Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 8

ರಚನೆಗಾರ: ದಾವೀದ.

ನಮ್ಮ ಒಡೆಯನಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲೆಲ್ಲಾ ಅತಿಶಯವಾದದ್ದು.
    ನಿನ್ನ ಹೆಸರು ಪರಲೋಕದಲ್ಲೆಲ್ಲಾ ನಿನ್ನನ್ನು ಮಹಿಮೆಪಡಿಸುವುದು.

ಚಿಕ್ಕಮಕ್ಕಳ ಬಾಯಿಗಳೂ ಕೂಸುಗಳ ಬಾಯಿಗಳೂ ನಿನ್ನನ್ನು ಸ್ತುತಿಸಿ ಕೊಂಡಾಡುತ್ತವೆ;
    ನಿನ್ನ ವೈರಿಗಳ ಬಾಯಿ ಮುಚ್ಚಿಸುವುದಕ್ಕಾಗಿಯೇ ನೀನು ಹೀಗೆ ಮಾಡಿರುವೆ.

ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ
    ನೀನು ಸೃಷ್ಟಿಸಿದ ಚಂದ್ರನಕ್ಷತ್ರಗಳನ್ನೂ ನೋಡಿ ಆಶ್ಚರ್ಯಗೊಳ್ಳುವೆನು.
ಮನುಷ್ಯರಿಗೆ ನೀನೇಕೆ ಪ್ರಾಮುಖ್ಯತೆ ಕೊಡಬೇಕು?
    ನೀನೇಕೆ ಅವರನ್ನು ಜ್ಞಾಪಿಸಿಕೊಳ್ಳಬೇಕು?
ಮನುಷ್ಯರು ಎಷ್ಟರವರು?
    ನೀನೇಕೆ ಅವರನ್ನು ಗಣನೆಗೆ ತೆಗೆದುಕೊಳ್ಳಬೇಕು?

ಆದರೆ ನೀನು ಮನುಷ್ಯರಿಗೆ ಪ್ರಾಮುಖ್ಯತೆ ಕೊಟ್ಟಿರುವೆ.
    ನೀನು ಅವರನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿಸಿದೆ.
    ನೀನು ಅವರಿಗೆ ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿಟ್ಟಿರುವೆ.
ನೀನು ಸೃಷ್ಟಿಸಿದ ಪ್ರತಿಯೊಂದರ ಮೇಲೂ ಅವರನ್ನು ಅಧಿಪತಿಯನ್ನಾಗಿ ಮಾಡಿರುವೆ.
    ನೀನು ಪ್ರತಿಯೊಂದನ್ನೂ ಅವರಿಗೆ ಅಧೀನಗೊಳಿಸಿರುವೆ.
ಅವರು ಎಲ್ಲಾ ಪಶುಗಳ ಮೇಲೆಯೂ ಕಾಡುಪ್ರಾಣಿಗಳ ಮೇಲೆಯೂ ದೊರೆತನ ಮಾಡುವರು.
ಆಕಾಶದ ಪಕ್ಷಿಗಳ ಮೇಲೆಯೂ ಸಾಗರದ ಮೀನುಗಳ ಮೇಲೆಯೂ
    ದೊರೆತನ ಮಾಡುವರು.
ನಮ್ಮ ದೇವರಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲೆಲ್ಲಾ ಎಷ್ಟೋ ಅತಿಶಯವಾಗಿದೆ.

ಯೋಬನು 38:1-11

ಯೋಬನಿಗೆ ದೇವರ ಉತ್ತರ

38 ಆಗ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು:

“ನನ್ನ ಉದ್ದೇಶಗಳನ್ನು ಮೂರ್ಖತನದ ಮಾತುಗಳಿಂದ ಗಲಿಬಿಲಿಗೊಳಿಸುತ್ತಿರುವ
    ಈ ಮನುಷ್ಯನು ಯಾರು?
ಯೋಬನೇ, ನಡುಕಟ್ಟಿಕೊಂಡು ಬಲಿಷ್ಠನಾಗಿರು.
    ನಾನು ನಿನಗೆ ಕೇಳುವ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ಧನಾಗು.

“ಯೋಬನೇ, ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿದ್ದೆ?
    ನೀನು ಬಹು ಜಾಣನಾಗಿದ್ದರೆ ನನಗೆ ಉತ್ತರಕೊಡು.
ಯೋಬನೇ, ಭೂಮಿಯ ಅಳತೆಗಳನ್ನು ಯಾರು ನಿರ್ಧರಿಸಿದರು?
    ಭೂಮಿಯ ಅಳತೆಯನ್ನು ನೂಲುಗುಂಡಿನಿಂದ ಅಳೆದವರು ಯಾರು?
ಭೂಮಿಯ ಆಧಾರಸ್ತಂಭಗಳು ಯಾವುದರ ಮೇಲೆ ನೆಲೆಗೊಂಡಿವೆ?
    ಭೂಮಿಯ ಅಸ್ತಿವಾರಕ್ಕೆ ಮೊದಲ ಕಲ್ಲನ್ನು ಹಾಕಿದವರು ಯಾರು?
ಅದು ಸಂಭವಿಸಿದಾಗ, ಮುಂಜಾನೆಯ ನಕ್ಷತ್ರಗಳು ಒಟ್ಟಾಗಿ ಹಾಡಿದವು;
    ದೇವದೂತರುಗಳು ಆನಂದಘೋಷ ಮಾಡಿದರು!

“ಯೋಬನೇ, ಭೂಮಿಯ ಗರ್ಭದೊಳಗಿಂದ ನುಗ್ಗಿ ಬರುವ ಸಮುದ್ರದ ನೀರನ್ನು
    ನಿಲ್ಲಿಸುವುದಕ್ಕಾಗಿ ಬಾಗಿಲುಗಳನ್ನು ಮುಚ್ಚಿದವರು ಯಾರು?
ಆ ಸಮಯದಲ್ಲಿ ನಾನು ಸಮುದ್ರವನ್ನು ಮೋಡಗಳಿಂದ ಮುಚ್ಚಿ
    ಕಾರ್ಗತ್ತಲನ್ನು ಬಟ್ಟೆಯಂತೆ ಸುತ್ತಿಟ್ಟೆನು.
10 ನಾನು ಸಮುದ್ರಕ್ಕೆ ಮೇರೆಯನ್ನು ನಿಗದಿಪಡಿಸಿ
    ಕದ ಹಾಕಿದ ಬಾಗಿಲುಗಳ ಹಿಂಭಾಗದಲ್ಲಿಟ್ಟೆನು.
11 ನಾನು ಸಮುದ್ರಕ್ಕೆ, ‘ನೀನು ಇಲ್ಲಿಯವರೆಗೆ ಬರಬಹುದು, ಆದರೆ ಇದಕ್ಕಿಂತ ಹೆಚ್ಚಿಗೆ ಬರಕೂಡದು.
    ನಿನ್ನ ಹೆಮ್ಮೆಯ ಅಲೆಗಳು ಇಲ್ಲೇ ನಿಲ್ಲಬೇಕು’ ಎಂದು ಅಪ್ಪಣೆಕೊಟ್ಟೆನು.

2 ತಿಮೊಥೆಯನಿಗೆ 1:8-12

ನಮ್ಮ ಪ್ರಭುವಾದ ಯೇಸುವನ್ನು ಕುರಿತು ಜನರಿಗೆ ತಿಳಿಸುವುದಕ್ಕಾಗಲಿ ಪ್ರಭುವಿಗಾಗಿ ಸೆರೆಯಲ್ಲಿರುವ ನನ್ನ ವಿಷಯದಲ್ಲಾಗಲಿ ನಾಚಿಕೆಪಟ್ಟುಕೊಳ್ಳಬೇಡ. ಅದಕ್ಕೆ ಬದಲಾಗಿ ಸುವಾರ್ತೆಗೋಸ್ಕರ ನನ್ನೊಡನೆ ಸಂಕಟವನ್ನು ಅನುಭವಿಸು. ಅದಕ್ಕೆ ಬೇಕಾದ ಶಕ್ತಿಯನ್ನು ದೇವರೇ ನಮಗೆ ದಯಪಾಲಿಸುತ್ತಾನೆ.

ಆತನು ನಮ್ಮನ್ನು ರಕ್ಷಿಸಿ, ತನ್ನ ಪವಿತ್ರ ಜನರಾಗಿರುವುದಕ್ಕಾಗಿ ನಮ್ಮನ್ನು ಕರೆದನು. ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದ ಹೀಗಾಯಿತು ಎಂದಲ್ಲ. ಆತನು ತನ್ನ ಸಂಕಲ್ಪಕ್ಕನುಸಾರವಾಗಿ ಮತ್ತು ಕೃಪೆಗನುಸಾರವಾಗಿ ನಮ್ಮನ್ನು ರಕ್ಷಿಸಿ ತನ್ನವರನ್ನಾಗಿ ಮಾಡಿದನು. ಅನಾದಿಕಾಲದಲ್ಲಿಯೇ ಈ ಕೃಪೆಯು ಕ್ರಿಸ್ತ ಯೇಸುವಿನ ಮೂಲಕ ನಮಗೆ ದೊರೆಯಿತು. 10 ಆ ಕೃಪೆಯನ್ನು ಈವರೆಗೆ ನಮಗೆ ತೋರ್ಪಡಿಸಿರಲಿಲ್ಲ. ನಮ್ಮ ರಕ್ಷಕನಾದ ಕ್ರಿಸ್ತ ಯೇಸು ಪ್ರತ್ಯಕ್ಷನಾದಾಗ ಅದನ್ನು ನಮಗೆ ತೋರಿಸಲಾಯಿತು. ಯೇಸು ಮರಣವನ್ನು ನಾಶಪಡಿಸಿ, ನಮಗೆ ಜೀವಮಾರ್ಗವನ್ನು ಸುವಾರ್ತೆಯ ಮೂಲಕ ತೋರಿದನು.

11 ಆ ಸುವಾರ್ತೆಗೋಸ್ಕರ ನನ್ನನ್ನು ಪ್ರಚಾರಕನನ್ನಾಗಿಯೂ ಅಪೊಸ್ತಲನನ್ನಾಗಿಯೂ ಉಪದೇಶಕನನ್ನಾಗಿಯೂ ಆರಿಸಿಕೊಳ್ಳಲಾಯಿತು. 12 ಸುವಾರ್ತೆಯನ್ನು ತಿಳಿಸಿದ್ದರಿಂದಲೇ ನಾನೀಗ ಸಂಕಟವನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನವು ಬರುವತನಕ ಸಂರಕ್ಷಿಸಲು ಆತನು ಸಮರ್ಥನೆಂಬುದನ್ನು ಖಚಿತವಾಗಿ ಬಲ್ಲೆನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International