನಿನಿಂದ ಆಶೀರ್ವದಿಸಲಿ.
ಆತನು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಮಾಡಿದನು.
ದೇವರ ಮತ್ತು ಇಸ್ರೇಲರ ನಡುವೆ ಒಡಂಬಡಿಕೆ
24 ದೇವರು ಮೋಶೆಗೆ, “ನೀನು, ಆರೋನ, ನಾದಾಬ, ಅಬೀಹೂ ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಬೆಟ್ಟವನ್ನೇರಿಬಂದು ದೂರದಿಂದ ನನ್ನನ್ನು ಆರಾಧಿಸಬೇಕು. 2 ಬಳಿಕ ನೀನು ಮಾತ್ರ ನನ್ನ ಬಳಿಗೆ ಬರಬೇಕು; ಬೇರೆಯವರು ಬರಕೂಡದು; ಆದರೆ ಉಳಿದ ಜನರು ಬೆಟ್ಟವನ್ನೂ ಏರಕೂಡದು” ಎಂದು ಹೇಳಿದನು.
3 ಮೋಶೆಯು ಯೆಹೋವನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ಜನರಿಗೆ ತಿಳಿಸಿದನು. ಆಗ ಜನರೆಲ್ಲರೂ, “ಯೆಹೋವನ ಆಜ್ಞೆಗಳಿಗೆಲ್ಲಾ ನಾವು ವಿಧೇಯರಾಗುವೆವು” ಎಂದು ಒಂದೇ ಸ್ವರದಿಂದ ಹೇಳಿದರು.
4 ಆದ್ದರಿಂದ ಮೋಶೆ ಯೆಹೋವನ ಆಜ್ಞೆಗಳನ್ನೆಲ್ಲಾ ಒಂದು ಸುರುಳಿಯಲ್ಲಿ ಬರೆದನು. ಮರುದಿನ ಮುಂಜಾನೆ, ಅವನು ಬೇಗನೆ ಎದ್ದು ಬೆಟ್ಟದ ಕೆಳಭಾಗದ ಹತ್ತಿರ, ಹನ್ನೆರಡು ಕುಲಗಳಿಗೆ ಒಂದೊಂದರಂತೆ ಹನ್ನೆರಡು ಕಂಬಗಳುಳ್ಳ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ಇಸ್ರೇಲರ ಹನ್ನೆರಡು ಕುಲಗಳಿಗೆ ಒಂದೊಂದರಂತೆ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು. 5 ಬಳಿಕ ಮೋಶೆಯು ಯಜ್ಞಗಳನ್ನು ಸಮರ್ಪಿಸುವುದಕ್ಕೆ ಇಸ್ರೇಲರ ಯೌವನಸ್ಥರನ್ನು ಕಳುಹಿಸಿದನು. ಅವರು ಯೆಹೋವನಿಗೆ ಎತ್ತುಗಳನ್ನು ಸರ್ವಾಂಗಹೋಮಗಳಾಗಿಯೂ ಸಮಾಧಾನಯಜ್ಞಗಳಾಗಿಯೂ ಅರ್ಪಿಸಿದರು.
6 ಮೋಶೆಯು ಈ ಪಶುಗಳ ರಕ್ತವನ್ನು ತೆಗೆದುಕೊಂಡು ಅದರಲ್ಲಿ ಅರ್ಧಭಾಗವನ್ನು ಬೋಗುಣಿಗಳಲ್ಲಿ ಹಾಕಿದನು; ಉಳಿದ ಅರ್ಧಭಾಗವನ್ನು ಯಜ್ಞವೇದಿಕೆಯ ಮೇಲೆ ಸುರಿದನು.
7 ವಿಶೇಷ ಒಡಂಬಡಿಕೆಯಿಂದ ಬರೆಯಲ್ಪಟ್ಟಿದ್ದ ಸುರುಳಿಯನ್ನು ಮೋಶೆಯು ಎಲ್ಲಾ ಜನರಿಗೆ ಕೇಳುವಂತೆ ಓದಿದನು. ಆಗ ಜನರು, “ಯೆಹೋವನ ಆಜ್ಞೆಗಳನ್ನೆಲ್ಲ ಅನುಸರಿಸಿ ಆತನಿಗೆ ವಿಧೇಯರಾಗಿರುತ್ತೇವೆ” ಅಂದರು.
8 ಆಗ ಮೋಶೆ ಯಜ್ಞಗಳ ರಕ್ತದಿಂದ ತುಂಬಿದ ಬೋಗುಣಿಯನ್ನು ತೆಗೆದುಕೊಂಡು ಅದರಲ್ಲಿದ್ದ ರಕ್ತವನ್ನು ಜನರ ಮೇಲೆ ಚಿಮಿಕಿಸಿ, “ಈ ಸುರುಳಿಯಲ್ಲಿರುವ ವಾಕ್ಯಗಳಿಗನುಸಾರವಾಗಿ ಯೆಹೋವನು ನಿಮ್ಮೊಡನೆ ಒಂದು ವಿಶೇಷ ಒಡಂಬಡಿಕೆಯನ್ನು ಮಾಡಿಕೊಂಡಿದ್ದಾನೆಂಬುದನ್ನು ಈ ರಕ್ತವು ಸೂಚಿಸುತ್ತದೆ” ಎಂದು ಹೇಳಿದನು.
9 ಬಳಿಕ ಮೋಶೆ, ಆರೋನ, ನಾದಾಬ, ಅಬೀಹೂ ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಬೆಟ್ಟವನ್ನೇರಿದರು. 10 ಈ ಜನರು ಇಸ್ರೇಲರ ಯೆಹೋವನನ್ನು ನೋಡಿದರು. ದೇವರು ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟಿನ ಮೇಲೆ ನಿಂತುಕೊಂಡಿದ್ದನು! 11 ಇಸ್ರೇಲರ ನಾಯಕರೆಲ್ಲರೂ ಯೆಹೋವನನ್ನು ನೋಡಿದರು, ಆದರೆ ದೇವರು ಅವರನ್ನು ನಾಶಮಾಡಲಿಲ್ಲ. ಅವರೆಲ್ಲರೂ ದೇವದರ್ಶನ ಮಾಡಿ ಅನ್ನಪಾನಗಳನ್ನು ತೆಗೆದುಕೊಂಡರು.
ಏಳು ಮಂದಿ ಶಿಷ್ಯರಿಗೆ ಯೇಸುವಿನ ದರ್ಶನ
21 ತರುವಾಯ, ಯೇಸು ತನ್ನ ಶಿಷ್ಯರಿಗೆ ತಿಬೇರಿಯ (ಗಲಿಲಾಯ) ಸರೋವರದ ಬಳಿ ಕಾಣಿಸಿಕೊಂಡನು. ಅದು ಹೀಗೆ ನಡೆಯಿತು: 2 ಕೆಲವು ಶಿಷ್ಯರು ಒಟ್ಟಾಗಿ ಸೇರಿದ್ದರು. ಅವರು ಯಾರೆಂದರೆ, ಸೀಮೋನ್ ಪೇತ್ರ, ದಿದುಮನೆಂಬ ತೋಮ, ಗಲಿಲಾಯಕ್ಕೆ ಸೇರಿದ ಕಾನಾ ಊರಿನವನಾದ ನತಾನಿಯೇಲ, ಜೆಬೆದಾಯನ ಇಬ್ಬರು ಗಂಡುಮಕ್ಕಳು ಮತ್ತು ಇನ್ನಿಬ್ಬರು ಶಿಷ್ಯರು. 3 ಪೇತ್ರನು ಅವರಿಗೆ, “ನಾನು ಮೀನು ಹಿಡಿಯಲು ಹೋಗುತ್ತಿದ್ದೇನೆ” ಎಂದನು.
ಉಳಿದ ಶಿಷ್ಯರು, “ನಾವೂ ನಿನ್ನೊಂದಿಗೆ ಬರುತ್ತೇವೆ” ಎಂದು ಹೇಳಿದರು. ಅಂತೆಯೇ ಶಿಷ್ಯರೆಲ್ಲಾ ಹೊರಟು ದೋಣಿಯನ್ನು ಹತ್ತಿದರು. ಅವರು ರಾತ್ರಿಯೆಲ್ಲಾ ಬಲೆ ಬೀಸಿದರೂ ಒಂದು ಮೀನೂ ಸಿಗಲಿಲ್ಲ.
4 ಅಂದು ಮುಂಜಾನೆಯಾದಾಗ, ಯೇಸು ತೀರದಲ್ಲಿ ನಿಂತುಕೊಂಡಿದ್ದನು. ಆದರೆ ಆತನೇ ಯೇಸು ಎಂಬುದು ಶಿಷ್ಯರಿಗೆ ಗೊತ್ತಿರಲಿಲ್ಲ. 5 ಆಗ ಆತನು ತನ್ನ ಶಿಷ್ಯರಿಗೆ, “ಮಕ್ಕಳೇ, ನಿಮಗೆ ಮೀನು ಸಿಕ್ಕಿತೋ?” ಎಂದು ಕೇಳಿದನು.
ಶಿಷ್ಯರು, “ಇಲ್ಲ” ಎಂದು ಉತ್ತರಕೊಟ್ಟರು.
6 ಯೇಸು, “ನಿಮ್ಮ ದೋಣಿಯ ಬಲಭಾಗದಲ್ಲಿ ನಿಮ್ಮ ಬಲೆ ಬೀಸಿರಿ. ಅಲ್ಲಿ ಕೆಲವು ಮೀನುಗಳು ಸಿಕ್ಕುತ್ತವೆ” ಎಂದು ಹೇಳಿದನು. ಶಿಷ್ಯರು ಹಾಗೆಯೇ ಮಾಡಿದರು. ಬಹಳ ಮೀನುಗಳು ಸಿಕ್ಕಿಕೊಂಡದ್ದರಿಂದ ಅವರು ಬಲೆಯನ್ನು ದೋಣಿಯೊಳಗೆ ಎಳೆದುಕೊಳ್ಳಲಾಗಲಿಲ್ಲ.
7 ಯೇಸುವಿನ ಪ್ರೀತಿಯ ಶಿಷ್ಯನು ಪೇತ್ರನಿಗೆ, “ಆ ಮನುಷ್ಯನು ಪ್ರಭುವೇ!” ಎಂದು ಹೇಳಿದನು. ಕೂಡಲೇ ಪೇತ್ರನು ತನ್ನ ಅಂಗಿಯನ್ನು ಹಾಕಿಕೊಂಡು, ನೀರಿಗೆ ಧುಮುಕಿದನು. (ಪೇತ್ರನು ಮೀನು ಹಿಡಿಯುವುದಕ್ಕಾಗಿ ತನ್ನ ಅಂಗಿಯನ್ನು ಬಿಚ್ಚಿಟ್ಟಿದ್ದನು.) 8 ಉಳಿದ ಶಿಷ್ಯರು ದೋಣಿಯಲ್ಲಿ ತೀರಕ್ಕೆ ಹೋದರು. ಅವರು ಬಲೆತುಂಬ ಮೀನುಗಳನ್ನು ದಡಕ್ಕೆ ಎಳೆದುಕೊಂಡು ಹೋದರು. ಅವರು ದಡದಿಂದ ಬಹುದೂರದಲ್ಲೇನೂ ಇರಲಿಲ್ಲ. ಕೇವಲ ಮುನ್ನೂರು ಅಡಿಗಳಷ್ಟು ದೂರದಲ್ಲಿದ್ದರು. 9 ಶಿಷ್ಯರು ದೋಣಿಯಿಂದ ಇಳಿದು ದಡಕ್ಕೆ ಹೋದಾಗ, ಬೆಂಕಿಯ ಕೆಂಡಗಳನ್ನು ಕಂಡರು. ಬೆಂಕಿಯ ಮೇಲೆ ಮೀನುಗಳಿದ್ದವು ಮತ್ತು ಕೆಲವು ರೊಟ್ಟಿಗಳೂ ಅಲ್ಲಿದ್ದವು. 10 ಬಳಿಕ ಯೇಸು, “ನೀವು ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ” ಎಂದು ಹೇಳಿದನು.
11 ಸೀಮೋನ್ ಪೇತ್ರನು ದೋಣಿಯೊಳಕ್ಕೆ ಹೋಗಿ ಬಲೆಯನ್ನು ದಡಕ್ಕೆ ಎಳೆದುಕೊಂಡು ಬಂದನು. ಬಲೆಯು ದೊಡ್ಡ ಮೀನುಗಳಿಂದ ತುಂಬಿತ್ತು. ಅದರಲ್ಲಿ 153 ಮೀನುಗಳಿದ್ದವು. ಅವು ಬಹಳ ಭಾರವಾಗಿದ್ದರೂ ಬಲೆಯು ಹರಿದುಹೋಗಲಿಲ್ಲ. 12 ಯೇಸು ಅವರಿಗೆ, “ಬಂದು ಊಟ ಮಾಡಿ” ಎಂದು ಹೇಳಿದನು. ಶಿಷ್ಯರಲ್ಲಿ ಒಬ್ಬರಾದರೂ, “ನೀನು ಯಾರು?” ಎಂದು ಆತನನ್ನು ಕೇಳಲಿಲ್ಲ. ಆತನು ಪ್ರಭುವೆಂದು ಅವರಿಗೆ ತಿಳಿದಿತ್ತು. 13 ಯೇಸುವು ಸಮೀಪಕ್ಕೆ ಬಂದು ರೊಟ್ಟಿಯನ್ನು ಮತ್ತು ಮೀನುಗಳನ್ನು ತೆಗೆದುಕೊಂಡು ಅವರಿಗೆ ಕೊಟ್ಟನು.
14 ಯೇಸು ಪುನರುತ್ಥಾನ ಹೊಂದಿದ ಮೇಲೆ ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಲ.
Kannada Holy Bible: Easy-to-Read Version. All rights reserved. © 1997 Bible League International