Revised Common Lectionary (Semicontinuous)
ಐದನೆಯ ಭಾಗ
(ಕೀರ್ತನೆಗಳು 107–150)
107 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ! ಆತನು ಒಳ್ಳೆಯವನು!
ಆತನ ಪ್ರೀತಿ ಶಾಶ್ವತವಾದದ್ದು!
2 ಯೆಹೋವನಿಂದ ರಕ್ಷಿಸಲ್ಪಟ್ಟ ಪ್ರತಿಯೊಬ್ಬರೂ ಆತನಿಗೆ ಕೃತಜ್ಞತಾಸ್ತುತಿ ಮಾಡಲಿ.
ಯೆಹೋವನು ಅವರನ್ನು ವೈರಿಗಳಿಂದ ಬಿಡಿಸಿದನು.
3 ಯೆಹೋವನು ತನ್ನ ಜನರನ್ನು ಅನೇಕ ದೇಶಗಳಿಂದ ಒಟ್ಟುಗೂಡಿಸಿದನು;
ಪೂರ್ವಪಶ್ಚಿಮಗಳಿಂದಲೂ ಉತ್ತರ ದಕ್ಷಿಣಗಳಿಂದಲೂ ಬರಮಾಡಿದನು.
4 ಅವರಲ್ಲಿ ಕೆಲವರು ಮರುಭೂಮಿಯಲ್ಲಿ ಅಲೆದಾಡಿದರು.
ತಾವು ನೆಲೆಸತಕ್ಕ ಪಟ್ಟಣಕ್ಕಾಗಿ ಅವರು ಹುಡುಕಿದರೂ ಅದು ಅವರಿಗೆ ಕಾಣಲಿಲ್ಲ.
5 ಅವರು ಹಸಿವೆಯಿಂದಲೂ
ಬಾಯಾರಿಕೆಯಿಂದಲೂ ಬಲಹೀನರಾಗತೊಡಗಿದರು.
6 ಆಗ ಅವರು ಯೆಹೋವನಿಗೆ ಮೊರೆಯಿಡಲು
ಆತನು ಅವರನ್ನು ಎಲ್ಲಾ ಆಪತ್ತುಗಳಿಂದ ರಕ್ಷಿಸಿದನು.
7 ಅವರು ನೆಲಸತಕ್ಕ ಪಟ್ಟಣಕ್ಕೆ ದೇವರು ಅವರನ್ನು ನೇರವಾಗಿ ನಡೆಸಿದನು.
33 ಆತನು ನದಿಗಳನ್ನು ಮರಳುಗಾಡನ್ನಾಗಿ ಮಾರ್ಪಡಿಸಿದನು;
ಹರಿಯುವ ಒರತೆಗಳನ್ನು ತಡೆದು ನಿಲ್ಲಿಸಿದನು.
34 ಆತನು ಫಲವತ್ತಾದ ಭೂಮಿಯನ್ನು ಉಪಯೋಗವಿಲ್ಲದ ಉಪ್ಪುಭೂಮಿಯನ್ನಾಗಿ ಪರಿವರ್ತಿಸಿದನು,
ಯಾಕೆಂದರೆ ಅಲ್ಲಿ ಕೆಟ್ಟಜನರು ನೆಲೆಸಿದ್ದರು.
35 ಆತನು ಮರಳುಗಾಡನ್ನು ಸರೋವರಗಳುಳ್ಳ ನಾಡನ್ನಾಗಿ ಪರಿವರ್ತಿಸಿದನು;
ಒಣನೆಲದಿಂದ ನೀರಿನ ಒರತೆಗಳನ್ನು ಹರಿಯಮಾಡಿದನು.
36 ಆತನು ಹಸಿದವರನ್ನು ಒಳ್ಳೆಯ ನಾಡಿಗೆ ನಡೆಸಿದನು.
ಅವರು ಅಲ್ಲಿ ನೆಲೆಸಿ ಪಟ್ಟಣವನ್ನು ಕಟ್ಟಿದರು.
37 ಅವರು ಹೊಲಗಳಲ್ಲಿ ಬೀಜ ಬಿತ್ತಿ
ತೋಟಗಳಲ್ಲಿ ದ್ರಾಕ್ಷಾಲತೆಗಳನ್ನು ನೆಟ್ಟು ಒಳ್ಳೆಯ ಸುಗ್ಗಿಗಳನ್ನು ಪಡೆದರು.
15 ರಾಹಾಬಳ ಮನೆಯನ್ನು ಊರಗೋಡೆಗೆ ಸೇರಿಸಿ ಕಟ್ಟಲಾಗಿತ್ತು, ಆದ್ದರಿಂದ ಅವರನ್ನು ಒಂದು ಹಗ್ಗದ ಮೂಲಕ ಕಿಟಿಕಿಯಿಂದ ಕೆಳಕ್ಕೆ ಇಳಿಸಿದಳು. 16 ಆಕೆ ಅವರಿಗೆ, “ನೀವು ಪಶ್ಚಿಮದಿಕ್ಕಿನ ಕಡೆಗೆ ಹೋಗಿ ಬೆಟ್ಟಗಳಲ್ಲಿ ಅಡಗಿಕೊಳ್ಳಿರಿ; ಆಗ ರಾಜಭಟರು ನಿಮ್ಮನ್ನು ಕಂಡುಹಿಡಿಯಲಾರರು; ಅಲ್ಲಿ ಮೂರು ದಿನಗಳವರೆಗೆ ಅಡಗಿಕೊಂಡಿದ್ದು ರಾಜಭಟರು ಹಿಂದಿರುಗಿದ ಮೇಲೆ ನೀವು ನಿಮ್ಮ ಸ್ಥಳಕ್ಕೆ ಹೋಗಬಹುದು” ಎಂದು ಹೇಳಿದಳು.
17 ಅವರು ಅವಳಿಗೆ, “ನಾವು ನಿನಗೊಂದು ಪ್ರಮಾಣ ಮಾಡಿದ್ದೇವೆ; ಆದರೆ ನೀನು ಒಂದು ಕೆಲಸ ಮಾಡಬೇಕು. ಇಲ್ಲವಾದರೆ ನಾವು ನಮ್ಮ ಪ್ರಮಾಣಕ್ಕೆ ಹೊಣೆಗಾರರಾಗುವುದಿಲ್ಲ. 18 ನಮ್ಮನ್ನು ಇಳಿಸುವುದಕ್ಕಾಗಿ ನೀನು ಉಪಯೋಗಿಸಿದ ಈ ಕೆಂಪು ಹಗ್ಗವನ್ನು ನಾವು ಈ ದೇಶಕ್ಕೆ ಹಿಂತಿರುಗಿ ಬರುವಾಗ ನೀನು ಕಿಟಕಿಗೆ ಕಟ್ಟಿರಬೇಕು. ನಿನ್ನ ತಂದೆತಾಯಿಗಳು, ನಿನ್ನ ಸಹೋದರ ಸಹೋದರಿಯರು ಮತ್ತು ನಿನ್ನ ಕುಟುಂಬ ವರ್ಗದವರು ನಿನ್ನ ಸಂಗಡ ಈ ಮನೆಯಲ್ಲಿರಬೇಕು. 19 ಈ ಮನೆಯಲ್ಲಿರುವ ಪ್ರತಿಯೊಬ್ಬರನ್ನು ನಾವು ಕಾಪಾಡುತ್ತೇವೆ. ನಿನ್ನ ಮನೆಯಲ್ಲಿ ಯಾರಿಗಾದರೂ ಪೆಟ್ಟಾದರೆ ಅದಕ್ಕೆ ನಾವು ಹೊಣೆಗಾರರಾಗುವೆವು. ಆದರೆ ಯಾರಾದರೂ ನಿನ್ನ ಮನೆಯಿಂದ ಹೊರಗೆ ಹೋದಾಗ ಕೊಲ್ಲಲ್ಪಟ್ಟರೆ ಅದಕ್ಕೆ ನಾವು ಹೊಣೆಗಾರರಲ್ಲ; ಅದಕ್ಕೆ ಅವರೇ ಹೊಣೆಗಾರರು. 20 ನಾನು ನಿನಗೆ ಈ ಪ್ರಮಾಣವನ್ನು ಮಾಡಿದ್ದೇವೆ. ಆದರೆ ಇದನ್ನು ನೀನು ಯಾರಿಗೂ ಹೇಳಕೂಡದು; ಒಂದುವೇಳೆ ಹೇಳಿದರೆ, ನಾವು ಈ ಪ್ರಮಾಣದಿಂದ ಮುಕ್ತರಾಗುತ್ತೇವೆ” ಎಂದು ಹೇಳಿದರು.
21 ಅದಕ್ಕೆ ಅವಳು, “ಹಾಗೇ ಆಗಲಿ” ಎಂದು ಹೇಳಿ ಅವರನ್ನು ಕಳುಹಿಸಿಕೊಟ್ಟಳು. ಆ ಜನರು ಅವಳ ಮನೆಯಿಂದ ಹೊರಟರು. ಆಗ ಆ ಹೆಂಗಸು ಆ ಕೆಂಪು ಹಗ್ಗವನ್ನು ಕಿಟಿಕಿಗೆ ಕಟ್ಟಿದಳು.
22 ಅವರು ಅವಳ ಮನೆಯಿಂದ ಹೋಗಿ ಬೆಟ್ಟಗಳಲ್ಲಿ ಅಡಗಿಕೊಂಡು ಮೂರು ದಿನಗಳವರೆಗೆ ಅಲ್ಲೇ ಇದ್ದರು. ರಾಜಭಟರು ದಾರಿಯಲ್ಲೆಲ್ಲಾ ಹುಡುಕಾಡಿ ಕಾಣದೆ ಮೂರು ದಿನಗಳ ತರುವಾಯ ಪಟ್ಟಣಕ್ಕೆ ಹಿಂದಿರುಗಿದರು. 23 ಆಗ ಇವರಿಬ್ಬರು ಬೆಟ್ಟದಿಂದಿಳಿದು ನದಿಯನ್ನು ದಾಟಿ ಯೆಹೋಶುವನ ಬಳಿಗೆ ಹೋಗಿ ತಾವು ತಿಳಿದುಕೊಂಡ ಎಲ್ಲವನ್ನು ತಿಳಿಸಿದರು. ಅವರು ಯೆಹೋಶುವನಿಗೆ, 24 “ಯೆಹೋವನು ನಿಜವಾಗಿಯೂ ಆ ದೇಶವನ್ನೆಲ್ಲಾ ನಮಗೆ ದಯಪಾಲಿಸಿದ್ದಾನೆ. ಆ ದೇಶದ ಎಲ್ಲ ಜನರು ನಮ್ಮಿಂದ ಭಯಗೊಂಡಿದ್ದಾರೆ” ಎಂದು ತಿಳಿಸಿದರು.
13 “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ. 14 [a]
15 “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮ ಮಾರ್ಗಗಳನ್ನು ಹಿಂಬಾಲಿಸುವ ಒಬ್ಬನನ್ನು ಕಂಡುಕೊಳ್ಳಲು ನೀವು ಸಮುದ್ರಗಳನ್ನು ದಾಟಿ ಬೇರೆಬೇರೆ ದೇಶಗಳಲ್ಲಿ ಪ್ರಯಾಣ ಮಾಡುತ್ತೀರಿ. ಅವನನ್ನು ಕಂಡುಕೊಂಡ ಮೇಲೆ ನಿಮಗಿಂತಲೂ ಹೆಚ್ಚು ಕೆಟ್ಟವನನ್ನಾಗಿ ಮಾಡುತ್ತೀರಿ. ನೀವು ನರಕಪಾತ್ರರಾಗುವಷ್ಟು ಕೆಟ್ಟವರಾಗಿದ್ದೀರಿ.
16 “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಜನರಿಗೆ ಮಾರ್ಗದರ್ಶನ ಮಾಡುತ್ತೀರಿ. ಆದರೆ ನೀವೇ ಕುರುಡರು. ಒಬ್ಬನು ದೇವಾಲಯದ ಹೆಸರಿನ ಮೇಲೆ ವಾಗ್ದಾನ ಮಾಡಿದರೆ ಅದಕ್ಕೇನೂ ಬೆಲೆಯಿಲ್ಲ ಎನ್ನುತ್ತೀರಿ. ಆದರೆ ಒಬ್ಬನು ದೇವಾಲಯದಲ್ಲಿರುವ ಚಿನ್ನದ ಮೇಲೆ ವಾಗ್ದಾನ ಮಾಡಿದರೆ, ಅವನು ಅದನ್ನು ಈಡೇರಿಸಬೇಕು ಎಂದು ಹೇಳುತ್ತೀರಿ! 17 ನೀವು ಕುರುಡರಾದ ಮೂರ್ಖರು! ಯಾವುದು ಹೆಚ್ಚಿನದು? ಚಿನ್ನವೋ ಅಥವಾ ದೇವಾಲಯವೋ? ಆ ಚಿನ್ನವು ಪರಿಶುದ್ಧಗೊಂಡದ್ದು ದೇವಾಲಯದಿಂದಲೇ. ಆದ್ದರಿಂದ ದೇವಾಲಯವೇ ಹೆಚ್ಚಿನದು.
18 “ಒಬ್ಬನು ಯಜ್ಞವೇದಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದಕ್ಕೇನೂ ಬೆಲೆಯಿಲ್ಲ ಎನ್ನುತ್ತೀರಿ. ಆದರೆ ಒಬ್ಬನು ಯಜ್ಞವೇದಿಕೆಯ ಮೇಲಿರುವ ಕಾಣಿಕೆಯ ಮೇಲೆ ವಾಗ್ದಾನ ಮಾಡಿದರೆ ಅವನು ಅದನ್ನು ಈಡೇರಿಸಲೇಬೇಕು ಎಂದು ಹೇಳುತ್ತೀರಿ. 19 ನೀವು ಕುರುಡರು. ನಿಮಗೇನೂ ಅರ್ಥವಾಗುವುದಿಲ್ಲ. ಯಾವುದು ಹೆಚ್ಚಿನದು? ಕಾಣಿಕೆಯೋ ಅಥವಾ ಯಜ್ಞವೇದಿಕೆಯೋ? ಕಾಣಿಕೆ ಪರಿಶುದ್ಧಗೊಂಡದ್ದು ಯಜ್ಞವೇದಿಕೆಯಿಂದಲೇ. ಆದ್ದರಿಂದ ಯಜ್ಞವೇದಿಕೆಯೇ ಹೆಚ್ಚಿನದು. 20 ಯಜ್ಞವೇದಿಕೆಯ ಮೇಲೆ ವಾಗ್ದಾನ ಮಾಡುವವನು ಯಜ್ಞವೇದಿಕೆಯ ಮತ್ತು ಅದರ ಮೇಲಿರುವ ಕಾಣಿಕೆಯ ಮೇಲೆ ವಾಗ್ದಾನ ಮಾಡಿದಂತಾಯಿತು. 21 ದೇವಾಲಯದ ಮೇಲೆ ವಾಗ್ದಾನ ಮಾಡುವವನು ನಿಜವಾಗಿಯೂ ದೇವಾಲಯದ ಮತ್ತು ಅದರೊಳಗೆ ವಾಸವಾಗಿರುವಾತನ ಮೇಲೆ ವಾಗ್ದಾನ ಮಾಡಿದಂತಾಯಿತು. 22 ಪರಲೋಕದ ಮೇಲೆ ವಾಗ್ದಾನ ಮಾಡುವವನು ದೇವರ ಸಿಂಹಾಸನದ ಮೇಲೆಯೂ ಆ ಸಿಂಹಾಸನದ ಮೇಲೆ ಕುಳಿತಿರುವಾತನ ಮೇಲೆಯೂ ವಾಗ್ದಾನ ಮಾಡಿದಂತಾಯಿತು.
23 “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮಲ್ಲಿರುವ ಪ್ರತಿಯೊಂದರಲ್ಲೂ ನಿಮ್ಮ ಪುದೀನ, ಸಬ್ಬಸ್ಸಿಗೆ ಸೊಪ್ಪು, ಜೀರಿಗೆ ಗಿಡಗಳಲ್ಲಿಯೂ ಸಹ ಹತ್ತರಲ್ಲೊಂದು ಪಾಲನ್ನು ದೇವರಿಗೆ ಕೊಡುತ್ತೀರಿ. ಆದರೆ ಧರ್ಮಶಾಸ್ತ್ರದ ಬೋಧನೆಗಳಲ್ಲಿ ನಿಜವಾಗಿಯೂ ಪ್ರಾಮುಖ್ಯವಾದ ಆಜ್ಞೆಗಳನ್ನು ಅಂದರೆ ನ್ಯಾಯವನ್ನೂ ಕರುಣೆಯನ್ನೂ ಯಥಾರ್ಥತೆಯನ್ನೂ ನೀವು ತೊರೆದುಬಿಟ್ಟಿದ್ದೀರಿ. ಈ ಆಜ್ಞೆಗಳಿಗೆ ನೀವು ಮೊದಲು ವಿಧೇಯರಾಗಿ, ಈಗ ಮಾಡುತ್ತಿರುವಂಥ ಕಾರ್ಯಗಳನ್ನು ಮಾಡಬೇಕಿತ್ತು. 24 ನೀವು ಜನರಿಗೆ ಮಾರ್ಗದರ್ಶನ ಮಾಡುತ್ತೀರಿ. ಆದರೆ ನೀವೇ ಕುರುಡರು! ಒಬ್ಬನು ತಾನು ಕುಡಿಯುವ ಪಾನೀಯದೊಳಗಿಂದ ಸಣ್ಣ ಸೊಳ್ಳೆಯನ್ನು ತೆಗೆದುಹಾಕಿ ಆಮೇಲೆ ಒಂಟೆಯನ್ನು ನುಂಗುವವನಂತೆ ನೀವಿದ್ದೀರಿ.
25 “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ನಿಮ್ಮ ಪಾತ್ರೆ ಬಟ್ಟಲುಗಳ ಹೊರಭಾಗವನ್ನು ತೊಳೆದು ಸ್ವಚ್ಛಮಾಡುತ್ತೀರಿ. ಆದರೆ ಅವುಗಳ ಒಳಭಾಗವು ಮೋಸದಿಂದಲೂ ನಿಮಗೆ ತೃಪ್ತಿ ನೀಡುವ ಪದಾರ್ಥಗಳಿಂದಲೂ ತುಂಬಿವೆ. 26 ಫರಿಸಾಯರೇ, ನೀವು ಕುರುಡರು! ಮೊದಲು ಬಟ್ಟಲಿನ ಒಳಭಾಗವನ್ನು ಚೆನ್ನಾಗಿ ಶುಚಿಮಾಡಿರಿ. ಆಗ ಬಟ್ಟಲಿನ ಹೊರಭಾಗವು ನಿಜವಾಗಿಯೂ ಶುಚಿಯಾಗಿರುವುದು.
27 “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ಸುಣ್ಣ ಹಚ್ಚಿದ ಸಮಾಧಿಗಳಂತಿದ್ದೀರಿ. ಆ ಸಮಾಧಿಗಳ ಹೊರಭಾಗ ಚಂದವಾಗಿ ಕಾಣುತ್ತದೆ. ಆದರೆ ಒಳಭಾಗ ಸತ್ತವರ ಎಲುಬುಗಳಿಂದಲೂ ಎಲ್ಲಾ ಬಗೆಯ ಹೊಲಸುಗಳಿಂದಲೂ ತುಂಬಿರುತ್ತದೆ. 28 ನೀವು ಅದೇ ರೀತಿ ಇದ್ದೀರಿ. ನಿಮ್ಮನ್ನು ನೋಡಿದ ಜನರು ನಿಮ್ಮನ್ನು ಒಳ್ಳೆಯವರೆಂದು ಭಾವಿಸಿಕೊಳ್ಳುತ್ತಾರೆ. ಆದರೆ ನಿಮ್ಮ ಅಂತರಂಗವು ಕಪಟದಿಂದಲೂ ದುಷ್ಟತನದಿಂದಲೂ ತುಂಬಿಕೊಂಡಿದೆ.
Kannada Holy Bible: Easy-to-Read Version. All rights reserved. © 1997 Bible League International