Revised Common Lectionary (Semicontinuous)
105 ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ
ದಾರಿಗೆ ಬೆಳಕೂ ಆಗಿದೆ.
106 ನಿನ್ನ ವಿಧಿನಿಯಮಗಳು ಒಳ್ಳೆಯವೇ.
ಅವುಗಳಿಗೆ ವಿಧೇಯನಾಗಿರುವುದಾಗಿ ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು.
107 ಯೆಹೋವನೇ, ನಾನು ಬಹುಕಾಲ ಸಂಕಟಪಟ್ಟಿದ್ದೇನೆ;
ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.
108 ಯೆಹೋವನೇ, ನನ್ನ ಸ್ತೋತ್ರವನ್ನು ಸ್ವೀಕರಿಸು.
ನಿನ್ನ ವಿಧಿನಿಯಮಗಳನ್ನು ನನಗೆ ಉಪದೇಶಿಸು.
109 ನನ್ನ ಪ್ರಾಣವು ಯಾವಾಗಲೂ ಅಪಾಯದಲ್ಲಿದೆ.
ಆದರೂ ನಾನು ನಿನ್ನ ಉಪದೇಶಗಳನ್ನು ಮರೆತುಬಿಟ್ಟಿಲ್ಲ.
110 ದುಷ್ಟರು ನನಗೆ ಬಲೆಯೊಡ್ಡಿದ್ದಾರೆ.
ನಾನಾದರೋ ನಿನ್ನ ವಿಧಿನಿಯಮಗಳಿಗೆ ಅವಿಧೇಯನಾಗಲಿಲ್ಲ.
111 ನಿನ್ನ ಕಟ್ಟಳೆಗಳನ್ನು ಎಂದೆಂದಿಗೂ ನಿತ್ಯಸ್ವಾಸ್ತ್ಯವನ್ನಾಗಿ ಆರಿಸಿಕೊಂಡಿದ್ದೇನೆ.
ಅವು ನನ್ನ ಹೃದಯಕ್ಕೆ ಆನಂದಕರವಾಗಿವೆ.
112 ನಿನ್ನ ಕಟ್ಟಳೆಗಳಿಗೆಲ್ಲಾ ಯಾವಾಗಲೂ
ವಿಧೇಯನಾಗಿರಲು ಮನಸ್ಸುಮಾಡಿದ್ದೇನೆ.
ಯೆಹೂದ ಮತ್ತು ಜೆರುಸಲೇಮಿಗೆ ದೈವಸಂದೇಶ
2 ಆಮೋಚನ ಮಗನಾದ ಯೆಶಾಯನು ಯೆಹೂದ ಮತ್ತು ಜೆರುಸಲೇಮಿನ ಬಗ್ಗೆ ನೋಡಿದ ದರ್ಶನ.
2 ಕೊನೆಯ ದಿನಗಳಲ್ಲಿ ಯೆಹೋವನಾಲಯದ ಪರ್ವತವು
ಎಲ್ಲಾ ಬೆಟ್ಟಗಳಿಗಿಂತಲೂ ಮಹೋನ್ನತವಾದ ಪರ್ವತವಾಗಿರುವುದು.
3 ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು.
ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ.
ಯಾಕೋಬನ ದೇವರ ಆಲಯಕ್ಕೆ ಹೋಗೋಣ.
ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು.
ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು.
ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ
ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.
4 ಈಗ ಎಲ್ಲಾ ದೇಶಗಳಿಗೆ ದೇವರೇ ನ್ಯಾಯಾಧೀಶನಾಗಿರುವನು.
ಅನೇಕ ಜನರ ತರ್ಕಗಳನ್ನು ದೇವರು ಕೊನೆಗಾಣಿಸುವನು.
ಆ ಜನರು ಯುದ್ಧಕ್ಕಾಗಿ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು;
ತಮ್ಮ ಖಡ್ಗಗಳಿಂದ ಅವರು ನೇಗಿಲುಗಳನ್ನು ತಯಾರಿಸುವರು;
ತಮ್ಮ ಬರ್ಜಿಗಳಿಂದ ಸಸಿಗಳನ್ನು ಕೊಯ್ಯುವ ಕುಡುಗೋಲುಗಳನ್ನು ಮಾಡುವರು.
ಪರಸ್ಪರ ಹೊಡೆದಾಡಿಕೊಳ್ಳುವದನ್ನು ಜನಾಂಗಗಳು ನಿಲ್ಲಿಸುವರು.
ಇನ್ನೆಂದಿಗೂ ಜನಾಂಗಗಳು ಯುದ್ಧಾಭ್ಯಾಸ ತರಬೇತಿಯನ್ನು ಹೊಂದುವುದಿಲ್ಲ.
ಯೇಸುವಿನ ಉಪದೇಶ ಜನರಿಗೆ ತೀರ್ಪು ಮಾಡುವುದು
44 ಬಳಿಕ ಯೇಸು ಗಟ್ಟಿಯಾಗಿ ಹೀಗೆಂದನು: “ನನ್ನಲ್ಲಿ ನಂಬಿಕೆ ಇಡುವವನು ನನ್ನನ್ನು ಕಳುಹಿಸಿದಾತನಲ್ಲಿ (ದೇವರು) ನಿಜವಾಗಿಯೂ ನಂಬಿಕೆ ಇಡುವವನಾಗಿದ್ದಾನೆ. 45 ನನ್ನನ್ನು ನೋಡುವವನು ನನ್ನನ್ನು ಕಳುಹಿಸಿದಾತನನ್ನು ನಿಜವಾಗಿಯೂ ನೋಡುವವನಾಗಿದ್ದಾನೆ. 46 ನಾನೇ ಬೆಳಕಾಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಕತ್ತಲೆಯಲ್ಲಿ ಇರಬಾರದೆಂದು ನಾನೇ ಈ ಲೋಕಕ್ಕೆ ಬಂದಿದ್ದೇನೆ.
47 “ನಾನು ಈ ಲೋಕಕ್ಕೆ ಬಂದದ್ದು ಜನರಿಗೆ ತೀರ್ಪು ಮಾಡುವುದಕ್ಕಾಗಿಯಲ್ಲ. ಈ ಲೋಕದಲ್ಲಿರುವ ಜನರನ್ನು ರಕ್ಷಿಸುವುದಕ್ಕಾಗಿ ನಾನು ಬಂದೆನು. ಆದ್ದರಿಂದ ನನ್ನ ಮಾತುಗಳನ್ನು ಕೇಳಿಯೂ ನಂಬದಿರುವ ಜನರಿಗೆ ತೀರ್ಪು ಮಾಡುವವನು ನಾನಲ್ಲ. 48 ನನ್ನಲ್ಲಿ ನಂಬಿಕೆ ಇಡದಿರುವವನಿಗೆ ಮತ್ತು ನಾನು ಹೇಳುವುದನ್ನು ತಿರಸ್ಕರಿಸುವವನಿಗೆ ತೀರ್ಪುಮಾಡುವಂಥದ್ದು ನಾನು ಆಡಿದ ಮಾತುಗಳೇ. ಅಂತಿಮ ದಿನದಂದು ಅವೇ ಅವನಿಗೆ ತೀರ್ಪುಮಾಡುತ್ತವೆ. 49 ಏಕೆಂದರೆ, ನನ್ನ ಮಾತುಗಳು ನನ್ನಿಂದ ಬಂದವುಗಳಲ್ಲ. ನನ್ನನ್ನು ಕಳುಹಿಸಿದ ತಂದೆಯೇ ನಾನು ಏನು ಹೇಳಬೇಕು, ಏನು ಮಾತಾಡಬೇಕು ಎಂದು ನನಗೆ ಹೇಳಿಕೊಟ್ಟಿದ್ದಾನೆ. 50 ತಂದೆಯ ಆಜ್ಞೆಯು ನಿತ್ಯಜೀವಕ್ಕೆ ನಡೆಸುತ್ತದೆ ಎಂದು ನಾನು ಬಲ್ಲೆನು. ಆದ್ದರಿಂದ ತಂದೆಯು ನನಗೆ ಹೇಳಿಕೊಟ್ಟ ಸಂಗತಿಗಳನ್ನೇ ನಾನು ತಿಳಿಸುತ್ತೇನೆ.”
Kannada Holy Bible: Easy-to-Read Version. All rights reserved. © 1997 Bible League International