Revised Common Lectionary (Semicontinuous)
ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ.
121 ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ.
ನನಗೆ ಸಹಾಯವು ಎಲ್ಲಿಂದ ಬರುವುದು?
2 ಭೂಮ್ಯಾಕಾಶಗಳ ಸೃಷ್ಟಿಕರ್ತನಾದ ಯೆಹೋವನಿಂದಲೇ
ನನಗೆ ಸಹಾಯವು ಬರುವುದು.
3 ಆತನು ನಿನ್ನನ್ನು ಬೀಳಗೊಡಿಸುವುದಿಲ್ಲ;
ನಿನ್ನ ಸಂರಕ್ಷಕನು ನಿದ್ರೆಹೋಗುವುದಿಲ್ಲ.
4 ಇಸ್ರೇಲಿನ ಸಂರಕ್ಷಕನು ತೂಕಡಿಸುವುದಿಲ್ಲ,
ನಿದ್ರಿಸುವುದೂ ಇಲ್ಲ!
5 ನಿನ್ನನ್ನು ಕಾಯುವವನು ಯೆಹೋವನೇ.
ನಿನ್ನನ್ನು ರಕ್ಷಿಸಲು ಆತನು ನಿನ್ನ ಬಲಗಡೆಯಲ್ಲಿ ನಿಂತಿದ್ದಾನೆ.
6 ಹಗಲಲ್ಲಿ ಸೂರ್ಯನೂ
ರಾತ್ರಿಯಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವುದಿಲ್ಲ.
7 ಯೆಹೋವನು ನಿನ್ನನ್ನು ಎಲ್ಲಾ ಅಪಾಯಗಳಿಂದ ರಕ್ಷಿಸುವನು;
ನಿನ್ನ ಪ್ರಾಣವನ್ನು ಕಾಯುವನು.
8 ನೀನು ಹೋಗುವಾಗಲೂ ಬರುವಾಗಲೂ ಯೆಹೋವನು ನಿನಗೆ ಸಹಾಯಮಾಡುವನು.
ಆತನು ನಿನ್ನನ್ನು ಸದಾಕಾಲ ಕಾಪಾಡುವನು.
14 “ಆದ್ದರಿಂದ ನೀವು ಆ ರಾತ್ರಿಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವಿರಿ. ಅದು ನಿಮಗೆ ವಿಶೇಷವಾದ ಹಬ್ಬವಾಗಿರುವುದು. ನಿಮ್ಮ ಸಂತತಿಯವರು ಈ ಹಬ್ಬದಿಂದ ಯೆಹೋವನನ್ನು ಎಂದೆಂದಿಗೂ ಸನ್ಮಾನಿಸುವರು. 15 ಈ ಹಬ್ಬದಲ್ಲಿ ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನುವಿರಿ. ಹಬ್ಬದ ಪ್ರಥಮ ದಿನದಲ್ಲಿ ನೀವು ನಿಮ್ಮ ಮನೆಯಿಂದ ಎಲ್ಲಾ ಹುಳಿಯನ್ನು ತೆಗೆದುಹಾಕುವಿರಿ. ಈ ಹಬ್ಬದ ಏಳು ದಿನಗಳಲ್ಲಿ ಯಾವುದೇ ಹುಳಿಯನ್ನು ತಿನ್ನಬಾರದು. ಯಾವನಾದರೂ ಹುಳಿಯನ್ನು ತಿಂದರೆ, ನೀವು ಅವನನ್ನು ಇಸ್ರೇಲಿನಿಂದ ಬಹಿಷ್ಕರಿಸಬೇಕು. 16 ಈ ಹಬ್ಬದ ಪ್ರಥಮ ಮತ್ತು ಕೊನೆಯ ದಿನಗಳಲ್ಲಿ ಪವಿತ್ರ ಸಭೆಯಾಗಿ ಕೂಡಿಬರಬೇಕು. ಈ ಹಬ್ಬದ ದಿನಗಳಲ್ಲಿ ನೀವು ಯಾವ ಕೆಲಸವನ್ನೂ ಮಾಡಬಾರದು. ಆದರೆ ನಿಮ್ಮ ಭೋಜನಕ್ಕಾಗಿ ಆಹಾರ ಸಿದ್ಧಪಡಿಸಬಹುದು. 17 ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಲೇಬೇಕು. ಯಾಕೆಂದರೆ ಆ ದಿನದಲ್ಲಿಯೇ ನಾನು ನಿಮ್ಮ ಎಲ್ಲಾ ಜನರ ಗುಂಪುಗಳನ್ನು ಈಜಿಪ್ಟಿನಿಂದ ಬಿಡಿಸಿ ಕರೆದುಕೊಂಡು ಹೋದೆನು. ಆದ್ದರಿಂದ ನಿಮ್ಮ ಸಂತತಿಯವರೆಲ್ಲರೂ ಆ ದಿನವನ್ನು ಜ್ಞಾಪಕಮಾಡಿಕೊಳ್ಳಬೇಕು. ಇದು ಶಾಶ್ವತವಾದ ಕಟ್ಟಳೆಯಾಗಿದೆ. 18 ಆದ್ದರಿಂದ ಪ್ರಥಮ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಲು ಆರಂಭಿಸಿ ಅದೇ ತಿಂಗಳ ಇಪ್ಪತ್ತೊಂದನೇ ದಿನದ ಸಾಯಂಕಾಲದವರೆಗೂ ತಿನ್ನುವಿರಿ. 19 ಏಳು ದಿನಗಳವರೆಗೆ ನಿಮ್ಮ ಮನೆಗಳಲ್ಲಿ ಯಾವ ಹುಳಿಯೂ ಇರಬಾರದು. ಯಾವ ಇಸ್ರೇಲಿಯಾದರೂ ಯಾವ ವಿದೇಶಿಯನಾದರೂ ಈ ಹಬ್ಬದಲ್ಲಿ ಹುಳಿಯನ್ನು ತಿಂದರೆ, ಅವನನ್ನು ಇಸ್ರೇಲರ ಸಮುದಾಯದಿಂದ ಬಹಿಷ್ಕರಿಸಬೇಕು. 20 ಈ ಹಬ್ಬದಲ್ಲಿ ನೀವು ಹುಳಿಯನ್ನು ತಿನ್ನಬಾರದು. ನೀವು ಎಲ್ಲೇ ವಾಸವಾಗಿದ್ದರೂ ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು” ಎಂದು ಹೇಳಿದನು.
21 ಆದ್ದರಿಂದ ಮೋಶೆಯು ಹಿರಿಯರ ಸಭೆ ಸೇರಿಸಿ, “ನಿಮ್ಮ ಕುಟುಂಬಗಳಿಗೆ ಬೇಕಾದ ಪಶುಗಳನ್ನು ತೆಗೆದುಕೊಂಡು ಪಸ್ಕಕ್ಕಾಗಿ ಅವುಗಳನ್ನು ಕೊಯ್ಯಿರಿ. 22 ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ರಕ್ತ ತುಂಬಿರುವ ಪಾತ್ರೆಯಲ್ಲಿ ಅದ್ದಿರಿ. ರಕ್ತವನ್ನು ಬಾಗಿಲಿನ ನಿಲುವು ಕಂಬಗಳಿಗೆ ಮತ್ತು ಮೇಲಿನ ಪಟ್ಟಿಗಳಿಗೆ ಹಚ್ಚಿರಿ. ಮುಂಜಾನೆಯಾಗುವವರೆಗೆ ಯಾರೂ ತಮ್ಮ ಮನೆಯನ್ನು ಬಿಟ್ಟು ಹೊರಗೆ ಹೋಗಬಾರದು. 23 ಆ ಸಮಯದಲ್ಲಿ ಚೊಚ್ಚಲಾದವುಗಳನ್ನು ಸಂಹರಿಸಲು ಯೆಹೋವನು ಈಜಿಪ್ಟಿನ ಮೂಲಕ ಹಾದುಹೋಗುವನು. ಬಾಗಿಲಿನ ನಿಲುವು ಕಂಬಗಳಿಗೆ ಮತ್ತು ಮೇಲಿನ ಪಟ್ಟಿಗಳಿಗೆ ಹಚ್ಚಿದ ರಕ್ತವನ್ನು ಯೆಹೋವನು ನೋಡಿ ಆ ಮನೆಯನ್ನು ಸಂರಕ್ಷಿಸುವನು.[a] ಸಂಹಾರಕನು ನಿಮ್ಮ ಮನೆಯೊಳಗೆ ಬಂದು ಸಂಹರಿಸಲು ಯೆಹೋವನು ಬಿಡುವುದಿಲ್ಲ. 24 ನೀವು ಈ ಆಜ್ಞೆಯನ್ನು ಜ್ಞಾಪಕದಲ್ಲಿಡಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮವಾಗಿದೆ. 25 ಯೆಹೋವನು ನಿಮಗೆ ಕೊಡಲಿರುವ ದೇಶಕ್ಕೆ ನೀವು ಹೋದಾಗಲೂ ಈ ಹಬ್ಬವನ್ನು ಆಚರಿಸಬೇಕು. 26 ‘ಈ ಹಬ್ಬವನ್ನು ಮಾಡುವುದೇಕೆ?’ ಎಂದು ನಿಮ್ಮ ಮಕ್ಕಳು ನಿಮ್ಮನ್ನು ಕೇಳುವಾಗ, 27 ‘ಇದು ಯೆಹೋವನನ್ನು ಸನ್ಮಾನಿಸಲು ಮಾಡುವ ಪಸ್ಕಹಬ್ಬವಾಗಿದೆ. ಯಾಕೆಂದರೆ ನಾವು ಈಜಿಪ್ಟಿನಲ್ಲಿದ್ದಾಗ ಯೆಹೋವನು ಇಸ್ರೇಲರ ಮನೆಗಳನ್ನು ಬಿಟ್ಟು ದಾಟಿಹೋದನು; ಈಜಿಪ್ಟಿನವರನ್ನು ಸಂಹರಿಸಿದನು; ಆದರೆ ಆತನು ನಮ್ಮ ಮನೆಗಳಲ್ಲಿದ್ದವರನ್ನು ರಕ್ಷಿಸಿದನು’ ಎಂದು ಹೇಳಬೇಕು.
“ಆಗ ಮೋಶೆಯ ಮಾತನ್ನು ಕೇಳುತ್ತಿದ್ದ ಇಸ್ರೇಲರು ಅಡ್ಡಬಿದ್ದು ಯೆಹೋವನನ್ನು ಆರಾಧಿಸಿದರು.” 28 ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ್ದಂತೆಯೇ ಇಸ್ರೇಲರು ಮಾಡಿದರು.
ದೇವರಿಗಾಗಿ ಜೀವಿಸಿ
11 ಪ್ರಿಯ ಸ್ನೇಹಿತರೇ, ನೀವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಪರದೇಶದವರಂತೆ ಇದ್ದೀರಿ. ಆದ್ದರಿಂದ ನಿಮ್ಮ ದೇಹಗಳಿಗೆ ಇಷ್ಟವಾದ ಕೆಟ್ಟಸಂಗತಿಗಳಿಂದ ದೂರವಾಗಿರಿ. ಇವು ನಿಮ್ಮ ಜೀವಾತ್ಮಕ್ಕೆ ವಿರುದ್ಧವಾಗಿ ಹೋರಾಡುತ್ತವೆ. 12 ನಂಬಿಕೆಯಿಲ್ಲದ ಜನರು ನಿಮ್ಮ ಸುತ್ತಮುತ್ತಲೆಲ್ಲಾ ವಾಸಿಸುತ್ತಿದ್ದಾರೆ. ನೀವು ತಪ್ಪು ಮಾಡುತ್ತಿರುವಿರೆಂದು ಅವರು ಹೇಳುವ ಸಾಧ್ಯತೆಯಿದೆ. ಆದ್ದರಿಂದ ಒಳ್ಳೆಯವರಾಗಿ ಬಾಳಿರಿ. ನೀವು ಮಾಡುವ ಒಳ್ಳೆಯ ಕಾರ್ಯಗಳನ್ನು ಅವರು ನೋಡುವರು ಮತ್ತು ದೇವರು ಪ್ರತ್ಯಕ್ಷನಾದ ದಿನದಂದು ಆತನನ್ನು ಕೊಂಡಾಡುವರು.
ಈ ಲೋಕದ ಪ್ರತಿಯೊಬ್ಬ ಅಧಿಕಾರಿಗೂ ವಿಧೇಯರಾಗಿರಿ
13 ಈ ಲೋಕದ ಅಧಿಕಾರಿಗಳಿಗೆ ವಿಧೇಯರಾಗಿರಿ. ಪ್ರಭುವಿಗಾಗಿ ಇದನ್ನು ಮಾಡಿರಿ. ಸರ್ವಾಧಿಕಾರಿಯಾದ ರಾಜನಿಗೆ ವಿಧೇಯರಾಗಿರಿ. 14 ರಾಜನು ಕಳುಹಿಸುವ ಅಧಿಕಾರಿಗಳಿಗೆ ವಿಧೇಯರಾಗಿರಿ. ತಪ್ಪು ಮಾಡಿದವರನ್ನು ದಂಡಿಸಲೂ ಒಳ್ಳೆಯದನ್ನು ಮಾಡಿದವರನ್ನು ಹೊಗಳಲೂ ಅವರನ್ನು ಕಳುಹಿಸಲಾಗಿದೆ. 15 ನೀವು ಒಳ್ಳೆಯದನ್ನು ಮಾಡುವಾಗ ನಿಮ್ಮನ್ನು ಕುರಿತು ಕೆಟ್ಟಮಾತುಗಳನ್ನು ಆಡಲು ಮೂಢರಿಗೆ ಸಾಧ್ಯವಾಗುವುದಿಲ್ಲ. ದೇವರ ಅಪೇಕ್ಷೆಯೂ ಇದೇ ಆಗಿದೆ. 16 ಸ್ವತಂತ್ರ ಹೊಂದಿದವರಂತೆ ಜೀವಿಸಿರಿ. ಆದರೆ ನೀವು ಮಾಡುವ ಕೆಟ್ಟಕಾರ್ಯಗಳನ್ನು ಮರೆಮಾಡಲು ಆ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿ. ನೀವು ದೇವರ ಸೇವೆಯನ್ನು ಮಾಡುತ್ತಾ ಜೀವಿಸಿರಿ. 17 ಜನರೆಲ್ಲರಿಗೂ ಗೌರವವನ್ನು ತೋರಿಸಿರಿ. ದೇವರ ಕುಟುಂಬದ ಸಹೋದರ ಸಹೋದರಿಯರೆಲ್ಲರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ ಮತ್ತು ರಾಜನನ್ನು ಗೌರವಿಸಿರಿ.
Kannada Holy Bible: Easy-to-Read Version. All rights reserved. © 1997 Bible League International