Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 83:1-4

ಸ್ತುತಿಗೀತೆ. ರಚನೆಗಾರ: ಆಸಾಫ.

83 ದೇವರೇ, ಸುಮ್ಮನಿರಬೇಡ!
    ನಿನ್ನ ಕಣ್ಣುಗಳನ್ನು ಮುಚ್ಚಿಕೊಳ್ಳಬೇಡ.
    ದೇವರೇ, ದಯವಿಟ್ಟು ಮಾತನಾಡು.
ದೇವರೇ, ನಿನ್ನ ಶತ್ರುಗಳು ನಿನಗೆ ವಿರೋಧವಾಗಿ ಸಂಚು ಮಾಡುತ್ತಿದ್ದಾರೆ.
    ಬಹುಬೇಗನೆ ಅವರು ಆಕ್ರಮಣ ಮಾಡಲಿದ್ದಾರೆ.
ನಿನ್ನ ಜನರಿಗೆ ವಿರೋಧವಾಗಿ ರಹಸ್ಯ ಯೋಜನೆಗಳನ್ನು ಮಾಡುತ್ತಿದ್ದಾರೆ.
    ನಿನ್ನ ಪ್ರಿಯರ ವಿರೋಧವಾಗಿ ಅವರು ಸಂಚು ಮಾಡುತ್ತಿದ್ದಾರೆ.
ಅವರು ಹೀಗೆಂದುಕೊಳ್ಳುತ್ತಿದ್ದಾರೆ: “ಬನ್ನಿರಿ, ಅವರನ್ನು ಸಂಪೂರ್ಣವಾಗಿ ನಾಶಮಾಡೋಣ.
    ಆಗ ‘ಇಸ್ರೇಲ್’ ಎಂಬ ಹೆಸರೇ ಅಳಿದುಹೋಗುವುದು.”

ಕೀರ್ತನೆಗಳು 83:9-10

ನೀನು ಮಿದ್ಯಾನ್ಯರನ್ನೂ ಕೀಷೋನ್ ನದಿಯ ಸಮೀಪದಲ್ಲಿ
    ಸೀಸೆರನನ್ನೂ ಯಾಬೀನನನ್ನೂ ಸೋಲಿಸಿದಂತೆ ಅವರನ್ನು ಸೋಲಿಸು.
10 ನೀನು ಅವರನ್ನು ಎಂದೋರಿನಲ್ಲಿ ಸೋಲಿಸಿದೆ.
    ಅವರ ದೇಹಗಳು ನೆಲದ ಮೇಲೆ ಕೊಳೆತುಹೋದವು.

ಕೀರ್ತನೆಗಳು 83:17-18

17 ಅವರನ್ನು ಭಯವೂ ನಾಚಿಕೆಯೂ ಕವಿದುಕೊಂಡೇ ಇರಲಿ.
    ಅವರು ಅವಮಾನಗೊಂಡು ನಾಶವಾಗಲಿ.
18 ಆಗ ಅವರು ನೀನೊಬ್ಬನೇ ದೇವರೆಂದೂ
    ನಿನ್ನ ಹೆಸರು ಯೆಹೋವನೆಂದೂ ತಿಳಿದುಕೊಳ್ಳುವರು.
ಭೂಲೋಕಕ್ಕೆಲ್ಲಾ ಮಹೋನ್ನತನಾದ ದೇವರೊಬ್ಬನೇ
    ದೇವರೆಂದು ಅವರು ಅರಿತುಕೊಳ್ಳುವರು.

ವಿಮೋಚನಕಾಂಡ 2:1-10

ಮೋಶೆಯ ಬಾಲ್ಯ

ಲೇವಿ ಕುಟುಂಬದ ಒಬ್ಬನು ಲೇವಿ ಕುಟುಂಬಕ್ಕೆ ಸೇರಿದ ಸ್ತ್ರೀಯೊಬ್ಬಳನ್ನು ಮದುವೆಯಾದನು. ಆ ಸ್ತ್ರೀಯು ಗರ್ಭಿಣಿಯಾಗಿ ಗಂಡುಮಗುವಿಗೆ ಜನ್ಮವಿತ್ತಳು. ಮಗುವು ಸುಂದರವಾಗಿತ್ತು. ಆಕೆ ಮೂರು ತಿಂಗಳವರೆಗೆ ಆ ಮಗುವನ್ನು ಬಚ್ಚಿಟ್ಟಳು. ಇನ್ನೂ ಹೆಚ್ಚು ಕಾಲ ಬಚ್ಚಿಡಲಾಗದೆ ಆಕೆ ಒಂದು ಬುಟ್ಟಿಯನ್ನು ಮಾಡಿ ಅದಕ್ಕೆ ರಾಳವನ್ನು ಹಚ್ಚಿದಳು. ಆಕೆ ಮಗುವನ್ನು ಬುಟ್ಟಿಯಲ್ಲಿಟ್ಟು ಆ ಬುಟ್ಟಿಯನ್ನು ನೀರಿನಲ್ಲಿ ಎತ್ತರವಾಗಿ ಬೆಳೆದ ಹುಲ್ಲಿನಲ್ಲಿ ಇಟ್ಟಳು. ಮಗುವಿಗೆ ಏನಾಗುವುದೋ ಎಂದು ನೋಡಲು ಮಗುವಿನ ಅಕ್ಕ ಅಲ್ಲಿದ್ದುಕೊಂಡು ಕಾಯುತ್ತಿದ್ದಳು.

ಅದೇ ಸಮಯದಲ್ಲಿ ಫರೋಹನ ಮಗಳು ಸ್ನಾನ ಮಾಡುವುದಕ್ಕೆ ನದಿಗೆ ಹೋದಳು. ಆಕೆಯ ಸೇವಕಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಎತ್ತರವಾದ ಹುಲ್ಲಿನ ಮೇಲಿದ್ದ ಬುಟ್ಟಿಯನ್ನು ನೋಡಿ ತನ್ನ ಸೇವಕಿಯರಲ್ಲಿ ಒಬ್ಬಳಿಗೆ, “ಹೋಗಿ ಅದನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು. ರಾಜನ ಮಗಳು ಬುಟ್ಟಿಯನ್ನು ತೆಗೆದು ನೋಡಿದಾಗ ಅಳುತ್ತಿದ್ದ ಗಂಡುಮಗುವನ್ನು ಕಂಡಳು. ಆಕೆಗೆ ಅದರ ಮೇಲೆ ಮರುಕವಾಯಿತು. ಆಕೆ, “ಇದು ಇಬ್ರಿಯರ ಮಗು” ಎಂದು ಹೇಳಿದಳು.

ಮಗುವಿನ ಅಕ್ಕ ಆಕೆಯ ಬಳಿಗೆ ಬಂದು, “ಮಗುವಿಗೆ ಹಾಲು ಕುಡಿಸಲು ಒಬ್ಬ ಇಬ್ರಿಯ ಸ್ತ್ರೀಯನ್ನು ಕರೆದುಕೊಂಡು ಬರಲೇ?” ಎಂದು ಕೇಳಿದಳು.

ಅರಸನ ಮಗಳು, “ಹೋಗಿ, ಕರೆದುಕೊಂಡು ಬಾ” ಅಂದಳು.

ಆದ್ದರಿಂದ ಆ ಹುಡುಗಿ ಹೋಗಿ ಮಗುವಿನ ಸ್ವಂತ ತಾಯಿಯನ್ನು ಕರೆದುಕೊಂಡು ಬಂದಳು.

ರಾಜನ ಮಗಳು ತಾಯಿಗೆ, “ಈ ಮಗುವಿಗೆ ಹಾಲು ಕುಡಿಸಿ ನೋಡಿಕೊ, ನಾನು ನಿನಗೆ ಸಂಬಳ ಕೊಡುವೆನು” ಎಂದು ಹೇಳಿದಳು.

ಆದ್ದರಿಂದ ಆ ಸ್ತ್ರೀ ತನ್ನ ಮಗುವನ್ನು ತೆಗೆದುಕೊಂಡು ಸಾಕಿದಳು. 10 ಮಗುವು ಬೆಳೆಯಿತು. ಸ್ವಲ್ಪಕಾಲದ ನಂತರ ಆ ಸ್ತ್ರೀಯು ಬಾಲಕನನ್ನು ರಾಜನ ಮಗಳ ಬಳಿಗೆ ಕರೆದುಕೊಂಡು ಬಂದಳು. ರಾಜನ ಮಗಳು ಆ ಬಾಲಕನನ್ನು ತನ್ನ ಸ್ವಂತ ಮಗನೆಂದು ಸ್ವೀಕರಿಸಿದಳು. ಆ ಬಾಲಕನನ್ನು ನೀರಿನೊಳಗಿಂದ ಎಳೆದೆನೆಂದು ಆ ಬಾಲಕನಿಗೆ “ಮೋಶೆ” ಎಂದು ಹೆಸರಿಟ್ಟಳು.

1 ಥೆಸಲೋನಿಕದವರಿಗೆ 5:12-18

ಕೊನೆಯ ಮಾತುಗಳು ಮತ್ತು ವಂದನೆಗಳು

12 ಸಹೋದರ ಸಹೋದರಿಯರೇ, ಈಗ ನಿಮ್ಮಲ್ಲಿ ಪ್ರಯಾಸದಿಂದ ಕೆಲಸ ಮಾಡುತ್ತಾ ನಿಮ್ಮನ್ನು ಪ್ರಭುವಿನ ಮಾರ್ಗದಲ್ಲಿ ನಡೆಸುವವರನ್ನು ಮತ್ತು ಉಪದೇಶಿಸುವವರನ್ನು ಗೌರವಿಸಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇವೆ. 13 ಅವರು ನಿಮ್ಮಲ್ಲಿ ಮಾಡುವ ಸೇವೆಗಾಗಿ ಅವರನ್ನು ವಿಶೇಷವಾದ ಪ್ರೀತಿಯಿಂದ ಗೌರವಿಸಿರಿ.

ನೀವೆಲ್ಲರೂ ಸಮಾಧಾನದಿಂದ ಜೀವಿಸಿರಿ. 14 ಸಹೋದರ ಸಹೋದರಿಯರೇ, ಕೆಲಸ ಮಾಡದೆ ಇರುವ ಜನರಿಗೆ ಎಚ್ಚರಿಕೆ ನೀಡಬೇಕೆಂದು ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ಹೆದರಿಕೊಂಡಿರುವವರನ್ನು ಪ್ರೋತ್ಸಾಹಿಸಿರಿ; ಬಲಹೀನರಿಗೆ ಸಹಾಯ ಮಾಡಿ; ಎಲ್ಲರ ಜೊತೆಯಲ್ಲಿ ತಾಳ್ಮೆಯಿಂದಿರಿ; 15 ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿಕೊಳ್ಳಿರಿ; ಒಬ್ಬರಿಗೊಬ್ಬರಿಗೆ ಮತ್ತು ಎಲ್ಲರಿಗೆ ಯಾವಾಗಲೂ ಒಳ್ಳೆಯದನ್ನು ಮಾಡಲು ಪ್ರಯತ್ನಿಸಿರಿ.

16 ಯಾವಾಗಲೂ ಸಂತೋಷದಿಂದಿರಿ. 17 ಎಡೆಬಿಡದೆ ಪ್ರಾರ್ಥಿಸಿರಿ. 18 ದೇವರಿಗೆ ಎಲ್ಲಾ ಕಾಲದಲ್ಲಿಯೂ ಕೃತಜ್ಞತೆಗಳನ್ನು ಸಲ್ಲಿಸಿರಿ. ಇದುವೇ ನಿಮ್ಮ ವಿಷಯವಾಗಿ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಚಿತ್ತ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International