Revised Common Lectionary (Semicontinuous)
ಮೂವರು ಸಂದರ್ಶಕರು
18 ಅಬ್ರಹಾಮನು ಮಮ್ರೆಯಲ್ಲಿದ್ದ ಓಕ್ ಮರಗಳ ತೋಪಿನ ಸಮೀಪದಲ್ಲಿ ವಾಸಿಸುತ್ತಿದ್ದಾಗ ಯೆಹೋವನು ಅವನಿಗೆ ಕಾಣಿಸಿಕೊಂಡನು. ಅಂದು ಬಿಸಿಲಿನ ತಾಪದಿಂದಾಗಿ ಅಬ್ರಹಾಮನು ತನ್ನ ಗುಡಾರದ ಬಾಗಿಲ ಬಳಿ ಕುಳಿತಿದ್ದನು. 2 ಅಬ್ರಹಾಮನು ದೃಷ್ಟಿಸಿ ನೋಡಿದಾಗ ತನ್ನ ಮುಂದೆ ಮೂವರು ಪುರುಷರು ನಿಂತಿರುವುದನ್ನು ಕಂಡನು. ಕೂಡಲೇ ಅವರ ಬಳಿಗೆ ಓಡಿಹೋಗಿ ಅವರಿಗೆ ಸಾಷ್ಟಾಂಗನಮಸ್ಕಾರ ಮಾಡಿ ಅವರಿಗೆ, 3 “ಸ್ವಾಮಿಗಳೇ, ನಿಮ್ಮ ಸೇವಕನಾದ ನನ್ನ ಜೊತೆಯಲ್ಲಿ ಸ್ವಲ್ಪ ಸಮಯವಿರಿ. 4 ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಲು ನೀರನ್ನು ತಂದುಕೊಡುವೆನು. ನೀವು ಮರದ ಕೆಳಗೆ ವಿಶ್ರಾಂತಿ ತೆಗೆದುಕೊಳ್ಳಿರಿ. 5 ನಾನು ನಿಮಗೆ ಊಟವನ್ನು ತಂದುಕೊಡುವೆನು. ನೀವು ಬೇಕಾದಷ್ಟು ಊಟ ಮಾಡಿದ ನಂತರ ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು” ಎಂದು ಹೇಳಿದನು.
ಆ ಮೂವರು ಪುರುಷರು, “ಸರಿ, ನೀನು ಹೇಳಿದಂತೆಯೇ ಮಾಡು” ಅಂದರು.
6 ಅಬ್ರಹಾಮನು ಗುಡಾರಕ್ಕೆ ಬೇಗನೆ ಹೋಗಿ ಸಾರಳಿಗೆ, “ಮೂರು ದೊಡ್ಡ ರೊಟ್ಟಿಗಳಿಗೆ ಬೇಕಾಗುವಷ್ಟು ಗೋಧಿ ಹಿಟ್ಟನ್ನು ಬೇಗನೆ ನಾದು” ಎಂದು ಹೇಳಿದನು. 7 ಬಳಿಕ ಅವನು ತನ್ನ ಪಶುಗಳಿದ್ದಲ್ಲಿಗೆ ಓಡಿಹೋಗಿ ಉತ್ತಮವಾದ ಎಳೆಕರುವನ್ನು ತೆಗೆದು ಸೇವಕನಿಗೆ ಕೊಟ್ಟು, “ಬೇಗನೇ ಕರುವನ್ನು ಕೊಯ್ದು, ಊಟಕ್ಕೆ ಸಿದ್ಧಮಾಡು” ಎಂದು ಹೇಳಿದನು. 8 ಅಬ್ರಹಾಮನು ಆ ಮೂವರಿಗೆ ಮಾಂಸದ ಅಡಿಗೆಯನ್ನು ಬಡಿಸಿದನು. ಇದಲ್ಲದೆ ಅವನು ಹಾಲನ್ನೂ ಬೆಣ್ಣೆಯನ್ನೂ ಕೊಟ್ಟನು. ಆ ಮೂವರು ಊಟ ಮಾಡುವಾಗ ಅಬ್ರಹಾಮನು ಅವರ ಸಮೀಪದಲ್ಲಿ ಮರದ ಕೆಳಗೆ ನಿಂತುಕೊಂಡಿದ್ದನು.
9 ಆ ಪುರುಷರು ಅಬ್ರಹಾಮನಿಗೆ, “ನಿನ್ನ ಹೆಂಡತಿಯಾದ ಸಾರಳು ಎಲ್ಲಿ?” ಎಂದು ಕೇಳಿದರು.
ಅಬ್ರಹಾಮನು ಅವರಿಗೆ, “ಆಕೆ ಗುಡಾರದಲ್ಲಿ ಇದ್ದಾಳೆ” ಅಂದನು.
10 ಆಗ ಯೆಹೋವನು ಅವನಿಗೆ, “ನಾನು ಮತ್ತೆ ವಸಂತಕಾಲದಲ್ಲಿ ಬರುತ್ತೇನೆ. ಆ ಸಮಯದಲ್ಲಿ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿರುವನು” ಎಂದು ಹೇಳಿದನು.
ಸಾರಳು ಗುಡಾರದಲ್ಲಿದ್ದುಕೊಂಡು ಇದನ್ನೆಲ್ಲಾ ಕೇಳಿಸಿಕೊಳ್ಳುತ್ತಿದ್ದಳು. ಅವಳಿಗೆ ಈ ಸಂಗತಿಯೂ ಕೇಳಿಸಿತು. 11 ಅಬ್ರಹಾಮನೂ ಮತ್ತು ಸಾರಳೂ ತುಂಬ ವೃದ್ಧರಾಗಿದ್ದರು. ಸಾರಳಿಗೂ ಮಕ್ಕಳು ಹುಟ್ಟುವ ಕಾಲ ಆಗಿಹೋಗಿತ್ತು. 12 ಆದ್ದರಿಂದ ಸಾರಳಿಗೆ ನಂಬಲಾಗಲಿಲ್ಲ. ಆಕೆ ತನ್ನೊಳಗೆ, “ಈಗಾಗಲೇ ನನಗೆ ವಯಸ್ಸಾಗಿದೆ; ನನ್ನ ಗಂಡನಿಗೂ ವಯಸ್ಸಾಗಿದೆ” ಅಂದುಕೊಂಡಳು.
13 ಆಗ ಯೆಹೋವನು ಅಬ್ರಹಾಮನಿಗೆ, “ನಾನು ಹೇಳುವುದನ್ನು ಸಾರಳು ನಂಬುತ್ತಿಲ್ಲ. ಆಕೆಯು ನಗುತ್ತಾ ತನ್ನೊಳಗೆ, ‘ನನಗೆ ಮಕ್ಕಳಾಗದಷ್ಟು ವಯಸ್ಸಾಗಿದೆ’ ಎಂದು ಹೇಳಿದ್ದೇಕೆ? 14 ಯೆಹೋವನಿಗೆ ಅಸಾಧ್ಯವಾದುದುಂಟೇ? ನಾನು ಮತ್ತೆ ವಸಂತಕಾಲದಲ್ಲಿ ಬರುವೆನು. ಆಗ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿದ್ದೇ ಇರುವನು” ಅಂದನು.
15 ಆದರೆ ಸಾರಳು ಭಯಪಟ್ಟು, “ನಾನು ನಗಲಿಲ್ಲ” ಅಂದಳು.
ಅದಕ್ಕೆ ಯೆಹೋವನು, “ಇಲ್ಲ, ನೀನು ನಕ್ಕಿದ್ದು ನಿಜ!” ಅಂದನು.
ಸಾರಳಿಗೆ ಮಗುವಾಯಿತು
21 ಯೆಹೋವನು ಸಾರಳಿಗೆ ಮಾಡಿದ ವಾಗ್ದಾನವನ್ನು ಮರೆಯದೆ ಈಡೇರಿಸಿದನು. 2 ಸಾರಳು ವೃದ್ಧನಾಗಿದ್ದ ಅಬ್ರಹಾಮನಿಂದ ಗರ್ಭಿಣಿಯಾಗಿ, ಒಂದು ಗಂಡುಮಗುವನ್ನು ಹೆತ್ತಳು. ದೇವರು ವಾಗ್ದಾನ ಮಾಡಿದಂತೆಯೇ ಈ ಸಂಗತಿಗಳೆಲ್ಲ ತಕ್ಕಕಾಲದಲ್ಲಿ ನಡೆದವು. 3 ಅಬ್ರಹಾಮನು ಸಾರಳಲ್ಲಿ ತನ್ನಿಂದ ಹುಟ್ಟಿದ ಮಗನಿಗೆ ಇಸಾಕ ಎಂದು ಹೆಸರಿಟ್ಟನು. 4 ಇಸಾಕನಿಗೆ ಎಂಟು ದಿನಗಳಾಗಿದ್ದಾಗ, ದೇವರ ಆಜ್ಞೆಗನುಸಾರವಾಗಿ ಅಬ್ರಹಾಮನು ಅವನಿಗೆ ಸುನ್ನತಿ ಮಾಡಿದನು.
5 ಅಬ್ರಹಾಮನಿಗೆ ನೂರು ವರ್ಷಗಳಾಗಿದ್ದಾಗ, ಅವನ ಮಗನಾದ ಇಸಾಕನು ಹುಟ್ಟಿದನು. 6 ಸಾರಳು, “ದೇವರು, ನನ್ನನ್ನು ನಗುವಂತೆ ಮಾಡಿದ್ದಾನೆ, ಇದನ್ನು ಕೇಳಿದ ಪ್ರತಿಯೊಬ್ಬರು ನನ್ನೊಡನೆ ನಗುವರು. 7 ಅಬ್ರಹಾಮನಿಗೆ ಸಾರಳಲ್ಲಿ ಮಗನು ಹುಟ್ಟುತ್ತಾನೆಂದು ಯಾರೂ ಯೋಚಿಸಿರಲಿಲ್ಲ. ಅಬ್ರಹಾಮನು ವೃದ್ಧನಾಗಿದ್ದರೂ ಈಗ ನಾನು ಅವನಿಗೆ ಒಬ್ಬ ಮಗನನ್ನು ಕೊಟ್ಟಿದ್ದೇನೆ” ಅಂದಳು.
116 ಯೆಹೋವನು ನನ್ನ ಮೊರೆಯನ್ನು ಕೇಳಿದ್ದರಿಂದ
ನಾನು ಆತನನ್ನು ಪ್ರೀತಿಸುತ್ತೇನೆ.
2 ನಾನು ಆತನಿಗೆ ಮೊರೆಯಿಡುವಾಗಲೆಲ್ಲಾ
ಆತನು ನನಗೆ ಕಿವಿಗೊಡುತ್ತಾನೆ.
12 ಯೆಹೋವನ ಮಹೋಪಕಾರಗಳಿಗೆ ಬದಲೇನು ಕೊಡಲಿ?
ನನ್ನಲ್ಲಿರುವುದೆಲ್ಲ ಯೆಹೋವನದೇ.
13 ನನ್ನನ್ನು ರಕ್ಷಿಸಿದ್ದರಿಂದ ಆತನಿಗೆ ಪಾನದ್ರವ್ಯವನ್ನು ಅರ್ಪಿಸುವೆನು.
ಆತನ ಹೆಸರಿನಲ್ಲಿ ಪ್ರಾರ್ಥಿಸುವೆನು.
14 ನಾನು ಯೆಹೋವನಿಗೆ ಮಾಡಿದ ಹರಕೆಗಳನ್ನು
ಜನರ ಮುಂದೆ ಆತನಿಗೆ ಸಲ್ಲಿಸುವೆನು.
15 ಯೆಹೋವನು ತನ್ನ ಭಕ್ತರ ಮರಣವನ್ನು
ಅಲ್ಪವೆಂದು ಎಣಿಸುವುದಿಲ್ಲ.
16 ಯೆಹೋವನೇ, ನಾನು ನಿನ್ನ ಸೇವಕ.
ನಿನ್ನ ದಾಸಿಯರಲ್ಲೊಬ್ಬಳ ಮಗ.
ನೀನೇ ನನ್ನ ಪ್ರಥಮ ಉಪಾಧ್ಯಾಯ!
17 ನಾನು ನಿನಗೆ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸುವೆನು.
ಆತನ ಹೆಸರಿನಲ್ಲಿ ಪ್ರಾರ್ಥಿಸುವೆನು.
18 ನನ್ನ ಹರಕೆಗಳನ್ನು
ಯೆಹೋವನಿಗೆ ಜನರ ಮುಂದೆ ಸಲ್ಲಿಸುವೆನು.
19 ಜೆರುಸಲೇಮಿನ ದೇವಾಲಯದ ಅಂಗಳಗಳಲ್ಲಿ
ಈ ಯಜ್ಞಗಳನ್ನು ಅರ್ಪಿಸುವೆನು.
ಯೆಹೋವನಿಗೆ ಸ್ತೋತ್ರವಾಗಲಿ!
ನೀತಿನಿರ್ಣಯ
5 ಹೀಗಿರಲಾಗಿ, ನಾವು ನಂಬಿಕೆಯ ಮೂಲಕ ನೀತಿವಂತರಾಗಿದ್ದೇವೆ. ಆದಕಾರಣ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿದೆ. 2 ಈಗ ನಾವು ಆನಂದಿಸುತ್ತಿರುವ ದೇವರ ಕೃಪಾಶ್ರಯಕ್ಕೆ ಕ್ರಿಸ್ತನೇ ನಮ್ಮನ್ನು ನಮ್ಮ ನಂಬಿಕೆಯ ಮೂಲಕ ತಂದಿದ್ದಾನೆ. ದೇವರ ಮಹಿಮೆಯನ್ನು ಹೊಂದುವೆವು ಎಂಬ ನಿರೀಕ್ಷೆಯು ನಮಗಿರುವುದರಿಂದ ನಾವು ಬಹು ಸಂತೋಷವಾಗಿದ್ದೇವೆ. 3 ಅಲ್ಲದೆ, ನಮ್ಮ ಕಷ್ಟಸಂಕಟಗಳಲ್ಲಿಯೂ ಸಂತೋಷವಾಗಿದ್ದೇವೆ. ಏಕೆಂದರೆ, ಈ ಕಷ್ಟಸಂಕಟಗಳು ನಮ್ಮಲ್ಲಿ ಹೆಚ್ಚು ತಾಳ್ಮೆಯನ್ನು ಉಂಟುಮಾಡುತ್ತವೆ. 4 ನಾವು ಬಲಶಾಲಿಗಳಾಗಿದ್ದೇವೆ ಎಂಬುದಕ್ಕೆ ಈ ತಾಳ್ಮೆಯೇ ಆಧಾರ. ನಮಗೆ ನಿರೀಕ್ಷೆಯನ್ನು ಕೊಡುವಂಥದ್ದು ಈ ಆಧಾರವೇ. 5 ನಮ್ಮ ಈ ನಿರೀಕ್ಷೆಯು ನಮ್ಮನ್ನು ಎಂದಿಗೂ ನಿರಾಶರನ್ನಾಗಿ ಮಾಡುವುದಿಲ್ಲ. ಅದು ಎಂದಿಗೂ ವ್ಯರ್ಥವಾಗುವುದಿಲ್ಲ. ಏಕೆಂದರೆ ದೇವರು ನಮಗೆ ಉಡುಗೊರೆಯಾಗಿ ಕೊಟ್ಟಿರುವ ಪವಿತ್ರಾತ್ಮನ ಮೂಲಕ ತನ್ನ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾನೆ.
6 ನಾವು ಬಲಹೀನರೂ ದೇವರಿಗೆ ವಿರೋಧವಾಗಿ ಜೀವಿಸುವವರೂ ಆಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲದಲ್ಲಿ ನಮಗೋಸ್ಕರ ಪ್ರಾಣಕೊಟ್ಟನು. 7 ನೀತಿವಂತನ ಪ್ರಾಣವನ್ನು ರಕ್ಷಿಸುವುದಕ್ಕಾಗಿ ಒಬ್ಬನು ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಾಗಿರುವ ಒಬ್ಬನಿಗಾಗಿ ಪ್ರಾಣಕೊಡಲು ಒಬ್ಬನು ಧೈರ್ಯಮಾಡಿದರೂ ಮಾಡಬಹುದು. 8 ಆದರೆ ನಾವು ಇನ್ನೂ ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟನು. ದೇವರಿಗೆ ನಮ್ಮ ಮೇಲಿರುವ ಮಹಾ ಪ್ರೀತಿಯನ್ನು ಇದು ವ್ಯಕ್ತಪಡಿಸಿದೆ.
ಜನರ ವಿಷಯದಲ್ಲಿ ಯೇಸುವಿನ ದುಃಖ
35 ಯೇಸು ಊರುಗಳಲ್ಲೆಲ್ಲಾ ಮತ್ತು ಹಳ್ಳಿಗಳಲ್ಲೆಲ್ಲಾ ಸಂಚಾರ ಮಾಡಿದನು. ಯೇಸು ಅವರ ಸಭಾಮಂದಿರಗಳಲ್ಲಿ ಉಪದೇಶಿಸಿ ಪರಲೋಕರಾಜ್ಯದ ವಿಷಯವಾಗಿ ಶುಭವಾರ್ತೆಯನ್ನು ಹೇಳಿದನು. ಎಲ್ಲಾ ತರದ ರೋಗಗಳನ್ನು ಬೇನೆಗಳನ್ನು ವಾಸಿಮಾಡಿದನು. 36 ನೋವಿನಿಂದ ನರಳುತ್ತಿದ್ದ ಮತ್ತು ಅಸಹಾಯಕರಾಗಿದ್ದ ಅನೇಕ ಜನರನ್ನು ಯೇಸು ನೋಡಿ ದುಃಖಪಟ್ಟನು. ಕುರುಬನಿಲ್ಲದ ಕುರಿಗಳಂತೆ ಅವರಿದ್ದರು. 37 ಯೇಸು ತನ್ನ ಶಿಷ್ಯರಿಗೆ, “ಬೆಳೆಯು ಬಹಳ, ಆದರೆ ಕೆಲಸಗಾರರು ಸ್ವಲ್ಪ. 38 ಬೆಳೆಯ ಯಜಮಾನ ದೇವರೇ. ಆದ್ದರಿಂದ ಹೆಚ್ಚು ಕೆಲಸಗಾರರನ್ನು ಸುಗ್ಗಿಗಾಗಿ ಕಳುಹಿಸಿಕೊಡುವಂತೆ ಆತನಿಗೆ ಪ್ರಾರ್ಥನೆ ಮಾಡಿರಿ” ಎಂದು ಹೇಳಿದನು.
ಯೇಸು ಅಪೊಸ್ತಲರಿಗೆ ಕೊಟ್ಟ ಆದೇಶ
(ಮಾರ್ಕ 3:13-19; 6:7-13; ಲೂಕ 6:12-16; 9:1-6)
10 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ದುರಾತ್ಮಗಳನ್ನು ಬಿಡಿಸುವುದಕ್ಕೂ ಎಲ್ಲಾ ತರದ ವ್ಯಾಧಿ ಮತ್ತು ಕಾಯಿಲೆಗಳನ್ನು ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು. 2 ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಹೀಗಿವೆ:
ಸೀಮೋನ (ಪೇತ್ರನೆಂದು ಕರೆಯುತ್ತಾರೆ) ಮತ್ತು
ಇವನ ಸಹೋದರ ಅಂದ್ರೆಯ,
ಜೆಬೆದಾಯನ ಮಗನಾದ ಯಾಕೋಬ,
ಅವನ ಸಹೋದರ ಯೋಹಾನ,
3 ಫಿಲಿಪ್ಪ
ಮತ್ತು ಬಾರ್ತೊಲೊಮಾಯ,
ತೋಮ,
ಸುಂಕವಸೂಲಿಗಾರನಾಗಿದ್ದ ಮತ್ತಾಯ,
ಅಲ್ಛಾಯನ ಮಗನಾದ ಯಾಕೋಬ,
ತದ್ದಾಯ,
4 ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದ ಸಿಮೋನ
ಮತ್ತು ಯೇಸುವನ್ನು ಶತ್ರುಗಳಿಗೆ ಒಪ್ಪಿಸಿದ ಇಸ್ಕರಿಯೋತ ಯೂದ.
5 ಯೇಸು ಈ ಹನ್ನೆರಡು ಅಪೊಸ್ತಲರಿಗೆ ಕೆಲವು ಆಜ್ಞೆಗಳನ್ನು ನೀಡಿ ಪರಲೋಕರಾಜ್ಯವನ್ನು ಕುರಿತು ತಿಳಿಸುವುದಕ್ಕಾಗಿ ಅವರನ್ನು ಕಳುಹಿಸಿದನು. ಯೇಸು ಅವರಿಗೆ ಹೇಳಿದ್ದೇನೆಂದರೆ: “ಯೆಹೂದ್ಯರಲ್ಲದ ಜನರ ಬಳಿಗಾಗಲಿ ಸಮಾರ್ಯದವರು ವಾಸಿಸುವ ಯಾವ ಊರಿಗಾಗಲಿ ಹೋಗಬೇಡಿ. 6 ಆದರೆ ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರೇಲರ ಬಳಿಗೆ ಹೋಗಿ, 7 ಪರಲೋಕರಾಜ್ಯವು ಬೇಗನೆ ಬರುತ್ತದೆ ಎಂದು ಬೋಧಿಸಿ. 8 ರೋಗಿಗಳನ್ನು ವಾಸಿಮಾಡಿರಿ. ಸತ್ತವರನ್ನು ಬದುಕಿಸಿರಿ. ಕುಷ್ಠರೋಗಿಗಳನ್ನು ವಾಸಿಮಾಡಿರಿ. ಜನರನ್ನು ದೆವ್ವಗಳಿಂದ ಬಿಡಿಸಿರಿ. ನಾನು ನಿಮಗೆ ಈ ಅಧಿಕಾರಗಳನ್ನು ಉಚಿತವಾಗಿ ಕೊಡುತ್ತೇನೆ. ಆದ್ದರಿಂದ ಬೇರೆಯವರಿಗೆ ಉಚಿತವಾಗಿ ಸಹಾಯಮಾಡಿ.
9 ನಿಮ್ಮೊಂದಿಗೆ ಹಣವನ್ನಾಗಲಿ ತಾಮ್ರ, ಬೆಳ್ಳಿಬಂಗಾರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿ. 10 ಚೀಲವನ್ನಾಗಲಿ ಹೆಚ್ಚಿನ ಬಟ್ಟೆಗಳನ್ನಾಗಲಿ ಪಾದರಕ್ಷೆಗಳನ್ನಾಗಲಿ ಊರುಗೋಲುಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿ. ಕೆಲಸಗಾರನಿಗೆ ಅಗತ್ಯವಾದವುಗಳನ್ನು ಒದಗಿಸಲಾಗುವುದು.
11 “ನೀವು ಯಾವುದೇ ಊರಿನೊಳಕ್ಕೆ ಅಥವಾ ನಗರಕ್ಕೆ ಪ್ರವೇಶಿಸಿದಾಗ ಅಲ್ಲಿರುವ ಉತ್ತಮ ವ್ಯಕ್ತಿಯನ್ನು ಗುರುತಿಸಿ, ನೀವು ಆ ಊರನ್ನು ಬಿಡುವ ತನಕ ಅವನ ಮನೆಯಲ್ಲೇ ತಂಗಿರಿ. 12 ಆ ಮನೆಗೆ ನೀವು ಪ್ರವೇಶಿಸಿದಾಗ, ‘ನಿಮಗೆ ಶುಭವಾಗಲಿ’ ಎಂದು ಹೇಳಿರಿ. 13 ಆ ಮನೆಯಲ್ಲಿರುವ ಜನರು ನಿಮ್ಮನ್ನು ಸ್ವಾಗತಿಸಿದರೆ ನಿಮ್ಮ ಆಶೀರ್ವಾದಕ್ಕೆ ಅವರು ಯೋಗ್ಯರಾಗಿರುವುದರಿಂದ ಆ ಆಶೀರ್ವಾದವು ಅವರಿಗೆ ದೊರೆಯಲಿ. ಅವರು ನಿಮ್ಮನ್ನು ಸ್ವಾಗತಿಸದಿದ್ದರೆ, ನಿಮ್ಮ ಆಶೀರ್ವಾದವು ನಿಮಗೇ ಹಿಂತಿರುಗಿಬರಲಿ. 14 ಒಂದು ಮನೆಯವರು ಅಥವಾ ಒಂದು ಊರಿನವರು ನಿಮ್ಮನ್ನು ಸ್ವಾಗತಿಸದಿದ್ದರೆ ಇಲ್ಲವೇ ನಿಮ್ಮ ಮಾತನ್ನು ಕೇಳದಿದ್ದರೆ ನೀವು ಆ ಸ್ಥಳವನ್ನು ಬಿಟ್ಟುಹೋಗುವಾಗ, ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. 15 ನ್ಯಾಯವಿಚಾರಣೆಯ ದಿನದಲ್ಲಿ ಈ ಊರಿನ ಗತಿಯು ಸೊದೋಮ್ ಮತ್ತು ಗೊಮೋರಗಳಿಗಿಂತ ಬಹಳ ಕೆಟ್ಟದ್ದಾಗಿರುವುದು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
ಹಿಂಸೆಯ ಕುರಿತು ಯೇಸುವಿನ ಎಚ್ಚರಿಕೆ
(ಮಾರ್ಕ 13:9-13; ಲೂಕ 21:12-17)
16 “ಕೇಳಿರಿ! ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದ್ದರಿಂದ ನೀವು ಹಾವುಗಳಂತೆ ಸೂಕ್ಷ್ಮ ಬುದ್ದಿಯುಳ್ಳವರಾಗಿರಿ, ಪಾರಿವಾಳಗಳಂತೆ ಯಾವ ಹಾನಿಯನ್ನೂ ಮಾಡದಿರಿ. 17 ಜನರ ವಿಷಯದಲ್ಲಿ ಎಚ್ಚರಿಕೆಯಿಂದಿರಿ. ನಿಮ್ಮನ್ನು ಅವರು ಬಂಧಿಸಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುವರು. ಅವರು ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು. 18 ನಿಮ್ಮನ್ನು ಅಧಿಕಾರಿಗಳ ಸಮ್ಮುಖಕ್ಕೂ ಅರಸುಗಳ ಸಮ್ಮುಖಕ್ಕೂ ಕರೆದುಕೊಂಡು ಹೋಗುವರು. ನನ್ನ ನಿಮಿತ್ತ ಜನರು ನಿಮಗೆ ಹೀಗೆ ಮಾಡುವರು. ಆದರೆ ನೀವು ಆ ಅರಸುಗಳಿಗೂ ಅಧಿಕಾರಿಗಳಿಗೂ ಯಹೂದ್ಯರಲ್ಲದ ಜನರಿಗೂ ನನ್ನ ವಿಷಯವಾಗಿ ಹೇಳುವಿರಿ. 19 ನಿಮ್ಮನ್ನು ಬಂಧಿಸಿದಾಗ ನೀವು ಏನು ಮಾತಾಡಬೇಕು, ಹೇಗೆ ಮಾತಾಡಬೇಕು ಎಂದು ಚಿಂತಿಸಬೇಡಿ. ನೀವು ಹೇಳಬೇಕಾದುವುಗಳನ್ನು ಆ ಸಮಯದಲ್ಲಿ ನಿಮಗೆ ಅನುಗ್ರಹಿಸಲಾಗುವುದು. 20 ಮಾತಾಡುವವರು ನಿಜವಾಗಿಯೂ ನೀವಲ್ಲ. ನಿಮ್ಮ ತಂದೆಯ ಆತ್ಮನೇ ನಿಮ್ಮ ಮೂಲಕ ಮಾತನಾಡುತ್ತಾನೆ.
21 “ಸಹೋದರರು ಸ್ವಂತ ಸಹೋದರರಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು. ತಂದೆಯಂದಿರು ತಮ್ಮ ಸ್ವಂತ ಮಕ್ಕಳಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು. 22 ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರೆಲ್ಲರೂ ನಿಮ್ಮನ್ನು ದ್ವೇಷಿಸುತ್ತಾರೆ. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆ ಹೊಂದುವನು. 23 ಒಂದು ಊರಿನಲ್ಲಿ ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಊರಿಗೆ ಹೋಗಿ. ಮನುಷ್ಯಕುಮಾರನು ಪುನಃ ಬರುವುದಕ್ಕಿಂತ ಮುಂಚೆ ನೀವು ಇಸ್ರೇಲರ ಊರುಗಳಿಗೆಲ್ಲಾ ಹೋಗುವುದನ್ನು ಮುಗಿಸಿರುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
Kannada Holy Bible: Easy-to-Read Version. All rights reserved. © 1997 Bible League International